ಜಿ.ಡಿ. ಹೆಗಡೆ
ಕುಮಟಾದ ಹಾಲಕ್ಕಿ ಒಕ್ಕಲಿಗರ ಸಭಾಭವನದಲ್ಲಿ ಆಗಸ್ಟ್ ೨೦೨೪ರಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮವೇ ಕೊನೆಯದು. ಆ ಬಳಿಕ ಜಿಲ್ಲೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಸಿಗುವ ಜನ ಸ್ಪಂದನ ನಡೆದಿಲ್ಲ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಾಗೂ ಪರಿಹಾರ ಕಂಡುಕೊಳ್ಳಲು ತೊಂದರೆ ಆಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಬಂದ ಮನವಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮವಹಿಸುತ್ತಿದ್ದರು. ಒಂದು ಕೆಲಸಕ್ಕೆ ಹತ್ತಾರು ಬಾರಿ ಜನರಿಗೆ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪ್ರಮೇಯವೇ ಇರಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಅದರಂತೆ ಜಿಲ್ಲಾಧಿಕಾರಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ತಿಂಗಳಲ್ಲಿ ಒಂದು ಗ್ರಾಮಕ್ಕೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಆಯಾ ಉಪ ವಿಭಾಗಾಧಿಕಾರಿ, ತಹಸೀಲ್ದಾರರೂ ಬೇರೆ ಬೇರೆ ಹಳ್ಳಿಗಳಿಗೆ ಕಡೆ ತೆರಳಿ ಅಹವಾಲು ಸ್ವೀಕರಿಸುತ್ತಿದ್ದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿ ತುಸು ಬದಲಾವಣೆ ಮಾಡಿ ಜನ ಸ್ಪಂದನವೆಂದು ಕರೆದು ತಿಂಗಳಲ್ಲಿ ಒಂದು ದಿನ ಒಂದು ತಾಲೂಕನ್ನು ನಿಗದಿ ಪಡಿಸಿ, ಅಲ್ಲಿಗೆ ಜಿಲ್ಲಾಧಿಕಾರಿ ಒಳಗೊಂಡು ಎಲ್ಲ ಇಲಾಖೆಯ ಅಧಿಕಾರಿಗಳು ತೆರಳಿ ದಿನವಿಡಿ ಜನರ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಒದಗಿಸುತ್ತಿದ್ದರು. ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೂ ಕೂಡಾ ಪಾಲ್ಗೊಳ್ಳುತ್ತಿದ್ದರು. ಪ್ರತಿ ಕಾರ್ಯಕ್ರಮದಲ್ಲಿ ನೂರಾರು ಜನರು ಸಮಸ್ಯೆಗಳನ್ನು ಹೇಳಿಕೊಂಡು ಬಂದು ಪರಿಹಾವನ್ನು ಕಂಡುಕೊಳ್ಳುತ್ತಿದ್ದರು.
ಅರ್ಜಿ ವಿಲೇವಾರಿ
ಗಾಂಧಿ ಭಾರತ ಕಾರ್ಯಕ್ರಮದ ತಯಾರಿ ಹಿನ್ನೆಲೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜನೆ ಮಾಡುವಲ್ಲಿ ವ್ಯತ್ಯಾಸವಾಗಿರಬಹುದು. ನಮ್ಮ ಸರ್ಕಾರ ಬಡವರ ಪರವಾಗಿದೆ. ಬೆಳಗಾವಿ ಕಾರ್ಯಕ್ರಮದ ನಂತರ ಆಯೋಜನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ ಹೇಳಿದ್ದಾರೆ.