ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜೈ ಹೋ

KannadaprabhaNewsNetwork | Published : Mar 21, 2025 12:32 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಮಾ.21ರಿಂದ ಏ.4 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ 22,908 ಬಾಲಕರು, 20,168 ಬಾಲಕಿಯರು ಸೇರಿದಂತೆ ಒಟ್ಟು 43,076 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು131 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಟಿ.ಎಸ್.ಕೋಲಾರ ಪರೀಕ್ಷಾ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮಾ.21ರಿಂದ ಏ.4 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ 22,908 ಬಾಲಕರು, 20,168 ಬಾಲಕಿಯರು ಸೇರಿದಂತೆ ಒಟ್ಟು 43,076 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು131 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಟಿ.ಎಸ್.ಕೋಲಾರ ಪರೀಕ್ಷಾ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿ ನೀಡಿದರು.

ಇನ್ನು ಪರೀಕ್ಷೆಗೆ ಸಂಬಂಧಿಸಿದಂತೆ ಸಮರ್ಪಕವಾಗಿ ನಡೆಯುವ ನಿಟ್ಟಿನಲ್ಲಿ ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದ್ದು, ಇದಕ್ಕೆ ಪೂರಕವಾಗಿ ಸಮರ್ಪಕ ಇಂಟರ್ ನೆಟ್ ಹಾಗೂ ಯಾವುದೇ ತಾಂತ್ರಿಕ ಸಮಸ್ಯೆಗಳು ಉದ್ಭವಿಸದಂತೆ ಪರಿಹಾರ ಸೌಲಭ್ಯ ಕಲ್ಪಿಸಿರುವುದನ್ನು ಮೇಲಾಧಿಕಾರಿಗಳು ಮುಂಚೆಯೇ ಖಚಿತಪಡಿಸಿಕೊಳ್ಳಬೇಕು. ಪರೀಕ್ಷಾ ದಿನ ಸಿಸಿಟಿವಿಯನ್ನು ಮುಂಚಿತವಾಗಿಯೇ ಪರಿಶೀಲನೆ ನಡೆಸಬೇಕು. ಹೈ ಸ್ಪೀಡ್ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಿರಬೇಕು. ಪರೀಕ್ಷಾ ಕೇಂದ್ರಗಳ ಸುತ್ತ 200 ಮಿ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ತುರ್ತು ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.ಜಿಪಂ ಸಿಇಒ ರಿಷಿ ಆನಂದ ಅವರು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ತಲುಪುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ಸಮಸ್ಯೆಗಳು ಉದ್ಭವವಾದಲ್ಲಿ ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

Share this article