ಕನ್ನಡಪ್ರಭ ವಾರ್ತೆ ಬೆಳ್ತಂಗಡಿಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯದ 3,555 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಅಭಿಯಾನ ಮುಖೇನ 3 ಲಕ್ಷ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ 35 ವರ್ಷಗಳಿಂದ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವೇದಿಕೆ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಮಾನಮನಸ್ಕರ ಜಿಲ್ಲಾ ವೇದಿಕೆಗಳನ್ನು ರಚಿಸಿ ಸುಮಾರು 2,100 ಕ್ಕಿಂತಲೂ ಹೆಚ್ಚು ಸ್ವಯಂಸೇವಕರು ಈ ಆಂದೋಲನದಲ್ಲಿ ಪಾಲ್ಗೊಳ್ಳವರು ಎಂದು ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆ, ವಿ.ವಿ.ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಪೋಲಿಸ್ ಇಲಾಖೆಗಳು ಅಭಿಯಾನಕ್ಕೆ ಕೈ ಜೋಡಿಸಿವೆ. ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಮರ್ಗದರ್ಶನದಲ್ಲಿ ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ನೇತೃತ್ವವಿದೆ. ಸ್ಥಳೀಯ ಯೋಜನಾ ಸಿಬಂದಿ ಕಾರ್ಯಕ್ರಮ ನಡೆಸುವರು ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.