ಕನ್ನಡಪ್ರಭ ವಾರ್ತೆ ಮೈಸೂರು
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಕ್ಕೆ ಚ್ಯುತಿ ತರಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಆದ್ದರಿಂದ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ನಗರದ ಮೈಮುಲ್ ಮುಂಭಾಗ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರೂ ಆದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ, ಮಾಜಿ ಸಚಿವ ಸಾ.ರಾ. ಮಹೇಶ್ ಅವರ ನೇತೃತ್ವದಲ್ಲಿ ಶಾಸಕರಾದ ಜಿ.ಡಿ. ಹರೀಶ್ಗೌಡ, ಸಿ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಕೆ. ಮಹದೇವ್, ಎಂ. ಅಶ್ವಿನ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಜಮಾವಣೆಗೊಂಡು. ಘೋಷಣೆ ಕೂಗುತ್ತ ಹೊಸ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿದರು.ಹಾಸನ ಜಿಲ್ಲಾದ್ಯಾಂತ ಮಹಿಳೆಯ ಅಶ್ಲೀಲ ಚಿತ್ರಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚುವ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಈ ಅಶೀಲ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಾದಾದ್ಯಂತ ಹಂಚಿದ್ದಾರೆ ಎಂದು ಬಿಜೆಪಿ ಮುಖಂಡರೂ ಆದ ವಕೀಲ ದೇವರಾಜೇಗೌಡ ಬಯಲು ಮಾಡಿದ್ದು, ಈ ಇಬ್ಬರು ನಾಯಕರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬಕ್ಕೆ ಚ್ಯುತಿ ತರಲು ಮುಂದಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ಪಡಿಸಿದರು.
ವಿಡಿಯೋ ಹಂಚಿದವರ ವಿರುದ್ಧ ಯಾಕಿನ್ನೂ ಕ್ರಮ ಕೈಗೊಂಡಿಲ್ಲ. ಚೆನ್ನೈ ಕಂಪನಿ ಒಂದರಲ್ಲಿ ಕೋಟ್ಯಂತರ ರು. ಖರ್ಚು ಮಾಡಿ ಪೆನ್ ಡ್ರೈವ್ ಖರೀದಿಸಿದ್ದಾರೆ. ಬೇರೆಡೆ ಅದಕ್ಕೆ ವೀಡಿಯೋ ಅಪ್ ಲೋಡ್ ಮಾಡಲಾಗಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಮುಗಿಸಲು ವ್ಯವಸ್ಥಿತ ಪಿತೂರಿಯಿಂದ ಇಂತಹ ನೀಚ ರಾಜಕಾರಣ ಮಾಡಲಾಗಿದೆ ಎಂದು ಅವರು ಕಿಡಿಕಾರಿದರು.
ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಗಿಲ್ಲದೇ ಬಂಧಿಸಲಾಗಿದೆ ಎಂದು ಅವರು ಆರೋಪಿಸಿದರು.
ಜೆಡಿಎಸ್ ನಗರಾಧ್ಯಕ್ಷ ಜಿಲ್ಲಾಧ್ಯಕ್ಷ ಎನ್. ನರಸಿಂಹಸ್ವಾಮಿ, ನಗರಾಧ್ಯಕ್ಷ ಕೆ.ಟಿ. ಚಲುವೇಗೌಡ, ಮಾಜಿ ಮೇಯರ್ಗಳಾದ ಎಂ.ಜೆ. ರವಿಕುಮಾರ್, ಆರ್. ಲಿಂಗಪ್ಪ, ನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಶ್ರೀಧರ್ ಸೇರಿದಂತೆ 400ಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.