ವಿದ್ಯುತ್ ಖಾಸಗೀಕರಣ ಖಂಡಿಸಿ ಜೆಡಿಎಸ್ ಪ್ರತಿಭಟನೆ

KannadaprabhaNewsNetwork |  
Published : Jul 01, 2026, 02:00 AM IST
ಹಾವೇರಿ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹಾಗೂ ವಿದ್ಯುತ್ ಕ್ಷೇತ್ರವನ್ನು ಖಾಸಗಿ ಸಂಸ್ಥೆಗಳ ವಶಕ್ಕೆ ಒಪ್ಪಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಹಾವೇರಿ: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹಾಗೂ ವಿದ್ಯುತ್ ಕ್ಷೇತ್ರವನ್ನು ಖಾಸಗಿ ಸಂಸ್ಥೆಗಳ ವಶಕ್ಕೆ ಒಪ್ಪಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಹುಕ್ಕೇರಿಮಠದಿಂದ ಪ್ರಾರಂಭವಾಗಿ ಮೈಲಾರ ಮಹದೇವಪ್ಪ ವೃತ್ತದವರೆಗೆ ನಡೆದ ಪ್ರತಿಭಟನಾ ಪಾದಯಾತ್ರೆಯಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಕ್ಷೇತ್ರದ ಖಾಸಗೀಕರಣದ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸಲು ಹೊರಟಿರುವುದು ಖಂಡನೀಯ. ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಂಡರೆ ರೈತರು, ಸಣ್ಣ ಕೈಗಾರಿಕೆಗಳು ಹಾಗೂ ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ರೈತರಿಗೆ ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಗಳು ಕುಂಠಿತವಾಗುವ ಸಾಧ್ಯತೆಯಿದ್ದು, ಇದು ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಒಂದೊಂದೇ ಇಲಾಖೆಯನ್ನು ಖಾಸಗೀಕರಣಗೊಳಿಸುವ ಮೂಲಕ ಜನಸಾಮಾನ್ಯರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಸಾರ್ವಜನಿಕ ಸೇವೆಗಳನ್ನು ಖಾಸಗಿ ಕಂಪನಿಗಳ ಲಾಭದ ಉದ್ದೇಶಕ್ಕೆ ಬಲಿಕೊಡುವ ಬದಲು, ಸರ್ಕಾರಿ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಬೇಕು. ವಿದ್ಯುತ್ ಖಾಸಗೀಕರಣ ಮಾಡಿದ್ದೇಯಾದರೆ ಜೆಡಿಎಸ್ ಪಕ್ಷ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.

ಜೆಡಿಎಸ್ ಹಾನಗಲ್ಲ ತಾಲೂಕು ಅಧ್ಯಕ್ಷ ರಾಮನಗೌಡ ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ಸಾರ್ವಜನಿಕ ಹಿತಾಸಕ್ತಿಯನ್ನು ಕಡೆಗಣಿಸಿ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಇದರಿಂದ ರೈತರು, ದೀನದಲಿತರು, ಗ್ರಾಹಕರ ಮೇಲೆ ಆರ್ಥಿಕ ಹೊರೆ ಬೀಳುತ್ತದೆ. ಉಚಿತವಾಗಿ ಸಿಗುವ ಪಂಪ್‌ಸೆಟ್‌ಗಳಿಗೆ ಕರೆನ್ಸಿ ಹಾಕಿಸಿ ಬಳಕೆ ಮಾಡುವ ಅನಿವಾರ್ಯತೆ ಸೃಷ್ಠಿಯಾಗುತ್ತದೆ. ದಿನಕ್ಕೊಂದು ಕಾಯಿದೆ ಕಾನೂನು ತರಲು ಹೊರಟಿರುವ ಸರ್ಕಾರದಿಂದ ಜನರು ರೋಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ. ಸಿದ್ದಬಸಪ್ಪ ಯಾದವ, ಜಿಲ್ಲಾ ಉಪಾಧ್ಯಕ್ಷ ಅಮೀರ್‌ಜಾನ್ ಬೇಫಾರಿ, ಎಸ್.ಎಲ್. ಕಾಡದೇವರಮಠ, ಶಿವಾನಂದ ಕರಿಗಾರ ಮಾತನಾಡಿದರು. ಮೂಕಪ್ಪ ಪಡಿಯಪ್ಪನವರ, ಸಲೀಂ ಸಮನೊಳ್ಳಿ, ಶಂಕರಯ್ಯ ಹಿರೇಮಠ, ಮೂಕಪ್ಪ ಬಾರ್ಕಿ, ನಂದೀಶ ಕ್ಷೌರದ, ರುದ್ರಗೌಡ ಪಾಟೀಲ, ಎನ್.ಎಸ್. ತಳವಾರ, ಶಿವಾನಂದ ಯಲಿಗಾರ, ನಿಂಗರಾಜ ಸತ್ಯಪ್ಪನವರ, ಸಿದ್ದಪ್ಪ ಗುಡಿಮುಂದಿನವರ, ರಮೇಶ ಮಾಕನೂರ, ಶಿವಪುತ್ರಪ್ಪ ನಡುವಿನಮನಿ, ಎಂ.ಎಸ್. ಕೊಪ್ಪದ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೌರ್ಜನ್ಯ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್