ಗದಗ: ಮುಂಡರಗಿ ತಾಲೂಕಿನಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತವಾಗಿರುವ ವಿವಿಧ ಇಲಾಖೆಗಳ ಅರ್ಜಿಗಳನ್ನು ಪರಿಶೀಲಿಸಿ ಪ್ರಥಮಾದ್ಯತೆ ಮೇಲೆ ತಾರ್ಕಿಕವಾಗಿ ಅಂತ್ಯಗೊಳಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸ್ವೀಕೃತ ಅರ್ಜಿಗಳಿಗೆ ಸೂಕ್ತ ಹಿಂಬರಹ ಕೊಡಬೇಕು. ಬಾಕಿ ಉಳಿದ ಅರ್ಜಿಗಳ ಕುರಿತು ಹೆಚ್ಚಿನ ನಿಗಾವಹಿಸಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಅಂಗವಿಕಲರಿಗೆ ಸಾಧನ ಸಲಕರಣೆಗಳ ವಿತರಣೆ, ಆರೋಗ್ಯ ಮತ್ತು ಚಿಕಿತ್ಸೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ, ರಸ್ತೆ ಸಂಪರ್ಕ, ಶೌಚಾಲಯ ವ್ಯವಸ್ಥೆ ಕುರಿತಂತೆ ಮೂಲಭೂತ ಸೌಲಭ್ಯ, ಮಾಸಾಶನಕ್ಕೆ ಸಂಬಂಧಿಸಿದಂತೆ ಜನತಾ ದರ್ಶನದಲ್ಲಿ ಸ್ವೀಕೃತ ವಿವಿಧ ಅರ್ಜಿಗಳು ಸೂಕ್ತ ವಿಲೇವಾರಿಯಾಗುವುದು ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರದಿಂದ ಅನುಷ್ಠಾನಗೊಂಡ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹ ಜ್ಯೋತಿ, ಯುವ ನಿಧಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.ಮುಂಬರುವ ಲೋಕಸಭೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ಎಲ್ಲ ಫಲಾನುಭವಿಗಳ ಆಯ್ಕೆ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹಾಗೂ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧನೆಗೆ ಕ್ರಮ ವಹಿಸಬೇಕೆಂದು ಸೂಚಿಸಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ನಿರ್ಮಲಾ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಉದ್ದೇಶಿತ ಜಿಲ್ಲಾ, ರಾಜ್ಯ, ಕೇಂದ್ರದ ೨೦೨೨-೨೩ನೇ ಸಾಲಿನ ಅನುದಾನದ ವಿವರ ಮಾಹಿತಿಯನ್ನು ಎಲ್ಲ ಇಲಾಖೆಯ ಅಧಿಕಾರಿಗಳು ಸಂಬಂಧಿತ ನೋಡಲ್ ಅಧಿಕಾರಿಗಳಾದ ಮಹಿಳಾ ಇಲಾಖೆಯ ಅಧಿಕಾರಿ ಡಾ. ಕಮಲಾ ಬೈಲೂರ ಅವರಿಗೆ ಸಲ್ಲಿಸಬೇಕೆಂದು ತಿಳಿಸಿದರು.ಸಕಾಲ ಪ್ರಗತಿ ಪರಿಶೀಲನೆ: ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳಿಗೆ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಮಾತನಾಡಿ, ಸಕಾಲ ಯೋಜನೆ ಕುರಿತು ಹೆಚ್ಚು ನಿಗಾವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕೆಂದು ತಿಳಿಸಿದರು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ. ಕಾರಣ ಅದಕ್ಕೆ ಅವಕಾಶ ನೀಡದೇ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಹೆಸ್ಕಾಂ, ಕೃಷಿ, ಶಿಕ್ಷಣ, ಸಾರಿಗೆ, ಆರೋಗ್ಯ, ಹಿಂದುಳಿದ ವರ್ಗ, ಆಯುಷ್, ತೋಟಗಾರಿಕೆ, ಆಹಾರ, ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಅಭಿವೃದ್ಧಿ ನಿಗಮ ನಿಯಮಿತಗಳು ಸಾಧಿಸಿದ ಪ್ರಗತಿ ಪರಿಶೀಲನೆ ಜರುಗಿತು.
ಇದೇ ಸಂದರ್ಭದಲ್ಲಿ ಐಪಿಜಿಆರ್‌ಎಸ್, ಫ್ಲಾಗ್‌ಶಿಪ್, ಜಿಪಂ ಲಿಂಕ್ ಡೊಕ್ಯುಮೆಂಟ್ ಯೋಜನೆಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಲಾಯಿತು.ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ.ರಡ್ಡೇರ, ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ, ತಾಲೂಕು ತಹಸೀಲ್ದಾರರು, ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.