ರಾಜ್ಯೋತ್ಸವಕ್ಕೆ ಅಧಿಕಾರಿ, ಸಿಬ್ಬಂದಿ ಭಾಗಿ ಕಡ್ಡಾಯ

KannadaprabhaNewsNetwork | Published : Oct 22, 2024 12:18 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾಡಳಿತದಿಂದ ನ.೧ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲಾಡಳಿತದಿಂದ ನ.೧ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ಅತಿ ಮುಖ್ಯವಾದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಗೈರುಹಾಜರಾಗುವ ಅಧಿಕಾರಿಗಳಿಗೆ ನೋಟಿಸ್:

ಕಾರ್ಯಕ್ರಮಕ್ಕೆ ಸಿದ್ಧತೆಗಳ ವ್ಯವಸ್ಥೆಗೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ರಾಜ್ಯೋತ್ಸವ ಸಂದೇಶ ತಯಾರಿಗಾಗಿ ವಿವಿಧ ಇಲಾಖೆಗಳ ಪ್ರಗತಿ ವರದಿಯನ್ನು ಅ.೨೫ರೊಳಗಾಗಿ ಸಲ್ಲಿಸುವಂತೆ ಸೂಚಿಸಿದರು. ಶಾಲೆಗಳಲ್ಲಿ ಕನ್ನಡ ಭಾಷೆ, ನೆಲ, ಜಲ ಕುರಿತು ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಕ್ವಿಜ್‌ಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಿ, ಅತ್ಯುತ್ತಮ ೩ ಜಿಲ್ಲಾಮಟ್ಟದ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಲು ತೀರ್ಮಾನಿಸಲಾಯಿತು.

ಕನ್ನಡ ನಾಮಫಲಕ ಬಳಕೆಗೆ ಸೂಚನೆ:

ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಆದೇಶದಂತೆ ನಾಮಫಲಕಗಳು ಶೇ.೬೦ರಷ್ಟು ಕನ್ನಡ ಭಾಷೆ ಒಳಗೊಂಡಿರಬೇಕು. ಶೇ.೪೦ರಷ್ಟು ಉಳಿದ ಭಾಷೆಗಳನ್ನು ಬಳಸಲು ಅವಕಾಶವಿದೆ. ಅ.೩೦ರೊಳಗೆ ಜಿಲ್ಲೆಯ ಎಲ್ಲ ನಾಮಫಲಕಗಳು ಕನ್ನಡ ಭಾಷೆ ಒಳಗೊಂಡಿರಬೇಕು. ಅ.೩೧ರ ನಂತರ ಕನ್ನಡ ಭಾಷೆ ಒಳಗೊಳ್ಳದ ನಾಮಫಲಕಗಳನ್ನು ಮುಟ್ಟುಗೋಲು ಹಾಕಿ, ಸಂಬಂಧಿಸಿದ ಅಂಗಡಿ, ಸಂಸ್ಥೆಗಳ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಹಾನಗರ ಪಾಲಿಕೆಯಿಂದ ನಗರದ ವಿವಿಧ ರಸ್ತೆ, ವೃತ್ತಗಳ ಸ್ವಚ್ಛತೆ, ದೀಪಾಲಂಕಾರ ವ್ಯವಸ್ಥೆ, ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ, ಆಸನಗಳ ವ್ಯವಸ್ಥೆ, ವಿವಿಧ ಸಾಧಕರಿಗೆ ಸನ್ಮಾನ, ಧ್ವನಿವರ್ಧಕ, ಸೌಂಡ್‌ಸಿಸ್ಟಮ್ ವ್ಯವಸ್ಥೆ, ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ, ರಾಜ್ಯೋತ್ಸವ ಅಂಗವಾಗಿ ವಿವಿಧ ಇಲಾಖೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನೊಳಗೊಂಡ ಸ್ತಬ್ಧಚಿತ್ರ ನಿರ್ಮಾಣ ಹಾಗೂ ವಿವಿಧ ಸರ್ಕಾರಿ ಕಚೇರಿಗಳನ್ನು ದೀಪಾಲಂಕಾರಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಪಂ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರಾದ ಫಯಾಜ ಕಲಾದಗಿ, ಸೋಮನಗೌಡ ಕಲ್ಲೂರ, ದೇವೇಂದ್ರ ಮಿರೇಕರ, ಭೀಮರಾಯ ಜಿಗಜಿಣಗಿ, ರಮೇಶ ಕುಲಕರ್ಣಿ, ದಯಾನಂದ ಸಾವಳಗಿ, ದಸ್ತಗೀರ ಸಾಲೋಟಗಿ ಸೇರಿದಂತೆ ಮುಂತಾದವರು ಇದ್ದರು.

ಕೋಟ್‌

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭುವನೇಶ್ವರ ಭಾವಚಿತ್ರ ಮೆರವಣಿಗೆ ಹಾಗೂ ರಾಜ್ಯೋತ್ಸವದಲ್ಲಿ ಕಡ್ಡಾಯ ಭಾಗವಹಿಸಬೇಕು. ಕಾರ್ಯಕ್ರಮದಕ್ಕೆ ಗೈರು ಹಾಜರಾಗುವ ಅಧಿಕಾರಿಗಳಿಗೆ ನೋಟಿಸ್ ನೀಡಿ, ಅಧಿಕಾರಿಗಳ ಹೆಸರನ್ನು ಪತ್ರಿಕೆಗಳಲ್ಲಿ ಪ್ರಕಟಿಸಬೇಕು. ಆ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಟಿ.ಭೂಬಾಲನ್‌, ಜಿಲ್ಲಾಧಿಕಾರಿ

Share this article