ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ಕಣಕ್ಕೆ!

KannadaprabhaNewsNetwork | Published : Jan 28, 2024 1:20 AM

ಸಾರಾಂಶ

ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಗೆಹರಿದಿದ್ದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.

ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಗೆಹರಿದಿದ್ದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.

ನಾಮಪತ್ರ ಸಲ್ಲಿಕೆಗೆ ಎರಡು ದಿನಗಳಷ್ಟೇ ಬಾಕಿ ಉಳಿದಿದೆ. ಜೆಡಿಎಸ್‌ನ ರಂಗನಾಥ್ ಹೆಸರನ್ನೇ ದೋಸ್ತಿ ಅಭ್ಯರ್ಥಿ ಎಂದು ಅಂತಿಮಗೊಳಿಸಿ ಒಂದೆರೆಡು ದಿನಗಳಲ್ಲಿ ಬಿಜೆಪಿ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದ್ದು, ಈಗಾಗಲೇ ಉಭಯ ಪಕ್ಷಗಳ ಕಾರ್ಯಕರ್ತರು ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ.

ಈ ಮೊದಲು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಎ.ಪಿ. ರಂಗನಾಥ್ ತಯಾರಿ ಮಾಡಿಕೊಂಡಿದ್ದರೆ, ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿತ್ತು. ಜೆಡಿಎಸ್ ನಾಯಕರ ನಡೆಯಿಂದ ಬೇಸರಗೊಂಡ ಬಿಜೆಪಿಯು ಪಕ್ಷದ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೆಸರನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡುವ ಮೂಲಕ ಕುತೂಹಲ ಮೂಡಿಸಿತ್ತು.

ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿರವರು ಲೋಕಸಭಾ ಚುನಾವಣೆಗೆ ಮೈತ್ರಿ ಸಾಧಿಸಿರುವ ನೆಪದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ಉಭಯ ಪಕ್ಷಗಳ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇಲ್ಲಿ ವಿಧಾನ ಪರಿಷತ್ತಿನ 6 ಸ್ಥಾನಗಳ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಯಿತು. ಕೊನೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯನ್ನಾಗಿ ಎ.ಪಿ.ರಂಗನಾಥ್ ಅವರನ್ನು ಅಂತಿಮಗೊಳಿಸಲು ಬಿಜೆಪಿ ನಾಯಕರು ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದರು. ಈ ತೀರ್ಮಾನವನ್ನು ಬಿಜೆಪಿ ರಾಜ್ಯ ನಾಯಕರು ಪಕ್ಷದ ವರಿಷ್ಠರಿಗೂ ರವಾನಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.ಸೋಲಿಲ್ಲದ ಸರದಾರ ಪುಟ್ಟಣ್ಣ 5ನೇ ಬಾರಿ ಸ್ಪರ್ಧೆ:

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ 4 ಬಾರಿ ಆಯ್ಕೆಯಾಗಿರುವ ಪುಟ್ಟಣ್ಣ ಸೋಲಿಲ್ಲದ ಸರದಾರ. ಇದೀಗ 5ನೇ ಬಾರಿಗೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಈಗಾಗಲೇ ಪುಟ್ಟಣ್ಣರವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಕಾಂಗ್ರೆಸ್ ಪಕ್ಷದ ಎ ಮತ್ತು ಬಿ ಫಾರಂ ಪಡೆದುಕೊಂಡಿದ್ದು, ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಕೂಡ ಮಾಡಿಕೊಂಡಿದ್ದಾರೆ.

ಈ ಹಿಂದೆ ಜೆಡಿಎಸ್ ಪಕ್ಷದಿಂದ 3 ಬಾರಿ ಹಾಗೂ ಬಿಜೆಪಿ ಪಕ್ಷದಿಂದ 1 ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2020ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೆಡಿಎಸ್ ತೊರೆದು ಬಿಜೆಪಿಯಿಂದ ಕಣಕ್ಕಿಳಿದಿದ್ದ ಪುಟ್ಟಣ್ಣ, ಈಗ ಆಡಳಿತರೂಢ ಕಾಂಗ್ರೆಸ್ ಪಕ್ಷದ ಹುರಿಯಾಳು ಆಗಿದ್ದಾರೆ.

ಕೈ ಮತ್ತು ದೋಸ್ತಿ ಪಕ್ಷಗಳಿಗೆ ಪ್ರತಿಷ್ಠೆ:

ಲೋಕಸಭಾ ಚುನಾವಣೆ ದೃಷ್ಟಿಯಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣೆ ಬಿಜೆಪಿ - ಜೆಡಿಎಸ್ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಮೈತ್ರಿ ಪಕ್ಷಗಳು ದೋಸ್ತಿ ಅಭ್ಯರ್ಥಿ ಮೂಲಕ ಟಕ್ಕರ್ ನೀಡಲು ಮುಂದಾಗಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷವೂ ಪುಟ್ಟಣ್ಣ ಅವರನ್ನೇ ಕಣಕ್ಕಿಳಿಸಿ ರಣತಂತ್ರ ರೂಪಿಸಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ದೋಸ್ತಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಮೈತ್ರಿಯನ್ನು ಗಟ್ಟಿ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಸಂದೇಶ ರವಾನಿಸಲು ಉದ್ದೇಶಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಒಗ್ಗಟ್ಟು ಎಷ್ಟರ ಮಟ್ಟಿಗೆ ಕೆಲಸ ಮಾಡಲಿದೆ ಎಂಬುದು ಚುನಾವಣಾ ಫಲಿತಾಂಶ ನಿರ್ಧರಿಸಲಿದೆ.

27ಕೆಆರ್ ಎಂಎನ್ 4,5.ಜೆಪಿಜಿ

4.ಪುಟ್ಟಣ್ಣ

5.ಎ.ಪಿ.ರಂಗನಾಥ್

Share this article