ಕನ್ನಡಪ್ರಭ ವಾರ್ತೆ ನಂಜನಗೂಡು
ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಹಾಗೂ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಖಂಡಿಸಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟಿಸಿದರು.ಹುಲ್ಲಹಳ್ಳಿ ವೃತ್ತದ ಬಳಿ ಜಮಾವಣಿಗೊಂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳು, ಖಾಲಿ ಸಿಲಿಂಡರ್ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇ ದಿನ್ಬರಲಿದೆ ಎಂದು ಹೇಳಿದ್ದರು. ಆದರೆ ಈವರೆಗೂ ಅಚ್ಛೇ ದಿನ್ಬರಲಿಲ್ಲ, ಬದಲಾಗಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಸಿ ಬಡ ಹಾಗೂ ಮಧ್ಯಮ ವರ್ಗದವರ ಮೇಲೆ ಹೊರೆ ಹೊರೆಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಏರಿಸಿರುವುದರಿಂದ ದಿನೇ ದಿನೇ ಪೆಟ್ರೋಲ್, ಡೀಸೆಲ್ಹೆಚ್ಚಳವಾಗುತ್ತಿದೆ. ಇದರಿಂದಾಗಿ ಅಗತ್ಯ ವಸ್ತುಗಳ, ಅಡುಗೆ ಸಾಮಾಗ್ರಿಗಳ ಬೆಲೆ ಏರಿಕೆಯಾಗಿ ಜನರು ಜೀವನ ಸಾಗಿಸುವುದೇ ಕಷ್ಟವಾಗಿದೆ ಎಂದರು.ಇಂತಹ ಜನವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಎಂ ಶಂಕರ್ ಮಾತನಾಡಿ, ಪ್ರಧಾನಿ ಮೋದಿ ಅವರು ಈ ಕೂಡಲೇ ಸಿಲಿಂಡರ್ ಬೆಲೆ ಇಳಿಸಬೇಕು ಮತ್ತು ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆಗೊಳಿಸಿ ಬೆಲೆ ಇಳಿಕೆ ಮಾಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವತಿಯಿಂದ ರಾಜ್ಯಾದ್ಯಂತ ಪ್ರತಿಭಟಿಸುವುದಾಗಿ ಅವರು ಹೇಳಿದರು.ಪ್ರತಿಭಟನೆಯಲ್ಲಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ತಾಲೂಕು ಎಸ್ಸಿ ಮೋರ್ಚಾ ಅಧ್ಯಕ್ಷ ಉಪ್ಪಿನಳ್ಳಿ ಶಿವಣ್ಣ, ಮುಖಂಡರಾದ ಕಳಲೆ ರಾಜೇಶ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಮಹೇಶ್, ಆದರ್ಶ, ಸುಕುಮಾರ್, ಲೋಕೇಶ್, ಸುಧಾಕರ, ನಗರಸಭಾ ನಾಮಿನಿ ಸದಸ್ಯರಾದ ರವಿ, ಸಾಮಾಜಿಕ ಜಾಲತಾಣ ಅಧ್ಯಕ್ಷ ಮಹೇಂದ್ರ, ಕವಲಂದೆ ಗ್ರಾಪಂ ಉಪಾಧ್ಯಕ್ಷ ಮಂಜುನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದನ್ ಗೌಡ, ಮುಖಂಡರಾದ ದೇಬೂರು ಪರಶಿವಮೂರ್ತಿ ಮೊದಲಾದವರು ಇದ್ದರು.