ಕನ್ನಡಪ್ರಭ ವಾರ್ತೆ ಸೊರಬ
ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡುವ ಹೊಣೆ ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ಹೇಳಿದರು. ಶನಿವಾರ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ರಾಜ್ಯ ಸರ್ಕಾರ ಪೂರಕವಾಗಿ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಮಕ್ಕಳಿಗೆ ಪಠ್ಯ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಆರೋಗ್ಯ ಹೊಂದಬೇಕು ಎಂದು ಸಲಹೆ ನೀಡಿದರು.ಅಧ್ಯಕ್ಷತೆ ವಹಿಸಿದ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಮರಡಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಗ್ರಾಮಸ್ಥರು, ಶಿಕ್ಷಕ ವರ್ಗದವರು, ದಾನಿಗಳ ಸಹಕಾರದಿಂದ ಈ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾಧ್ಯವಾಗಿದೆ ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ನೆರವೇರಿಸಿದರು. ಗ್ರಾಪಂ ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್, ಸದಸ್ಯ ಎಂ.ಪಿ. ರತ್ನಾಕರ, ತಾಪಂ ಮಾಜಿ ಸದಸ್ಯ ಎನ್.ಜಿ ನಾಗರಾಜ್, ಬೆನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಮಾರ್ಯಪ್ಪ, ಬಿ.ಆರ್.ಪಿ. ಮಂಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್. ಗಣಪತಿ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಉಷಾ ಇತರರು ಉಪಸ್ಥಿತರಿದ್ದರು.