ನಾಳೆ ಕೊಡಗಿಗೆ ಎಚ್‌ಡಿಕೆ: ಕಸ್ತೂರಿ ರಂಗನ್‌ ವರದಿ ವಿಚಾರ ಸಭೆ

KannadaprabhaNewsNetwork |  
Published : Nov 21, 2026, 02:45 AM IST
ಕುಮಾರಸ್ವಾಮಿ | Kannada Prabha

ಸಾರಾಂಶ

ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ೨೨ರಂದು ಕೊಡಗು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದರು.

ಮಡಿಕೇರಿ: ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ೨೨ರಂದು ಕೊಡಗು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದರು.

ಅಂದು ಸೋಮವಾರಪೇಟೆಯ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಹಿನ್ನೆಲೆ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಿಲ್ಲಾ ಜೆಡಿಎಸ್ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯುವ ಸಾಧ್ಯತೆಯಿದೆ ಎಂದ ಅವರು, ಅಂದು ಜಿಲ್ಲಾ ಹಾಗೂ ತಾಲೂಕು ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಸಭೆಯ ನಂತರ ರೈತ ಸಂಘಟನೆಯ ಸಮ್ಮುಖದಲ್ಲಿ ಕೊಡಗಿಗೆ ಮಾರಕವಾಗಿರುವ ಸಿ.ಎನ್.ಡಿ ಲ್ಯಾಂಡ್, ಸೆಕ್ಷನ್-೪ ಹಾಗೂ ಕಸ್ತೂರಿ ರಂಗನ್ ವಿಷಯವಾಗಿ ಸೋಮವಾರಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಹರಪಳ್ಳಿ ರವೀಂದ್ರ ಅವರ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿಯೂ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಎಚ್‌ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಗೆ ೭ಬಾರಿ ಭೇಟಿ ನೀಡಿ ಜಿಲ್ಲೆಯ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಭೂಕುಸಿತ, ನೆರೆಪ್ರವಾಹ ಸಂತ್ರಸ್ತರಿಗೆ ೧೦೦೦ಕ್ಕೂ ಅಧಿಕ ಮನೆ ನಿರ್ಮಾಣ ಮಾಡಿಕೊಡಲಾಗಿದೆ. ರೈತರ ಸಾಲ ಮನ್ನ ಮಾಡಿದ್ದಾರೆ. ಆದರೆ, ಇಂದು ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಿ, ಪರಿಹಾರಕ್ಕಾಗಿ ಸತಾಯಿಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನಸಾಮಾನ್ಯದ ಬದುಕು ಕಷ್ಟಕರವಾಗಿದೆ. ಪುರಸಭೆ, ನಗರಸಭೆ, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸದೆ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಪ್ಪುಪಟ್ಟಿಗೆ ಸೇರಿಸಿ: ವಿರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿ, ವಿರಾಜಪೇಟೆ-ಮಡಿಕೇರಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಕೇವಲ ೪೦ ನಿಮಿಷದ ರಸ್ತೆಯಲ್ಲಿ ಇಂದು ೧.೩೦ ಗಂಟೆ ಸಾಗಬೇಕಾಗಿದೆ. ಅಲ್ಲದೇ, ವಿರಾಜಪೇಟೆ ವ್ಯಾಪ್ತಿಯಲ್ಲಿ ಕೆಲವು ರಸ್ತೆ ಕಾಮಗಾರಿ ಮಾಡಲಾಗಿದೆ. ಆದರೆ ಎಲ್ಲವು ಕಿತ್ತು ಬರುತ್ತಿದೆ. ಗುಣಮಟ್ಟವಿಲ್ಲದ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷ ಸ್ವಾಗತ್, ಕಾರ್ಯದರ್ಶಿ ಸತ್ಯ, ಮಡಿಕೇರಿ ತಾಲೂಕು ಅಧ್ಯಕ್ಷ ಎನ್.ರವಿಕಿರಣ್, ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ಶಿವದಾಸ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ