ಗ್ರಾಮೀಣರಲ್ಲಿ ಆರೋಗ್ಯದ ಅರಿವು ಮೂಡಿಸುವುದು ಅಗತ್ಯ

KannadaprabhaNewsNetwork |  
Published : Oct 05, 2026, 01:30 AM IST
ಮಾಗಡಿ ತಾಲೂಕಿನ  ಚಕ್ರಬಾವಿ ಗ್ರಾಮದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ  ಪರಿಶೀಲನೆ ನೀಡಿದರು. | Kannada Prabha

ಸಾರಾಂಶ

ಮಾಗಡಿ: ಗ್ರಾಮೀಣರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು, ಕೇವಲ ಆರೋಗ್ಯ ತಪಾಸಣೆಗೆ ಸೀಮಿತವಾಗದೆ, ಅಗತ್ಯವಿರುವವರಿಗೆ ಮುಂದಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಹೇಳಿದರು

ಮಾಗಡಿ: ಗ್ರಾಮೀಣರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು, ಕೇವಲ ಆರೋಗ್ಯ ತಪಾಸಣೆಗೆ ಸೀಮಿತವಾಗದೆ, ಅಗತ್ಯವಿರುವವರಿಗೆ ಮುಂದಿನ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಹೇಳಿದರು.

ತಾಲೂಕಿನ ಚಕ್ರಬಾವಿಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಅಗತ್ಯವಿದ್ದಲ್ಲಿ ಸ್ಟಂಟ್ ಅಳವಡಿಕೆ ಸೇರಿದಂತೆ ಸೂಕ್ತ ಚಿಕಿತ್ಸೆ ಕೊಡಿಸಲಾಗುವುದು. ವಿವಿಧ ಆರೋಗ್ಯ ಸಮಸ್ಯೆಗಳಿಗೆ ಸರ್ಕಾರಿ ಯೋಜನೆಗಳಿಂದ ಉಚಿತ ಶಸ್ತ್ರಚಿಕಿತ್ಸೆ ಕಲ್ಪಿಸಲಾಗುವುದು, ಬಿಪಿ ಮತ್ತು ಮಧುಮೇಹವನ್ನು ನಿರ್ಲಕ್ಷಿಸುವುದು ಅಪಾಯಕಾರಿ. ಈ ಎರಡೂ ಕಾಯಿಲೆಗಳನ್ನು ನಿಯಮಿತವಾಗಿ ಪರೀಕ್ಷಿಸಿಕೊಂಡು ವೈದ್ಯರ ಸಲಹೆಯಂತೆ ಔಷಧ ಸೇವಿಸಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕ್ಯಾನ್ಸರ್ ಕುರಿತು ಇನ್ನಷ್ಟು ಜಾಗೃತಿ ಮೂಡಿಸಬೇಕಾಗಿದೆ. ಕ್ಯಾನ್ಸರ್ ಬಂದಿರುವ ವ್ಯಕ್ತಿಯನ್ನು ಕುಟುಂಬ ಹಾಗೂ ಸಮಾಜ ನಿರ್ಲಕ್ಷಿಸಬಹುದು ಎಂಬ ಭಯದಿಂದ ಅನೇಕರು ತಪಾಸಣೆಗೆ ಮುಂದಾಗುವುದಿಲ್ಲ. ಆದರೆ ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿದರೆ ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ವಿಶೇಷವಾಗಿ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. ಶಾಲಾ ಹಂತದ ಹೆಣ್ಣುಮಕ್ಕಳಿಗೆ ಲಭ್ಯವಿರುವ ಲಸಿಕೆ ಅರಿವು ಮೂಡಿಸಬೇಕು ಎಂದರು.

ಗ್ರಾಮೀಣ ಆರೋಗ್ಯ ಸೇವೆ ಬಲಪಡಿಸಲು ಕ್ರಮ:

ತಾಲೂಕಿನ ವಿವಿಧ ಭಾಗಗಳಲ್ಲಿ ಆರೋಗ್ಯ ಸೇವೆ ಬಲಪಡಿಸುವ ಉದ್ದೇಶದಿಂದ ಎನ್‌ಎಂ ಕ್ವಾರ್ಟಸ್‌ಗಳನ್ನು ನಿರ್ಮಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿಯೇ ಬಿಪಿ, ಶುಗರ್ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗುವುದು. ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ, ಚಕ್ರಬಾವಿಯಲ್ಲಿಯೂ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಮಾಗಡಿಯಲ್ಲಿ ಆಸ್ಪತ್ರೆ ಮೂಲಸೌಕರ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಜೊತೆಗೆ ತಾಯಿ-ಮಗು ಆಸ್ಪತ್ರೆ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ನಿಯಮಿತ ವ್ಯಾಯಾಮ, ನಡಿಗೆ, ಸಮತೋಲನ ಆಹಾರ ಮತ್ತು ವೈದ್ಯಕೀಯ ತಪಾಸಣೆಯನ್ನು ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು. ಆರೋಗ್ಯವಂತರಾಗಿದ್ದಾಗ ಮಾತ್ರ ಕುಟುಂಬ ಮತ್ತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯ. ಚಕ್ರಬಾವಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಸೂಚಿಸಿದರು.

ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ನೀರಾವರಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆದಾಡಬಾರದು ಎಂಬ ಉದ್ದೇಶದಿಂದ ಪ್ರಜಾಸೇವೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು. ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಬಮುಲ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ದಿಶಾ ಸಮಿತಿ ಮಾಜಿ ಸದಸ್ಯ ಜೆ.ಪಿ.ಚಂದ್ರೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಸಿ.ಬಿ.ರವೀಂದ್ರ, ಚಕ್ರಬಾವಿ ವಿಎಸ್‌ಎಸ್‌ಎನ್ ಅಧ್ಯಕ್ಷ ರಾಜಣ್ಣ, ಗುತ್ತಿಗೆದಾರ ಶ್ರೀಧರ್, ಭೈರೇಶ್, ಯುವ ಮುಖಂಡ ದೀಪು ಇತರರು ಭಾಗವಹಿಸಿದ್ದರು.

(ಫೋಟೋ ಕ್ಯಾಪ್ಷನ್‌)

ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಪೌರಾಡಳಿತ ಸಚಿವ ಬಾಲಕೃಷ್ಣ ಚಾಲನೆ ನೀಡಿದರು. ಬಮುಲ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ದಿಶಾ ಸಮಿತಿ ಮಾಜಿ ಸದಸ್ಯ ಚಂದ್ರೇಗೌಡ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾನೆಂದಿಗೂ ಮರೆಯದ ನಾಯಕ ಸಿದ್ದರಾಮಯ್ಯ: ಶಾಸಕ ಕೃಷ್ಣಮೂರ್ತಿ
ಚಿರತೆ ದಾಳಿಗೆ ಕರು ಬಲಿ: ಗ್ರಾಮಸ್ಥರಲ್ಲಿ ಆತಂಕ