ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಮೂಡಿಸುವುದು ಅವಶ್ಯ-ಕೆ.ಸಿ. ಸದಾನಂದಸ್ವಾಮಿ

KannadaprabhaNewsNetwork |  
Published : Aug 27, 2024, 01:33 AM IST
೨೬ಎಚ್‌ವಿಆರ್೩ | Kannada Prabha

ಸಾರಾಂಶ

ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಎಲ್ಲರಿಗೂ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಹೇಳಿದರು.

ಹಾವೇರಿ: ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಎಲ್ಲರಿಗೂ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಅಭಿಯೋಜನಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಪೋಕ್ಸೋ ಕಾಯ್ದೆ ೨೦೧೨ ಮತ್ತು ಬಾಲ ನ್ಯಾಯ ಕಾಯ್ದೆ ೨೦೧೫ರ ಕುರಿತು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಿಗೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯರಿಗೆ ಹಾಗೂ ಸರ್ಕಾರಿ ವೈದ್ಯರಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬಚಪನ್ ಬಚಾವೋ ಅಭಿಯಾನದಡಿ ಹಾಗೂ ದಿನನಿತ್ಯದ ತಮ್ಮ ವೃತ್ತಿಯಲ್ಲಿ ಬರುವ ಮಕ್ಕಳ ದೌರ್ಜನ್ಯ ಹಾಗೂ ಬಾಲನ್ಯಾಯ ಕಾಯ್ದೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅರಿತುಕೊಂಡು ಬಗೆಹರಿಸುವ ಉದ್ದೇಶದಿಂದ ಈ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿ ಭಾಗವಹಿಸಿದ ಪ್ರತಿನಿಧಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಬಹಳ ಸೂಕ್ಷ್ಮ ಪ್ರಕರಣಗಳಾಗಿರುವುದರಿಂದ ಅವುಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕಾಗುತ್ತದೆ ಎಂದು ಹೇಳಿದರು.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸಿ. ಸದಾನಂದಸ್ವಾಮಿ ಅವರು ಪ್ರೋಕ್ಸೋ ಕಾಯ್ದೆ-೨೦೧೨ಎರ ಕುರಿತು ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಸಿ.ಜೆ.ಎಂ. ಪ್ರಕಾಶ ವಿ ಅವರು ಬಾಲ ನ್ಯಾಯ ಕಾಯ್ದೆ ೨೦೧೫ರ ಬಗ್ಗೆ ಉಪನ್ಯಾಸ ನೀಡಿದರು.ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಬಾಲನ್ಯಾಯ ಮಂಡಳಿ ಪ್ರಧಾನ ದಂಡಾಧಿಕಾರಿ ಶೈಲಜಾ ಎಚ್.ವಿ., ಪ್ರಧಾನ ದಿವಾಣಿ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ರವಿಪ್ರಕಾಶ ಟಿ.ಅವಿನ, ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಬಿಪಿನ ಎಚ್.ಎಂ., ಸರ್ಕಾರಿ ಅಭಿಯೋಜಕಿ ಸರೋಜಾ ಕೂಡಲಗಿಮಠ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಉಪಸ್ಥಿತರಿದ್ದರು. ಮಂಗಳಾ ಸ್ವಾಗತಿಸಿದರು. ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಾಲಮುಕುಂದ ರಮೇಶರಾವ್ ಮುತಾಲಿಕದೇಸಾಯಿ ವಂದಿಸಿದರು.

PREV

Recommended Stories

‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ