ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ವಿದ್ಯಾರ್ಥಿ ಯುವಜನರಲ್ಲಿ ವೈಜ್ಞಾನಿಕ ಚಿಂತನೆ ಹಾಗೂ ಮನೋಭಾವ ಬೆಳೆಸುವುದು ಇಂದಿನ ತುರ್ತು ಅಗತ್ಯಗಳಲ್ಲಿ ಒಂದಾಗಿದೆ ಎಂದು ಇಸ್ರೋ ವಿಜ್ಞಾನಿ ಹೆಚ್.ಎಲ್.ಶ್ರೀನಿವಾಸ ಹೇಳಿದರು.ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಅಂಗವಾಗಿ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇಸ್ರೋ ಸಾಧನೆಗಳ ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಿದ ಅವರು 2023 ರ ಆಗಸ್ಟ್ 23 ರಂದು ಭಾರತದ ಹೆಮ್ಮೆಯ ಚಂದ್ರಯಾನ -3 ರ ಮೂಲಕ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿತ್ತು. ಇದರ ಸ್ಮರಣೆಗಾಗಿ ಪ್ರತಿವರ್ಷವೂ ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ ಎಂದರು.
ಬಾಹ್ಯಾಕಾಶ ಅನ್ವೇಷಣೆಯಲ್ಲಿ ಭಾರತದ ಮಹತ್ವದ ಸಾಧನೆಗಳನ್ನು ಗುರುತಿಸಿ ವಿಜ್ಞಾನಿಗಳನ್ನು ಗೌರವಿಸಲು ಸೂಕ್ತವಾದ ದಿನವಾಗಿದೆ. ಈ ಮೂಲಕ ದೇಶದ ತಾಂತ್ರಿಕ ಸಾಮರ್ಥ್ಯಕ್ಕೆ ಬೆಳಕು ಚೆಲ್ಲಿ, ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನ ಹೊಂದಲು, ಆಸಕ್ತಿ ಮೂಡಿಸಲಿದೆ. ಅದರೊಡನೆ ಜನಸಾಮಾನ್ಯರಲ್ಲಿ ಬಾಹ್ಯಾಕಾಶ ಅನ್ವೇಷಣೆಗಳಿಂದ ದೊರೆಯುವ ಹತ್ತು ಹಲವಾರು ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶ. ಇದು ಜನರಲ್ಲಿ ರಾಷ್ಟ್ರೀಯ ಹೆಮ್ಮೆ ಮತ್ತು ಐಕ್ಯತೆ, ವೈಜ್ಞಾನಿಕ ಚಿಂತನೆ, ವೈಜ್ಞಾನಿಕ ಮನೋಭಾವ ಬೆಳೆಸಲು ಸೂಕ್ತವಾಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಬಾಹ್ಯಾಕಾಶ ಕ್ಷೇತ್ರಕ್ಕೆ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಅಧ್ಯಕ್ಷ ಡಾ.ಜಿ. ಎನ್. ಮಲ್ಲಿಕಾರ್ಜುನಪ್ಪ, ವಿಜ್ಞಾನದ ನಿರಂತರ ಅನ್ವೇಷಣೆ, ನಾವೀನ್ಯತೆ ಮತ್ತು ಸಾಮಾಜಿಕ ಕಾಳಜಿ ಇಲ್ಲದಿದ್ದರೆ, ನಾವು ಆದಿ ಮಾನವನ ಹಂತದಲ್ಲಿಯೇ ಕೊಳೆಯಬೇಕಾಗಿತ್ತು. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ, ಭಾರತೀಯರು ನೋಬೆಲ್ ಪ್ರಶಸ್ತಿ ಪಡೆಯಲಾಗಿಲ್ಲವೆಂದರು.
ವಿಜ್ಞಾನ ಮತ್ತು ತಂತ್ರಜ್ಞಾನಗಳ ಅರಿವು ಕೇವಲ ಆರ್ಥಿಕ ಬದುಕಿಗೆ ಮೀಸಲಾಗದೆ, ಸಾಮಾಜಿಕ ಅಸಮತೋಲನವನ್ನು ತೊಡೆದು ಹಾಕಬೇಕು. ಪ್ರತಿಯೊಬ್ಬರೂ ವೈಜ್ಞಾನಿಕ ಮನೋಭಾವವನ್ನು ಮೈಗೂಡಿಸಿಕೊಂಡು ಬದುಕುವುದು ಒಳ್ಳೆಯದು ಎಂದರು.ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ರವಿಕಾಂತ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಉಪಾಧ್ಯಕ್ಷ ಚಳ್ಳಕೆರೆ ಯರ್ರಿಸ್ವಾಮಿ, ನಿರ್ದೇಶಕ ಡಾ.ಈ.ರುದ್ರಮುನಿ, ಕೆ.ವಿ.ನಾಗಲಿಂಗರೆಡ್ಡಿ ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿದ್ಯಾ ವಿಜ್ಞಾನಿಗಳನ್ನು ಪರಿಚಯ ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಭೌತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ.ಬೊಮ್ಮಲಿಂಗಯ್ಯ ವಂದಿಸಿದರು. ಕಾರ್ಯಕ್ರಮ ಸಂಚಾಲಕ ಹೆಚ್.ಮಂಜುನಾಥ್ ನಿರೂಪಿಸಿದರು.