ಜಲಜೀವನ್ ಮಿಷನ್ ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಿ

KannadaprabhaNewsNetwork |  
Published : Nov 22, 2024, 01:17 AM IST
ದಿಶಾ ಸಭೆಯಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಮಾತನಾಡಿದರು | Kannada Prabha

ಸಾರಾಂಶ

ಚಿತ್ರದುರ್ಗ: ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.

ಚಿತ್ರದುರ್ಗ: ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೈಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದಾಗ ಮಾತ್ರ ಗುಣಮಟ್ಟದ ಕಾಮಗಾರಿ ಆಗಲು ಸಾಧ್ಯ. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ ಸುಮಾರು 4 ಸಾವಿರ ಕೋಟಿ ರು. ಅನುದಾನ ಮಂಜೂರಾಗಿದ್ದು, ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು. ಕೆಲಸ ಸರಿಯಾಗಿ ಮಾಡದ ಗುತ್ತಿಗೆದಾರರ ಬದಲಾವಣೆ ಮಾಡಬೇಕು ಎಂದು ಸೂಚನೆ ನೀಡಿದರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಜಲಜೀವನ ಮಿಷನ್ ಯೋಜನೆಯಿಂದಾಗಿ ಹಳ್ಳಿಗಳಲ್ಲಿ ಹೊಸ ಚರಂಡಿ ನಿರ್ಮಾಣ ಆಗಿದೆ. ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಿಲ್ಲ. ಈ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ ಎಂದು ಜಲಜೀವನ ಮಿಷನ್ ಯೋಜನೆಯ ಕಾಮಗಾರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಜಲಜೀವನ ಮಿಷನ್ ಯೋಜನೆಯ ಕಾಮಗಾರಿ ಗುಣಮಟ್ಟದ ಕುರಿತು ಹೆಚ್ಚಿನ ಗಮನಹರಿಸಬೇಕು. ತಾಲೂಕುವಾರು ಕಂಟ್ರಾಕ್ಟರ್‌ಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಆರ್‌ಡಬ್ಲೂಎಸ್ ಕಾರ್ಯಪಾಲಕ ಎಂಜಿನಿಯರ್ ಬಸನಗೌಡ ಪಾಟೀಲ್ ಅವರಿಗೆ ಸೂಚಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 6 ತಾಲೂಕಿನಲ್ಲಿ ಬ್ಯಾಚ್ 1, 2, 3 ಮತ್ತು 4ರಲ್ಲಿ ಒಟ್ಟು 1568 ಕಾಮಗಾರಿಗಳನ್ನು ಕೈಗೊಂಡಿದ್ದು, 1568 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. ಇದರಲ್ಲಿ 685 ಕಾಮಗಾರಿಗಳು ಪೂರ್ಣಗೊಂಡಿದ್ದು, 798 ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.ಜಿಲ್ಲೆಯ ಎಲ್ಲ ಜನವಸತಿಗಳಿಗೆ ಶಾಶ್ವತ ಕುಡಿಯುವ ನೀರಿನ ಮೂಲದ ಮೂಲಕ ಸುರಕ್ಷಿತ ನೀರು ಪೂರೈಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಒಟ್ಟು 11 ಯೋಜನೆಗಳು ಅನುಮೋದನೆಗೊಂಡಿದ್ದು, ಅನುಮೋದಿತ ಯೋಜನೆಗಳ ಪೈಕಿ 2 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡಿದೆ. 2 ಯೋಜನೆಗಳು ಮುಕ್ತಾಯದ ಹಂತದಲ್ಲಿದ್ದು, ಬಾಕಿ 7 ಯೋಜನೆಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ. ತುರ್ತಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದರು.ತಜ್ಞರ ವೈದ್ಯರ ನೇಮಕ ಮಾಡಿ: ಜಿಲ್ಲೆಯ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞರ ವೈದ್ಯರ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಜಿ ಆಹ್ವಾನಿಸುವಂತೆ ಸಂಸದ ಗೋವಿಂದ ಎಂ ಕಾರಜೋಳ ಅವರು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಯಾರು ಸಹ ಅರ್ಜಿ ಸಲ್ಲಿಸಿಲ್ಲ. ಮತ್ತೊಮ್ಮೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಸರ್ಕಸ್‌ ಮಧ್ಯೆ ಇಂದು ಸಿದ್ದು ದೆಹಲಿಗೆ - ನಾಳೆ ಸಿಡಬ್ಲುಸಿ ಸಭೆಯಲ್ಲಿ ಸಿಎಂ ಭಾಗಿ
ಭೂಪರಿವರ್ತನೆ ಇನ್ನು ಅತಿ ಸರಳ