ಕುಮಾರಸ್ವಾಮಿ ಬಗ್ಗೆ ಅವಹೇಳನ ಖಂಡಿಸಿ ಜೆಡಿಎಸ್‌ ಪ್ರತಿಭಟನೆ

KannadaprabhaNewsNetwork |  
Published : Nov 13, 2026, 01:45 AM IST
12ಎಚ್ಎಸ್ಎನ್9 :  | Kannada Prabha

ಸಾರಾಂಶ

ಸಕಲೇಶಪುರದಿಂದ ಬೆಂಗಳೂರಿಗೆ ತೆರಳುವ ಬಸ್ ಪ್ರಯಾಣ ದರವನ್ನು ಒಂದೇ ಬಾರಿ ₹90 ಹೆಚ್ಚಿಸಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಮಲೆನಾಡಿನ ರೈತರು ಬರ, ಕಾಡಾನೆ ಹಾವಳಿ ಸೇರಿದಂತೆ ಹಲವು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಹೇಮಾವತಿ, ಹಾನುಬಾಳು ಸೇರಿದಂತೆ ಹಲವು ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಸಮರ್ಪಕವಾಗಿ ನಡೆದಿಲ್ಲ. ಆದರೂ ಬರ ಘೋಷಣೆ ಹಾಗೂ ಪರಿಹಾರ ನೀಡುವಲ್ಲಿ ವಿಳಂಬ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನೂ ಹಲವು ವರ್ಷಗಳಿಂದ ನಡೆಸದೆ ಮುಂದೂಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿದ ಅವರು, ಸಂಬಂಧಪಟ್ಟವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರಅಗತ್ಯ ವಸ್ತುಗಳ ಬೆಲೆ ಏರಿಕೆ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ. ಎಸ್. ಲತಾ ಕುಮಾರಿ ಅವರ ನಡೆ ಖಂಡಿಸಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಮಾತನಾಡಿ, ಹಾಲಿನ ಬೆಲೆಯನ್ನು ಲೀಟರ್‌ಗೆ ₹8 ಹೆಚ್ಚಿಸಿರುವುದರಿಂದ ಗ್ರಾಹಕರಿಗೆ ಹೊರೆಯಾಗಿದ್ದು, ಇದರ ಪರಿಣಾಮ ಮೊಸರು, ತುಪ್ಪ, ಬೆಣ್ಣೆ, ಪನ್ನೀರ್ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯೂ ಹೆಚ್ಚಾಗಲಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ₹52 ಸಾವಿರ ಕೋಟಿ ವೆಚ್ಚ ಮಾಡುತ್ತಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಜನರಿಂದಲೇ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.ಸಕಲೇಶಪುರದಿಂದ ಬೆಂಗಳೂರಿಗೆ ತೆರಳುವ ಬಸ್ ಪ್ರಯಾಣ ದರವನ್ನು ಒಂದೇ ಬಾರಿ ₹90 ಹೆಚ್ಚಿಸಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಮಲೆನಾಡಿನ ರೈತರು ಬರ, ಕಾಡಾನೆ ಹಾವಳಿ ಸೇರಿದಂತೆ ಹಲವು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಹೇಮಾವತಿ, ಹಾನುಬಾಳು ಸೇರಿದಂತೆ ಹಲವು ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಸಮರ್ಪಕವಾಗಿ ನಡೆದಿಲ್ಲ. ಆದರೂ ಬರ ಘೋಷಣೆ ಹಾಗೂ ಪರಿಹಾರ ನೀಡುವಲ್ಲಿ ವಿಳಂಬ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನೂ ಹಲವು ವರ್ಷಗಳಿಂದ ನಡೆಸದೆ ಮುಂದೂಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿದ ಅವರು, ಸಂಬಂಧಪಟ್ಟವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.ಹಾಸನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿ ಕೆ. ಎಸ್. ಲತಾ ಕುಮಾರಿ ಅವರ ಕುರಿತು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಿದ್ದರು. ಆ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡುವ ಬದಲು ಜಿಲ್ಲಾಧಿಕಾರಿಗಳು ನೀಡಿದ ಪ್ರತಿಕ್ರಿಯೆ, ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡಂತೆ’ ಎಂಬಂತಾಗಿದೆ ಎಂದು ನಟರಾಜ್ ಟೀಕಿಸಿದರು. ರಾಜ್ಯದ ಮುಖ್ಯಮಂತ್ರಿ ಅವರೇ, ಯಾವುದೇ ಅಧಿಕಾರಿ ಹತ್ತು ರೂಪಾಯಿ ಲಂಚ ಕೇಳಿದರೂ ತಮ್ಮ ಗಮನಕ್ಕೆ ತರುವಂತೆ ಸಾರ್ವಜನಿಕರಿಗೆ ಹೇಳಿದ್ದಾರೆ. ಅದರಂತೆ ಕುಮಾರಸ್ವಾಮಿ ಅವರು ಭ್ರಷ್ಟಾಚಾರದ ಕುರಿತು ಧ್ವನಿ ಎತ್ತಿ, ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ ಅಷ್ಟೇ. ಇದಕ್ಕೆ ಜಿಲ್ಲಾಧಿಕಾರಿಗಳು ನೀಡಿರುವ ಪ್ರತಿಕ್ರಿಯೆಯನ್ನು ಜಿಲ್ಲೆಯ ಜನತೆ ಒಪ್ಪುವುದಿಲ್ಲ ಎಂದು ಹೇಳಿದರು. ಜೆಡಿಎಸ್ ಪಕ್ಷವು ಗ್ಯಾರಂಟಿ ಯೋಜನೆಗಳ ವಿರೋಧಿಯಲ್ಲ. ಆದರೆ ಒಂದು ಕೈಯಲ್ಲಿ ಗ್ಯಾರಂಟಿ ನೀಡಿ ಮತ್ತೊಂದು ಕೈಯಲ್ಲಿ ಬೆಲೆ ಏರಿಕೆಯ ಮೂಲಕ ಜನರಿಂದಲೇ ಹಣ ವಸೂಲಿ ಮಾಡುತ್ತಿರುವುದನ್ನು ವಿರೋಧಿಸುತ್ತೇವೆ. ಗ್ರಾಮೀಣ ಜನರನ್ನು ಅವಹೇಳನ ಮಾಡುವ ಹೇಳಿಕೆಗಳಿಗೂ ಜನರು ತಕ್ಕ ಉತ್ತರ ನೀಡಲಿದ್ದಾರೆ. 2028ರಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಪುರಸಭೆ ಅಧ್ಯಕ್ಷ ಯಡ್ಗಾರ್‌ ಇಬ್ರಾಹಿಂ ಮಾತನಾಡಿ, ಗ್ಯಾರಂಟಿ ಯೋಜನೆಗಳ ವೆಚ್ಚವನ್ನು ಸರ್ಕಾರ ಬೆಲೆ ಏರಿಕೆಯ ಮೂಲಕ ಬಡ್ಡಿ ಸಮೇತ ಜನರಿಂದ ವಸೂಲಿ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್, ಹಾಲು, ಮೊಸರು ಹಾಗೂ ಸಕ್ಕರೆ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ರಸ್ತೆ, ಚರಂಡಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳಿದ್ದರೂ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನೂ ನಡೆಸದೆ ವಿಳಂಬ ಮಾಡಲಾಗುತ್ತಿದೆ ಎಂದರು. ಜೆಡಿಎಸ್ ಮುಖಂಡ ಬೆಕನಳ್ಳಿ ನಾಗರಾಜ್ ಮಾತನಾಡಿ, ಕಾಫಿ ಬೆಳೆಗಾರರಿಗೆ 10 ಎಚ್‌ಪಿ ವಿದ್ಯುತ್ ಸಂಪರ್ಕ, ಸರ್ಕಾರಿ ಜಮೀನು ಒತ್ತುವರಿ ಸಕ್ರಮ, ಆಶ್ರಯ ಮನೆ ಸೇರಿದಂತೆ ಹಲವು ಭರವಸೆಗಳ ಅನುಷ್ಠಾನದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಬೆಲೆ ಏರಿಕೆ ಹಾಗೂ ಮದ್ಯದ ದರ ಹೆಚ್ಚಳದಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಟೀಕಿಸಿದರು.

ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ನೇತೃತ್ವದಲ್ಲಿ ಹಳೆ ಬಸ್ ನಿಲ್ದಾಣದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.ಪ್ರತಿಭಟನೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ದೊಡ್ಡದೀನೆ ಸ್ವಾಮಿಗೌಡ, ಹಾಸನ ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್ ದೇವೇಗೌಡ, ಮುಖಂಡರಾದ ಜ್ಯೋತಿ, ರಾಜ್‌ಕುಮಾರ್‌, ಮಲೆನಾಡು ಜಾಕೀರ್, ಸಚಿನ್ ಪ್ರಸಾದ್, ಕವನಗೌಡ, ಸುರೇಶ್ ಆಳ್ವ, ವಲಳಹಳ್ಳಿ ಪ್ರಸಾದ್, ಸುದರ್ಶನ್, ಸತೀಶ್, ಪ್ರಜ್ವಲ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌