ಕನ್ನಡಪ್ರಭ ವಾರ್ತೆ ಹಾಸನಜಗತ್ತಿನಲ್ಲಿಯೇ ಅತಿ ದೊಡ್ಡ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ ಸಂವಿಧಾನದ ಮಹತ್ವ ಮತ್ತು ಆಶಯಗಳ ಕುರಿತು ಪ್ರತಿಯೊಬ್ಬರೂ ಅರಿವು ಬೆಳೆಸಿಕೊಳ್ಳಬೇಕು ಎಂದು ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯ ರಾಜೇಶ್ ಹೇಳಿದರು.ನಗರದ ರಾಜಕುಮಾರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ದಿನ ಆಚರಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ೧೯೪೬ರಲ್ಲಿ ಕ್ಯಾಬಿನೆಟ್ ಮಿಷನ್ ಯೋಜನೆಯಡಿ ಸಂವಿಧಾನ ರಚನಾ ಸಭೆಗೆ ಚಾಲನೆ ದೊರೆಯಿತು. ಡಾ. ಬಿ. ಆರ್. ಅಂಬೇಡ್ಕರ್ ಅವರು ಕರಡು ಸಮಿತಿಯ ಅಧ್ಯಕ್ಷರಾಗಿ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದರು. ಸುಮಾರು ೨ ವರ್ಷ ೧೧ ತಿಂಗಳು ೧೮ ದಿನಗಳ ಸುದೀರ್ಘ ಪರಿಶ್ರಮದ ಫಲವಾಗಿ ಸಿದ್ಧಗೊಂಡ ಸಂವಿಧಾನವನ್ನು ೧೯೪೯ರ ನವೆಂಬರ್ ೨೬ರಂದು ಅಂಗೀಕರಿಸಲಾಯಿತು. ೧೯೫೦ರ ಜನವರಿ ೨೬ರಂದು ಜಾರಿಗೆ ಬಂದಿದ್ದು, ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತಿದೆ ಎಂದು ವಿವರಿಸಿದರು. ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಹಕ್ಕು, ರಕ್ಷಣೆ, ಭದ್ರತೆ, ಸಮಾನತೆ ಹಾಗೂ ಅಭಿವೃದ್ಧಿಯ ಅವಕಾಶಗಳನ್ನು ಕಲ್ಪಿಸುವ ಭದ್ರ ಬುನಾದಿಯಾಗಿದೆ. ಬಡವರು ಸೇರಿದಂತೆ ಎಲ್ಲ ವರ್ಗದ ಮಕ್ಕಳು ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಗಳಿಸಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಡಾ. ಬಿ. ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆ ಅನನ್ಯವಾಗಿದ್ದು, ಅವರ ಹೋರಾಟ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಸ್ಮರಿಸಿ ಅವರ ಮಾರ್ಗದಲ್ಲಿ ಸಾಗಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ಅಂಗವಾಗಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಶಾಲೆಯ ಎಲ್ಲ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯ ಜಯಕುಮಾರ್, ಶಿಕ್ಷಕಿ ರಾಧಾ, ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯ ರಂಗನಾಥ್, ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.