ಸೌಲಭ್ಯ ಕೋರಿ ಪ್ರಸ್ತಾವನೆ ಆಗದಿರುವುದು ವಿಷಾದನೀಯ

KannadaprabhaNewsNetwork | Published : May 4, 2025 1:32 AM

ಸಾರಾಂಶ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯ ಅಲೆಮಾರಿ ಸಮುದಾಯಗಳಿಗೆ ೧ ಕೋಟಿ ೪೯ ಲಕ್ಷ ಅನುದಾನ ನಿಗದಿಪಡಿಸಲಾಗಿದೆ. ಆದರೆ ಜಿಲ್ಲೆಯಿಂದ ಯಾವುದೇ ಯೋಜನೆ, ಕಾರ್ಯಕ್ರಮಗಳಿಗೆ ಪ್ರಸ್ತಾವನೆ ಸಲ್ಲಿಕೆಯಾಗದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅವಕಾಶ ವಂಚಿತ, ಶೋಷಿತ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ೧೦ ಕೋಟಿ ರು. ಅನುದಾನ ಮೀಸಲಿಟ್ಟಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆದಿವಾಸಿ ಅಲೆಮಾರಿ ಮತ್ತು ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು. ಸಂವಿಧಾನಬದ್ಧವಾಗಿ ಅವಶ್ಯವಿರುವ ಸೌಲಭ್ಯ, ಸವಲತ್ತುಗಳನ್ನು ಒದಗಿಸಿ ಕಟ್ಟಕಡೆಯ ತಳ ಸಮುದಾಯಗಳಿಗೂ ತಲುಪಿಸಿ ಪ್ರಗತಿ ಪಥದತ್ತ ಕೊಂಡೊಯ್ಯುವುದು ಸರ್ಕಾರದ ಉದ್ದೇಶ ಹಾಗೂ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗಾಗಿ ೧೦ ಕೋಟಿ ರು. ಗಳನ್ನು ಸರ್ಕಾರ ಮೀಸಲಿಟ್ಟಿದೆ ಎಂದರು.

ಪರಿಶಿಷ್ಟ ಜಾತಿಯ ೫೧, ಪರಿಶಿಷ್ಟ ಪಂಗಡದ ೨೩ ಮತ್ತು ೨೫ ಅರಣ್ಯವಾಸಿಗಳು ಸೇರಿದಂತೆ ಒಟ್ಟು ೯೯ ಅಲೆಮಾರಿ ಜನಾಂಗಗಳನ್ನು ಗುರುತಿಸಲಾಗಿದೆ. ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಿರುವ ಬಗ್ಗೆ ವಾಸ್ತವ ಸ್ಥಿತಿಗತಿ ಅರಿಯಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಾಗುತ್ತಿದೆ. ಅಲೆಮಾರಿ, ಅರೆ ಅಲೆಮಾರಿಗಳಿಗೆ ಮೈಕ್ರೋ ಕ್ರೆಡಿಟ್ ಪ್ರೇರಣಾ ಸಾಲ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಬ್ಯಾಂಕ್‌ಗಳಲ್ಲಿ ಅಲೆಮಾರಿ ಜನರಿಗೆ ಸಾಲ ಸೌಲಭ್ಯ ನೀಡಲು ಜಾತಿ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್ ಹೊರತುಪಡಿಸಿ ಉಳಿದ ಯಾವುದೇ ದಾಖಲೆಗಳಿಂದ ವಿನಾಯಿತಿ ನೀಡಲಾಗಿದೆ. ಶಿಕ್ಷಣ ಪ್ರತಿಯೊಬ್ಬರ ಹಕ್ಕು ಆಗಿದ್ದು, ಶೇ. ೧೦ರಷ್ಟು ಮೀಸಲಾತಿ ಕಲ್ಪಿಸಿದೆ. ಅಲೆಮಾರಿ ಜನರ ಮಕ್ಕಳಿಗೆ ವಸತಿ ಶಾಲೆಗಳು, ಕ್ರೈಸ್ ಶಾಲೆಗಳಿಗೆ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೆ ಉಚಿತವಾಗಿ ಸೇರಿಸಲು ಅವಕಾಶವಿದೆ ಎಂದರು.

ಅಲೆಮಾರಿ ಜನರಿಗೆ ಸಾಲ ಸೌಲಭ್ಯಗಳು ನಿಗದಿತ ಕಾಲಮಿತಿಯಲ್ಲಿ ಸಮರ್ಪಕವಾಗಿ ದೊರೆಯಬೇಕು. ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ಅರಿವಿನ ಕೊರತೆ ಇದೆ. ಈ ಬಗ್ಗೆ ಜಾಗೃತಿ ಶಿಬಿರ ಆಯೋಜಿಸಿ ಅರಿವು ಮೂಡಿಸುವುದು ಎಲ್ಲಾ ಇಲಾಖೆ ಅಧಿಕಾರಿಗಳ ಜವಾಬ್ದಾರಿ ಹಾಗೂ ಕರ್ತವ್ಯವಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ಸಭೆಯಲ್ಲಿ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಭೂ ಒಡೆತನ ಯೋಜನೆಯಡಿ ನಿವೇಶನ, ಸ್ಮಶಾನ, ಜಮೀನು ಇಲ್ಲದ ಅಲೆಮಾರಿಗಳಿಗೆ ಸರ್ಕಾರಿ ಜಾಗ ಗುರುತಿಸಿ ಮಂಜೂರು ಮಾಡಬೇಕು. ಸರ್ಕಾರಿ ಜಾಗ ಲಭ್ಯವಿಲ್ಲದಿದ್ದರೆ ಖಾಸಗಿ ಜಮೀನು ಖರೀದಿಸಿ ನೀಡಬೇಕು. ಅಲೆಮಾರಿ ಪೋಷಕರು ಮಕ್ಕಳನ್ನು ವಸತಿ ಶಾಲೆಗಳಿಗೆ ದಾಖಲಿಸಲು ಆಸಕ್ತಿ ತೋರದಿರುವುದು ಕಂಡುಬಂದಿದೆ. ಪೋಷಕರನ್ನು ಗುರುತಿಸಿ, ಅಧಿಕಾರಿಗಳು ತಿಳಿಹೇಳಬೇಕು. ಅಂತಹ ಪೋಷಕರನ್ನು ವಿದ್ಯಾರ್ಥಿನಿಲಯಗಳಿಗೆ ಭೇಟಿ ಮಾಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಅಲೆಮಾರಿ ಅರಣ್ಯವಾಸಿಗಳಿಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಸೌಲಭ್ಯಗಳನ್ನು ನೀಡುವ ಸಲುವಾಗಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಹಂತಹಂತವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನನ್ನ ಗುರುತು-ನನ್ನ ಅಭಿಯಾನದಡಿ ಆಧಾರ್ ಕಾರ್ಡ್ ಇಲ್ಲದವರಿಗೂ ಅದ್ಯತೆ ಮೇರೆಗೆ ಅವರ ಮನೆಬಾಗಿಲಿಗೆ ಆಧಾರ್ ಕಾರ್ಡ್ ತಲುಪಿಸಲಾಗುತ್ತಿದೆ. ಆದಿವಾಸಿ ಅಲೆಮಾರಿ ಜನರು ಸಮಾಜದಲ್ಲಿ ಗೌರವಯುತ ಬದುಕು ಕಟ್ಟಿಕೊಳ್ಳಲು ಸೌಲಭ್ಯಗಳನ್ನು ಒದಗಿಸುವುದು ಜಿಲ್ಲಾಡಳಿತದ ಕರ್ತವ್ಯವಾಗಿದೆ ಎಂದರು.

ಜಿಪಂ ಸಿಇಒ ಮೋನಾರೋತ್, ಎಸ್ಪಿ ಡಾ.ಕವಿತ, ಎಡಿಸಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ನಿಗಮದ ಅಧ್ಯಕ್ಷರ ಅಪ್ತ ಕಾರ್ಯದರ್ಶಿ ಅನಂದ್‌ಕುಮಾರ್, ತಹಸೀಲ್ದಾರರು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪತ್ರಿಕಾಗೋಷ್ಠಿ ಬಳಿಕ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿಲ್ಲೆಯ ವಿವಿಧ ಅಲೆಮಾರಿ ಸಮುದಾಯಗಳ ಕುಂದುಕೊರತೆ ಆಲಿಸಿ, ಮನವಿ ಸ್ವೀಕರಿಸಿದರು. ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

Share this article