ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹನ । ಜಿಲ್ಲಾಧಿಕಾರಿ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ । ನಿಷ್ಪಕ್ಷಪಾತ ತನಿಖೆಗೆ ಒತ್ತಾಯ
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದಿಂದ ಜಿಲ್ಲೆಯಾದ್ಯಂತ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಪೆನ್‌ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಲಾಯಿತು. ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯಿತು. ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿ ಅಲ್ಲಿಂದ ಕಳುಹಿಸಿದರು.ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಡಿ.ಕೆ. ಶಿವಕುಮಾರ್ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು, ದಹಿಸಿ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಘೋಷಣೆ ಕೂಗಿದರು.
‘ಅಧಿಕಾರ ದುರುಪಯೋಗ ಪಡಿಸಿಕೊಂಡಿರುವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ಕ್ರಮ ಜರುಗಿಸಬೇಕು. ಅಲ್ಲದೆ ಇವರೊಂದಿಗೆ ಪೆನ್‌ಡ್ರೈವ್ ಹಂಚಿಕೆಯಲ್ಲಿ ಭಾಗಿಯಾಗುವ ಮೂಲಕ ಮಹಿಳೆಯರು, ಹೆಣ್ಣುಮಕ್ಕಳ ಮಾನ ಹರಾಜಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಡಿಸಿಎಂ ಸೇರಿದಂತೆ ಮಾಜಿ ಸಂಸದ, ರಾಜಕೀಯ ಲಾಭಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರುವ ಜಾಯಮಾನ ಹೊಂದಿರುವ ಎಲ್.ಆರ್. ಶಿವರಾಮೇಗೌಡ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್, ಕಾರು ಚಾಲಕ ಕಾರ್ತಿಕ್, ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು ಅಲಿಯಾಸ್ ಪುಟ್ಟಿ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿ, ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಪಡಿಸುತ್ತೇವೆ’ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್. ಲಿಂಗೇಶ್, ಶಾಸಕರಾದ ಸಿ.ಎನ್.ಬಾಲಕೃಷ್ಣ, ಎ.ಮಂಜು, ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ, ಬೇಲೂರು ತಾಲೂಕು ಅಧ್ಯಕ್ಷ ತೋಚ. ಅನಂತ ಸುಬ್ಬರಾಯ, ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಪ್ರತಿಭಟನೆಯಲ್ಲಿ ಭಾಗಿಯಾದರು.
ಜೆಡಿಎಸ್ ಹಾಸನ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ, ಮಾಧ್ಯಮ ವಕ್ತಾರ ಹೊಂಗೆರೆ ರಘು, ಮುಖಂಡರಾದ ಗಿರೀಶ್, ಸಿ.ಆರ್. ಶಂಕರ್, ಸುಮಾ, ಪ್ರೇಮಮ್ಮ, ಬಿದರಿಕೆರೆ ಜಯರಾಂ ಇದ್ದರು.