ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯ ಹೋಟೆಲ್, ಬಸ್‌ನಿಲ್ದಾಣ ಮತ್ತು ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಚತಾ ಕಾರ್ಯ ಮಾಡುವವರಿಗೆ ವಿವಿಧ ಇಲಾಖಾ ನಿಗಮಗಳಲ್ಲಿ ಗುರುತಿನ ಚೀಟಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಇನ್ನೂ ಹಲವು ಸಫಾಯಿ ಕರ್ಮಚಾರಿಗಳು, ಸ್ವಚ್ಚತಾ ಕಾರ್ಮಿಕರಿಗೆ ಗುರುತಿನ ಚೀಟಿ ದೊರಕಿಲ್ಲ. ಕಾರ್ಮಿಕ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅವರಿಗೆ ಗುರುತಿನ ಚೀಟಿ ನೀಡಬೇಕು ಎಂದು ಸೂಚಿಸಿದರು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನಿಷೇಧ ಕಾಯ್ದೆ ಜಾರಿಗೊಂಡಿದ್ದರೂ, ದುಷ್ಟ ಪದ್ದತಿ ನಿರ್ಮೂಲನೆಗೊಳಿಸುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಲೇ ಇವೆ. ಜಿಲ್ಲೆಯಲ್ಲಿ ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಮೇಲ್ವಿಚಾರಣೆ ನಡೆಸಲಾಗುತ್ತಿದೆ. ದುರ್ಬಲ ವರ್ಗದವರನ್ನು ಸಬಲರನ್ನಾಗಿ ಮಾಡಲು ಹಾಗೂ ಪ್ರತಿಯೊಬ್ಬ ವ್ಯಕ್ತಿಯೂ ವ್ಯಕ್ತಿಗೌರವದಿಂದ ತನ್ನ ಬದುಕನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸುವಂತೆ ತಿಳಿಸಿದರು.ಪೌರ ಕಾರ್ಮಿಕರ ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಅಥವಾ ಖಾಸಗಿ ಕ್ಷೇತ್ರಗಳಲ್ಲಿ ಲಭ್ಯವಾಗಬಹುದಾದ ಉದ್ಯೋಗಾವಕಾಶಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಸೌಲಭ್ಯ ಪಡೆದುಕೊಳ್ಳುತ್ತಿರುವವರ ಹಾಗೂ ಸಂಸ್ಥೆಗಳಿಂದ ಕಾರ್ಮಿಕರ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವಿಸ್ತೃತ ಮಾಹಿತಿಯನ್ನು ಒದಗಿಸುವಂತೆ ಅವರು ಸೂಚಿಸಿದರು. ಅವಕಾಶ ವಿದ್ದಲ್ಲಿ ಅರ್ಹರನ್ನು ಗುರುತಿಸಿ, ಉದ್ಯೋಗಾವಕಾಶಗಳನ್ನು ಒದಗಿಸುವಂತೆ ಸೂಚಿಸಿದರು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವಲ್ಲಿ ಹಾಗೂ ಅವರ ಆರೋಗ್ಯದಿಂದಿರಲು ಉತ್ತಮ ಚಿಕಿತ್ಸೆ ಅಥವಾ ಆರೋಗ್ಯ ತಪಾಸಣೆ ಮಾಡಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳು ಗಮನಹರಿಸಬೇಕೆಂದು ಅವರು ಸೂಚಿಸಿದರು.ಭದ್ರಾವತಿಯಲ್ಲಿ ಖಾಯಂ ಪೌರಕಾರ್ಮಿಕರಿಗಾಗಿ ಕಾಯ್ದಿರಿಸಲಾಗಿದ್ದ ಮನೆಗಳಲ್ಲಿ ಗುತ್ತಿಗೆ ಕಾರ್ಮಿಕರು ಅಕ್ರಮ ಪ್ರವೇಶ ಮಾಡಿ, ವಾಸವಾಗಿರುವುದು ಗಮನಕ್ಕೆ ಬಂದಿದೆ. ಸಂಬಂಧಿಸಿದ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ಸಮಗ್ರ ದಾಖಲೆಗಳನ್ನು ಹೊಂದಿರುವ ಅರ್ಹರಿಗೆ ಮನೆಗಳನ್ನು ತೆರವು ಮಾಡಿಸಿಕೊಡಲು ಕ್ರಮ ವಹಿಸುವಂತೆ ಸೂಚಿಸಿದರು.
ಅಸುರಕ್ಷತೆ ಮತ್ತು ಅಪಾಯಕಾರಿಯಾಗಿರುವ ಕಾರ್ಯದಲ್ಲಿ ತೊಡಗಿರುವ ಸಫಾಯಿ ಕರ್ಮಚಾರಿಗಳಿಗೆ ಅವರ ಕುಟುಂಬದ ಅವಲಂಬಿತರಿಗೆ ಕಡ್ಡಾಯವಾಗಿ ವಿಮೆ ವ್ಯಾಪ್ತಿಗೊಳಪಡಿಸಲು ಸಂಬಂಧಿಸಿದ ಪ್ರಾಧಿಕಾರಗಳು ಕ್ರಮ ಕೈಗೊಂಡು ಅವರ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ಸೂಚಿಸಿದರು.ಮ್ಯಾನ್‌ಹೋಲ್‌ನಂತ ಅಪಾಯಕಾರಿ ಸ್ಥಳಗಳಲ್ಲಿ ಸ್ಥಚ್ಚತಾ ಕಾರ್ಯಕ್ಕೆ ಮಾನವ ಸಂಪನ್ಮೂಲವನ್ನು ಬಳಸಿಕೊಳ್ಳುತ್ತಿರುವುದು ಅಕ್ಷಮ್ಯ. ಈ ಬಗ್ಗೆ ಸಫಾಯಿ ಕರ್ಮಚಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈ ಅನಿಷ್ಟವನ್ನು ಹೋಗಲಾಡಿಸಲು ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಅವರ ಪುನರ್ವಸತಿ ಕಾಯ್ದೆ ಅನುಷ್ಟಾನಕ್ಕೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಮತ್ತಿತರರು ಇದ್ದರು.