ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಕಡ್ಡಾಯ

KannadaprabhaNewsNetwork | Published : Oct 13, 2023 12:15 AM

ಸಾರಾಂಶ

ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಕ್ಕಳ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪಗ್ರತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮಕ್ಕಳ ರಕ್ಷಣಾ ನೀತಿ ಅನುಷ್ಠಾನದ ಕಾರ್ಯಸೂಚಿಗಳನ್ನು ಈಗಾಗಲೇ ಹೊರಡಿಸಲಾಗಿದೆ. ಪ್ರತಿ ಶಾಲೆಗಳಲ್ಲೂ ಮಕ್ಕಳ ಸುರಕ್ಷತಾ ಸಮಿತಿ, ಮಕ್ಕಳ ಸಹಾಯ ಗುಂಪು ರಚನೆ ಮಾಡಬೇಕು. ಮಕ್ಕಳ ದೂರುಗಳನ್ನು ಸಲ್ಲಿಸಲು ದೂರು ಪಟ್ಟಿಗೆಗಳನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಇಡಬೇಕು. ಎಲ್ಲಾ ಖಾಸಗಿ ಶಾಲೆಗಳ ಪ್ರಾರಂಭಕ್ಕೂ ಮುನ್ನ ಆಡಳಿತ ಮಂಡಳಿಗಳು ಮಕ್ಕಳ ರಕ್ಷಣಾ ಬದ್ಧತೆ ಪತ್ರಕ್ಕೆ ಸಹಿ ಹಾಕುವುದು ಕಡ್ಡಾಯವಾಗಿದೆ. ಮಕ್ಕಳ ರಕ್ಷಣಾ ಸಮಿತಿಯಿಂದ ಖಾಸಗಿ ಶಾಲೆಗಳ ಪರಿಶೀಲನೆಗೆ ತೆರಳಿದಾಗ ಸಂಪೂರ್ಣವಾಗಿ ಸಹಕಾರ ನೀಡಬೇಕು ಎಂದರು.

ಅತಿಥಿ ಶಿಕ್ಷಕರ ಹಿನ್ನೆಲೆ ಪರಿಶೀಲಿಸಿ:

ಜಿಲ್ಲೆಯ ಕೆಲವು ಖಾಸಗಿ ಶಾಲೆಗಳು ಮಕ್ಕಳ ರಕ್ಷಣಾ ಅಧಿಕಾರಿಗಳ ಪರಿಶೀಲನೆಗೆ ಅನುಮತಿಸದೇ ಕಾರ್ಯಚರೆಣೆಗೆ ಅಡ್ಡಿಪಡಿಸಿದ ಘಟನೆಗಳು ಕಂಡುಬಂದಿವೆ. ಇವುಗಳ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೂಕ್ತ ನಿರ್ದೇಶನವನ್ನು ಖಾಸಗಿ ಶಾಲೆಗಳಿಗೆ ನೀಡಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಪೋಕ್ಸೋ ಕಾಯ್ದೆಯ ಕುರಿತು ಜಾಗೃತಿ ಕಾರ್ಯಗಾರ ಆಯೋಜಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸುವಾಗ ಅವರ ಹಿನ್ನೆಲೆ ಪರಿಶೀಲಿಸಿ ನೇಮಕ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾಡಳಿತ ಕಾರ್ಯಕ್ಕೆ ಮೆಚ್ಚುಗೆ:

ಚಿತ್ರದುರ್ಗ ಜಿಲ್ಲೆಯ ಮಕ್ಕಳ ರಕ್ಷಣಾ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಹೊಲಿಸಿದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ. ಎಲ್ಲಾ ಇಲಾಖೆಗಳ ಸಮನ್ವಯ ಕಾರ್ಯದಿಂದ ಸಂಕಷ್ಟದಲ್ಲಿರುವ ಬಹಳಷ್ಟು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ದಿವ್ಯಪ್ರಭು, ಸಿಇಓ ಎಸ್.ಜೆ.ಸೋಮಶೇಖರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಧಿಕಾರಿ ಸುಬ್ರಾನಾಯ್ಕ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

209 ಬಾಲ್ಯ ವಿವಾಹ ಪ್ರಕರಣ ದಾಖಲು

ಜಿಲ್ಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ಇರುವ ಹೆಣ್ಣುಮಕ್ಕಳು ಗರ್ಭಧರಿಸಿರುವ ಕುರಿತು 209 ಪ್ರಕರಣಗಳು ಆರೋಗ್ಯ ಇಲಾಖೆಯಿಂದ ಗುರುತಿಸಲ್ಪಟ್ಟಿವೆ. ತಾಯಿ ಕಾರ್ಡ್ ನೀಡುವ ವೇಳೆ ಜನ್ಮದಿನಾಂಕ ಪರಿಶೀಲನೆಯಿಂದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸಂಬಂಧಪಟ್ಟವರ ಮೇಲೆ ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಪ್ರಾಪ್ತೆ ಗರ್ಭಿಣಿಯರನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣಗಳನ್ನು ಬಾಲ ನ್ಯಾಯ ಮಂಡಳಿಗೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ರೇಣುಪ್ರಸಾದ್ ಸಭೆಯಲ್ಲಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ದಾಖಲಾದ ಒಟ್ಟು 87 ಪೋಕ್ಸೋ ಪ್ರಕರಣಗಳಲ್ಲಿ 29 ತನಿಖಾ ಹಂತ, 57 ವಿಚಾರಣೆ ಹಂತದಲ್ಲಿವೆ. 1 ಪ್ರಕರಣದಲ್ಲಿ ಖುಲಾಸೆಯಾಗಿದೆ. ಐಪಿಸಿ 363 ಅಡಿ 83 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 40 ಸುಳ್ಳು ಪ್ರಕರಣಗಳಿವೆ. 1 ಪ್ರಕರಣ ಬೇರೆ ಜಿಲ್ಲೆಗೆ ವರ್ಗಾಹಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಜೆ.ಕುಮಾರಸ್ವಾಮಿ ಸಭೆಯಲ್ಲಿ ಮಾಹಿತಿ ನೀಡಿದರು.ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗಿರುವ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯವೈಖರಿ ಕುರಿತು ಡಾ.ಕೆ.ಟಿ.ತಿಪ್ಪೇಸ್ವಾಮಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಕೃಷಿ ಹೊಂಡದಲ್ಲಿ ಮುಳುಗಿ 328 ಮಕ್ಕಳ ಮೃತ್ಯು :

ಮಕ್ಕಳ ರಕ್ಷಣೆ ದೃಷ್ಟಿಯಿಂದ ಕೃಷಿ ಹೊಂಡ, ಕಲ್ಲು ಕ್ವಾರಿ ಹಾಗೂ ಇತರ ಜಲಮೂಲಗಳ ಸುತ್ತ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಆಯೋಗ ಪ್ರಮಾಣಿಕೃತ ಕಾರ್ಯಾಚರಣೆ ವಿಧಾನಗಳನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಕೃಷಿ ಹೊಂಡದಲ್ಲಿ 328 ಮಕ್ಕಳು ಮುಳುಗಿ ಮೃತಪಟ್ಟಿದ್ದಾರೆ. ಇದು ತುಂಬಾ ಕಳವಳಕಾರಿ ವಿಷಯವಾಗಿದೆ. ಜಿಲ್ಲಾ ಪಂಚಾಯಿತಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಇದರ ಬಗ್ಗೆ ಗಮನ ಹರಿಸಬೇಕು. ಕೃಷಿ ಹೊಂಡಗಳ ಸುತ್ತಲೂ ಬೇಲಿ ಅಳವಡಿಸಬೇಕು. ಮಕ್ಕಳು ನೀರಿನಲ್ಲಿ ಮುಳುಗದಂತೆ ಕೃಷಿ ಹೊಂಡಗಳ ತಾಂತ್ರಿಕ ರಚನೆ ಮಾಡಬೇಕು ಎಂದು ಡಾ.ಕೆ.ಟಿ.ತಿಪ್ಪೇಸ್ವಾಮಿ ತಾಕೀತು ಮಾಡಿದರು.

Share this article