ಹಿರಿಯ ನಾಗರಿಕರ ಗೌರವಿಸುವುದು ಎಲ್ಲರ ಕರ್ತವ್ಯ

KannadaprabhaNewsNetwork |  
Published : Oct 10, 2025, 01:00 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್    | Kannada Prabha

ಸಾರಾಂಶ

ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಶಿವಣ್ಣ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಹಿರಿಯರ ಕ್ಷೇಮದ ಜವಾಬ್ದಾರಿ ಯುವ ಜನತೆ ಮೇಲಿದೆ. ಇದನ್ನು ಆದ್ಯ ಕರ್ತವ್ಯ ಎಂದು ಭಾವಿಸಿ ಕುಟುಂಬದ ಸದಸ್ಯರೆಲ್ಲರೂ ಹಿರಿಯರನ್ನು ಗೌರವ ಆದರಗಳಿಂದ ಕಾಣಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನಿವೃತ್ತ ನೌಕರರ ಸಂಘ ಮತ್ತು ಇತರೆ ಸ್ವಯಂ ಸೇವಾಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಮತ್ತು ಸುರಕ್ಷತೆಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವಾರು ಯೊಜನೆಗಳ ಜಾರಿಗೆ ತಂದಿವೆ. 60 ವರ್ಷ ಮೇಲ್ಪಟ್ಟವರಿಗೆ ವೃದ್ಧಾಪ್ಯ ವೇತನದಡಿ 800 ರು. ಸಂಧ್ಯಾ ಸುರಕ್ಷಾ ಯೋಜನೆಯಡಿ 1200 ರು, ಪ್ರತಿ ತಿಂಗಳು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ಸರ್ಕಾರಿ ಬಸ್ ದರದಲ್ಲಿ ಶೇ.25 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆರ್.ಶಿವಣ್ಣ ಹೇಳಿದರು.

60 ವರ್ಷದ ನಂತರ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಗಮನಹರಿಸಬೇಕು. ಆರೋಗ್ಯವೇ ನಿಜವಾದ ಭಾಗ್ಯವಾಗಿದೆ. ಹಿರಿಯರು ಕುಟುಂಬದ ಇತರರೊಂದಿಗೆ ಹೊಂದಾಣಿಕೆಯಿಂದ ಇದ್ದು, ಪ್ರೀತಿ ಸ್ನೇಹದಿಂದ ವ್ಯವಹರಿಸಬೇಕು ಎಂದು ಆರ್.ಶಿವಣ್ಣ ಸಲಹೆ ನೀಡಿದರು.

ಉಪ ವಿಭಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿಯೂ ಬಾಲ್ಯ, ಯೌವ್ವನ ಹಾಗೂ ಮುಪ್ಪು ಸಹಜವಾದುದು. ಬಾಲ್ಯದಲ್ಲಿ ಮಕ್ಕಳು ಯಾರ ಮಾತೂ ಕೇಳದೆ ತಮಗೆ ತೋಚಿದ್ದನ್ನು ಮಾಡುತ್ತಾರೆ. ಇದೇ ರೀತಿ ಇಳಿ ವಯಸ್ಸಿನಲ್ಲೂ ಹಿರಿಯರು ಮಕ್ಕಳ ಹಾಗೆಯೇ ವರ್ತಿಸುತ್ತಾರೆ. ಮಕ್ಕಳನ್ನು ಜೋಪಾನ ಮಾಡುವ ರೀತಿಯಲ್ಲಿಯೇ ಹಿರಿಯರ ಕಾಳಜಿ ವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಹಿರಿಯರ ಮೇಲಿನ ದಬ್ಬಾಳಿಕೆ, ದೌರ್ಜನ್ಯ, ವಂಚಿಸುವುದು, ಆಸ್ತಿ ಪಡೆದು ಮನೆಯಿಂದ ಹೊರ ಹಾಕುವುದು ಕಂಡುಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಹಿರಿಯ ನಾಗರಿಕರಿಗಾಗಿ ಶೇ.03ರಷ್ಟು ಅನುದಾನ ಮೀಸಲಿರಿಸಲಾಗಿದೆ ಎಂದು ಉಪವಿಭಾಧಿಕಾರಿ ಮೆಹಬೂಬ್ ಜಿಲಾನಿ ಖುರೆಷಿ ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಮಾತನಾಡಿ, ಹಿರಿಯ ನಾಗರಿಕರು, ದೌರ್ಜನ್ಯ ಹಾಗೂ ವಂಚನೆಗೆ ಒಳಗಾದಲ್ಲಿ ಹಿಂಜರಿಯದೇ ಪೊಲೀಸ್ ಠಾಣೆಯ ಮೆಟ್ಟಿಲೇರಬೇಕು. ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳು ದುರ್ಬಲರ ರಕ್ಷಣೆಗಾಗಿಯೇ ಕರ್ತವ್ಯ ನಿರ್ವಹಿಸುತ್ತವೆ. ಹಿರಿಯ ನಾಗರಿಕರು ತಮಗೆ ತೊಂದರೆಯಾದಲ್ಲಿ ಜಿಲ್ಲಾ ಕಂಟ್ರೋಲ್ ರೂಂ ದೂ.ಸಂ: 9480803100 ಅಥವಾ 9480803102ಕ್ಕೆ ಕರೆ ಮಾಡುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರ ಕ್ರೀಡಾ ಸ್ಪರ್ಧೆಯಲಿ ವಿಜೇತರಾದವರಿಗೆ ಸನ್ಮಾನಿಸಿ ಪ್ರಶಸ್ತಿ ವಿತರಣೆ ಮಾಡಲಾಯಿತು. ನಗರಸಭೆ ಅಧ್ಯಕ್ಷೆ ಅನಿತಾ ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್, ವಿಕಲ ಚೇತನ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವೈಶಾಲಿ, ನಿವೃತ್ತ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಪಿ. ಪ್ರೇಮನಾಥ್, ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಆರ್. ರಂಗಪ್ಪ ರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ