ಜನೌಷಧ ಕೇಂದ್ರ ತೆರವು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : May 31, 2025, 12:07 AM IST
ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧ್ ಕೇಂದ್ರ ತೆರವುಗೊಳಿಸಲು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ  | Kannada Prabha

ಸಾರಾಂಶ

ಸರ್ಕಾರಿ ಆಸ್ಪತ್ರೆ ಹಾಗೂ ಜನೌಷಧ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಂತರ ತಾಲೂಕು ಕಚೇರಿ ಎದುರು ಧರಣಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಅತ್ಯಂತ ಕಡಿಮೆ ದರದಲ್ಲಿ ಔಷಧಗಳನ್ನು ಒದಗಿಸುತ್ತಿರುವ ಜನೌಷಧ ಕೇಂದ್ರಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ತೆರವು ಮಾಡಲು ಮುಂದಾಗಿದೆ ಎಂದು ಆರೋಪಿಸಿ ಮಂಡಲ ಬಿಜೆಪಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಸರ್ಕಾರಿ ಆಸ್ಪತ್ರೆ ಹಾಗೂ ಜನೌಷಧ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ನಂತರ ತಾಲೂಕು ಕಚೇರಿ ಎದುರು ಧರಣಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂದರ್ಭ ಮಾಜಿ ಶಾಸಕ ಎಂ.ಪಿ.‌ಅಪ್ಪಚ್ಚು ರಂಜನ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಜನೌಷಧ ಕೇಂದ್ರಗಳು ಬಡ ಮಂದಿಗೆ ಕಡಿಮೆ ದರದಲ್ಲಿ ಔಷಧಗಳನ್ನು ಒದಗಿಸುತ್ತಿದೆ. ಜನರಿಗೆ ಹೆಚ್ಚು ಅನುಕೂಲವಾಗಿರುವ ಇಂತಹ ಕೇಂದ್ರಗಳನ್ನು ಇದೀಗ ತೆರವುಗೊಳಿಸಲು ಜನವಿರೋಧಿ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ದೂರಿದರು.

ಬಡವರ ಹಾಗೂ ಜನ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.ಮಡಿಕೇರಿ ಕ್ಷೇತ್ರದ ಶಾಸಕರು ಈ ಎರಡು ವರ್ಷದಲ್ಲಿ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಗಳನ್ನು ಬಗೆಹರಿಸಲು ಯಾವುದೇ ಕ್ರಮ ವಹಿಸಿಲ್ಲ. ಆಸ್ಪತ್ರೆಯು ವೈದ್ಯರ ಕೊರತೆಯಿಂದ ನಲುಗುತ್ತಿದ್ದು, ಆರೋಗ್ಯ ಇಲಾಖೆಯೇ ಅನಾರೋಗ್ಯಕ್ಕೀಡಾಗಿದೆ ಎಂದು ಟೀಕಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಜನರಿಗೆ ಉಪಯೋಗವಾಗಿರುವ ಜನೌಷಧ ಕೇಂದ್ರಗಳನ್ನು ಮೆಡಿಕಲ್ ಲಾಬಿಗೆ ಮಣಿದು ಮುಚ್ಚುವ ಹಂತಕ್ಕೆ ಕಾಂಗ್ರೆಸ್ ಸರ್ಕಾರ ನಿಂತಿದ್ದು, ಬಡವರ ಶಾಪ ಸರ್ಕಾರಕ್ಕೆ ತಟ್ಟಲಿದೆ. ಇದೀಗ ಬಿಜೆಪಿ ವತಿಯಿಂದ ಮೌನ ಪ್ರತಿಭಟನೆ ಮಾಡಿದ್ದು, ತನ್ನ ನಿರ್ಧಾರವನ್ನು ಸರ್ಕಾರ ಹಿಂಪಡೆಯದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಬಿಜೆಪಿ ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.‌ಮೇದಪ್ಪ, ಜಿಲ್ಲಾ ಪ್ರಧಾನ‌ ಕಾರ್ಯದರ್ಶಿ ಮಹೇಶ್ ಜೈನಿ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಕವನ್ ಕಾರ್ಯಪ್ಪ, ಯುವ‌ ಮೋರ್ಚಾ ಜಿಲ್ಲಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಸೊಮೇಶ್ ಇತರರು ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ