ಮಕ್ಕಳಿಗೆ ಶಿಕ್ಷಣ, ಸುರಕ್ಷಿತ ಬಾಲ್ಯ ಒದಗಿಸುವುದು ನಮ್ಮ ಜವಾಬ್ದಾರಿ

KannadaprabhaNewsNetwork |  
Published : Nov 16, 2026, 02:00 AM IST
ಬಳ್ಳಾರಿ ಸ್.ಎನ್. ಪೇಟೆಯ ಎಂಎಂಟಿಸಿ ಕಾಲೋನಿಯಲ್ಲಿ ಜರುಗಿದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್, ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳ ವಿತರಿಸಲಾಯಿತು. ಶಾಸಕ ವೈ.ಎಂ.ಸತೀಶ್, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಇತರರಿದ್ದರು.  | Kannada Prabha

ಸಾರಾಂಶ

ಬಾಲ್ಯವು ಮನುಷ್ಯನ ಜೀವನದ ಅತ್ಯಂತ ಸುಂದರ, ಮುಗ್ಧತೆ ಮತ್ತು ಸಂತೋಷದಿಂದ ಕೂಡಿದ ಅಮೂಲ್ಯ ಘಟ್ಟವಾಗಿದೆ

ಬಳ್ಳಾರಿ: ಇಂದಿನ ಮಕ್ಕಳೇ ನಾಳಿನ ಭಾರತದ ಪ್ರಜೆಗಳು. ಮಕ್ಕಳ ದಿನಾಚರಣೆ ಕೇವಲ ಆಟ-ಪಾಠ, ಸಿಹಿ ಹಂಚಿಕೆ ಮತ್ತು ಸಂಭ್ರಮಕ್ಕೆ ಸೀಮಿತವಾಗದೆ, ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ, ಉತ್ತಮ ಸಂಸ್ಕಾರ ಹಾಗೂ ಸುರಕ್ಷಿತ ಬಾಲ್ಯ ಒದಗಿಸುವ ನಮ್ಮೆಲ್ಲರ ಜವಾಬ್ದಾರಿ ನೆನಪಿಸುವ ಮಹತ್ವದ ದಿನವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್ ಹೇಳಿದರು.

ನಗರದ ಎಸ್.ಎನ್. ಪೇಟೆಯ ಎಂಎಂಟಿಸಿ ಕಾಲನಿಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್, ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಲ್ಯವು ಮನುಷ್ಯನ ಜೀವನದ ಅತ್ಯಂತ ಸುಂದರ, ಮುಗ್ಧತೆ ಮತ್ತು ಸಂತೋಷದಿಂದ ಕೂಡಿದ ಅಮೂಲ್ಯ ಘಟ್ಟವಾಗಿದೆ. ಈ ಅವಧಿಯಲ್ಲಿ ಮಕ್ಕಳಿಗೆ ದೊರೆಯುವ ಶಿಕ್ಷಣ, ಸಂಸ್ಕಾರ, ಪ್ರೀತಿ, ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಅವರ ಭವಿಷ್ಯದ ಬದುಕಿಗೆ ಭದ್ರ ಬುನಾದಿಯಾಗುತ್ತದೆ. ಹೀಗಾಗಿ ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು. ಬಡತನ ಸೇರಿದಂತೆ ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯ ಕಲ್ಪಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಮಕ್ಕಳ ಹಕ್ಕು ರಕ್ಷಿಸುವುದರ ಜತೆಗೆ ಅವರಿಗೆ ಭಯಮುಕ್ತ ಹಾಗೂ ಸುರಕ್ಷಿತ ವಾತಾವರಣ ನಿರ್ಮಿಸಿಕೊಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು. ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. ತಂದೆ-ತಾಯಿ ಹಾಗೂ ಗುರುಗಳ ಮಾರ್ಗದರ್ಶನ ಗೌರವದಿಂದ ಸ್ವೀಕರಿಸಿ ಶಿಸ್ತು, ಸಮಯಪ್ರಜ್ಞೆ ಮತ್ತು ಮಾನವೀಯ ಮೌಲ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ ಮಾತನಾಡಿ, ಮಕ್ಕಳ ಜೀವನದಲ್ಲಿ ತಂದೆ-ತಾಯಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ತಂದೆ-ತಾಯಿಯರೇ ಮಕ್ಕಳಿಗೆ ಮೊದಲ ಗುರುಗಳು. ಅವರು ನೀಡುವ ಪ್ರೀತಿ, ಕಾಳಜಿ, ಮಾರ್ಗದರ್ಶನ ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಜ್ಞಾನ ನೀಡುವುದರ ಜತೆಗೆ ಅವರ ಭವಿಷ್ಯ ರೂಪಿಸುವ ಕೆಲಸ ಮಾಡುತ್ತಾರೆ. ಆದ್ದರಿಂದ ಮಕ್ಕಳು ತಂದೆ-ತಾಯಿ ಮತ್ತು ಗುರುಗಳನ್ನು ಸದಾ ಗೌರವದಿಂದ ಕಾಣಬೇಕು ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ ಸುಮಾರು 200 ಮಕ್ಕಳಿಗೆ ಶಾಲಾ ಬ್ಯಾಗ್, ಪುಸ್ತಕಗಳು ಸೇರಿದಂತೆ ಅಗತ್ಯ ಕಲಿಕಾ ಸಾಮಗ್ರಿ ವಿತರಿಸಲಾಯಿತು. ಮಹಾನಗರ ಪಾಲಿಕೆ ಸದಸ್ಯ ಕೆ.ಎಸ್. ಅಶೋಕ್ ಕುಮಾರ್, ಶ್ರೀನಿವಾಸ್ ಮೋತ್ಕರ್ ಸೇರಿದಂತೆ ಎಂಎಂಟಿಸಿ ಕಾಲನಿಯ ನಿವಾಸಿಗಳು, ಸ್ಥಳೀಯ ಮುಖಂಡರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಸಂಪರ್ಕ ಹೆಚ್ಚಳದಿಂದ ಅಭಿವೃದ್ಧಿಗೆ ಪೂರಕ: ಶಾಸಕ ದಿನಕರ ಶೆಟ್ಟಿ
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಕೆ.ರುದ್ರಪ್ಪ ಆಯ್ಕೆ