ಜಿಲ್ಲೆಯ ಅಭಿವೃದ್ಧಿ ಕಡೆಗಣನೆ ವಿರೋಧಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

KannadaprabhaNewsNetwork |  
Published : Oct 29, 2026, 01:45 AM IST
28ಎಚ್ಎಸ್ಎನ್12ಎ :  | Kannada Prabha

ಸಾರಾಂಶ

ಮಾಜಿ ಸಚಿವ ಎಚ್.ಡಿ. ರೇವಣ್ಣ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ನೀರಾವರಿ ಯೋಜನೆಗಳು, ಭೂಸ್ವಾಧೀನ, ಕಂದಾಯ ಕಡತಗಳ ವಿಲೇವಾರಿ ಹಾಗೂ ಮೂಲಸೌಕರ್ಯ ಕಾಮಗಾರಿಗಳಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು. ಹಾಸನಾಂಬ ಜಾತ್ರೆ ನಡೆಸುತ್ತಿರುವುದು ಸಂತೋಷದ ವಿಚಾರ. ಆದರೆ, ಅರ್ಧಗಂಟೆ ಬಿಡುವು ಮಾಡಿಕೊಂಡು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆಯ ಬಗ್ಗೆಯೂ ಗಮನಹರಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಹಾಸನ

ರೈತರಿಗೆ ಬರ ಪರಿಹಾರ ವಿತರಣೆ, ನೀರಾವರಿ ಸಮಸ್ಯೆ ಪರಿಹಾರ, ಕಂದಾಯ ಇಲಾಖೆಯಲ್ಲಿನ ಬಾಕಿ ಕಡತಗಳ ವಿಲೇವಾರಿ, ಹಾಸನ ನಗರದ ಅಭಿವೃದ್ಧಿ ಬಗ್ಗೆ ಗಮನ ಇಲ್ಲದೆ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಸಲ್ಲದ ಆರೋಪ ಪ್ರತ್ಯಾರೋಪಗಳಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ ಎಂದು ಆರೋಪಿಸಿ ಜೆಡಿಎಸ್ ವತಿಯಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಆರಂಭವಾದ ಮೆರವಣಿಗೆ ಎನ್. ಆರ್‌. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿತು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಬಳಿಕ ಆಗಮಿಸಿದ ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಸಚಿವ ಎಚ್.ಡಿ. ರೇವಣ್ಣ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ನೀರಾವರಿ ಯೋಜನೆಗಳು, ಭೂಸ್ವಾಧೀನ, ಕಂದಾಯ ಕಡತಗಳ ವಿಲೇವಾರಿ ಹಾಗೂ ಮೂಲಸೌಕರ್ಯ ಕಾಮಗಾರಿಗಳಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು. ಹಾಸನಾಂಬ ಜಾತ್ರೆ ನಡೆಸುತ್ತಿರುವುದು ಸಂತೋಷದ ವಿಚಾರ. ಆದರೆ, ಅರ್ಧಗಂಟೆ ಬಿಡುವು ಮಾಡಿಕೊಂಡು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆಯ ಬಗ್ಗೆಯೂ ಗಮನಹರಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಕಡತಗಳ ವಿಲೇವಾರಿಗೆ ಕ್ರಮ ಕೈಗೊಳ್ಳಿ

ಎತ್ತಿನಹೊಳೆ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಿಗೆ ಸಾವಿರಾರು ಕೋಟಿ ರೂಪಾಯಿ ವೆಚ್ಚವಾಗಿದ್ದರೂ ರೈತರಿಗೆ ಸಮರ್ಪಕವಾಗಿ ನೀರು ದೊರೆಯುತ್ತಿಲ್ಲ. ಕೆರೆಗಳಿಗೆ ನೀರು ಹರಿಸುವುದು ಹಾಗೂ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ರೈತರ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಮಾರು ೨೪ ಸಾವಿರ ಕಂದಾಯ ಕಡತಗಳು ಬಾಕಿ ಉಳಿದಿವೆ ಎಂಬುದು ಗಂಭೀರ ವಿಚಾರ. ಸಕಲೇಶಪುರ, ಬೇಲೂರು, ಅರಸೀಕೆರೆ, ಹಾಸನ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ರೈತರು ದಾಖಲೆಗಳಿಗಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಜಿಲ್ಲಾಧಿಕಾರಿಗಳು ಸಭೆ ನಡೆಸಿ, ಕಾಲಮಿತಿ ನಿಗದಿಪಡಿಸಿ ಕಡತಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಹಾಸನ ವಿಮಾನ ನಿಲ್ದಾಣ, ಹಾಸನ-ಬೇಲೂರು ರಸ್ತೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಬೇಕು. ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಎ. ಮಂಜು ಮಾತನಾಡಿ, ರೈತರ ಸಾಲಮನ್ನಾ, ಬರ ಪರಿಹಾರ ಹಾಗೂ ಪಶುಸಂಗೋಪನಾ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಪಶುವೈದ್ಯರ ಕೊರತೆಯಿಂದ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ತೊಂದರೆಯಾಗುತ್ತಿದೆ. ಅಗತ್ಯ ಸಿಬ್ಬಂದಿ ನೇಮಕಾತಿ ನಡೆಸಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಮಾತನಾಡಿ, ನೇಮಕಾತಿ ಅಕ್ರಮಗಳ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೆ ಸಿಬಿಐ ಅಥವಾ ನ್ಯಾಯಾಂಗ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. ಸ್ಟಿಂಗ್ ಆಪರೇಷನ್ ಪ್ರಕರಣದ ಆರೋಪಿಗಳ ವಿರುದ್ಧವೂ ಕಾನೂನು ಕ್ರಮಕ್ಕೆ ಆಗ್ರಹಿಸಲಾಯಿತು. ಶಾಸಕ ಸಿ.ಎನ್. ಬಾಲಕೃಷ್ಣ ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಅನುದಾನ ಬಿಡುಗಡೆಯಾಗದಿರುವುದನ್ನು ಟೀಕಿಸಿದರು.

ಶಾಸಕ ಎಚ್.ಪಿ. ಸ್ವರೂಪ್ ಮಾತನಾಡಿ, ಹಾಸನ ನಗರದ ಅಭಿವೃದ್ಧಿಗಾಗಿ ಘೋಷಿಸಿರುವ ೧೮೫ ಕೋಟಿ ರೂಪಾಯಿ ಅನುದಾನವನ್ನು ಬಳಸಿಕೊಂಡು ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು ಎಂದು ಒತ್ತಾಯಿಸಿದರು. ನಗರಸಭೆಯನ್ನು ನಗರಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ಸುಮಾರು ೮೦ ಗ್ರಾಮ ಪಂಚಾಯಿತಿಗಳು ಹಾಗೂ ೫೦ಕ್ಕೂ ಹೆಚ್ಚು ಗ್ರಾಮಗಳನ್ನು ಸೇರ್ಪಡೆ ಮಾಡಲಾಗಿದೆ. ನಗರ ವ್ಯಾಪ್ತಿ ವಿಸ್ತರಣೆಯಾದಂತೆ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಅಗತ್ಯವೂ ಹೆಚ್ಚಾಗಿದೆ. ಆದರೆ, ಅದಕ್ಕೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ದೂರಿದರು. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಹಾಸನ ನಗರದ ಅಭಿವೃದ್ಧಿಗೆ ೧೮೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳಿಗಾಗಿ ಕ್ರಿಯಾಯೋಜನೆ ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕಿತ್ತು. ಆದರೂ ಕಾಮಗಾರಿಗಳು ಆರಂಭವಾಗದಿರುವುದು ಸಾರ್ವಜನಿಕರಿಗೆ ನಿರಾಸೆ ಮೂಡಿಸಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜೆಡಿಎಸ್‌ನ ನೂತನ ಜಿಲ್ಲಾಧ್ಯಕ್ಷ ನಟರಾಜ್, ಮಾಜಿ ಶಾಸಕ ಕೆ. ಎಸ್. ಲಿಂಗೇಶ್, ಕಾಯಾಧ್ಯಕ್ಷ ಅಶೋಕ್, ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಜಿಲ್ಲಾ ವಕ್ತಾರ ರಘು ಹೊಂಗೆರೆ, ಗಿರೀಶ್, ಹರ್ಷವರ್ಧನ್, ವಿವೇಕ್ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

=====

ಹೇಳಿಕೆ1

ಹಾಸನ ನಗರದ ಅಭಿವೃದ್ಧಿಗಾಗಿ ಘೋಷಿಸಿರುವ ೧೮೫ ಕೋಟಿ ರುಪಾಯಿ ಅನುದಾನ ಬಳಸಿ ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು. ವಿಳಂಬ ಮುಂದುವರಿದರೆ ಹೋರಾಟ ತೀವ್ರಗೊಳಿಸಿ ರಾಜ್ಯಪಾಲರ ಗಮನಕ್ಕೆ ತರಲಾಗುವುದು.

ಎಚ್.ಪಿ. ಸ್ವರೂಪ್, ಶಾಸಕಹೇಳೀಕೆ2

ರೈತರ ಹಿತದೃಷ್ಟಿಯಿಂದ ಹಿಂದಿನ ಸರ್ಕಾರಗಳು ರೂಪಿಸಿದ್ದ ನೀರಾವರಿ ಯೋಜನೆಗಳ ಪ್ರಯೋಜನ ಇಂದು ಸಮರ್ಪಕವಾಗಿ ದೊರೆಯುತ್ತಿಲ್ಲ. ಭತ್ತದ ಬೆಳೆಗಾರರು ನೀರಿನ ಕೊರತೆ ಹಾಗೂ ಬೆಳೆ ಸಾಗಣೆ ಸಮಸ್ಯೆ ಎದುರಿಸುತ್ತಿದ್ದು, ಸರ್ಕಾರ ತಕ್ಷಣ ಸ್ಪಂದಿಸಬೇಕು.

ಸೂರಜ್ ರೇವಣ್ಣ, ಎಂಎಲ್‌ಸಿ

========

ಫೋಟೋ:

ಹಾಸನ ನಗರದ ಅಭಿವೃದ್ಧಿ ಸರ್ಕಾರ ಗಮನ ನೀಡುತ್ತಿಲ್ಲ ಎಂದು ಆರೋಪಿಸಿ ಶಾಸಕ ರೇವಣ್ಣ ನೇತೃತ್ವದಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಯಿತು. ಫೋಟೋ

ಪ್ರತಿಭಟನೆಯಲ್ಲಿ ಜೆಡಿಎಸ್‌ನ ನೂರಾರು ಮುಖಂಡರು ಕಾರ್ಯಕರ್ತರು ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್
ಕಸ ವಿಲೇ ವಿಚಾರಕ್ಕೆ ಹಲ್ಲೆ: ಕೇಸ್‌ ರದ್ದತಿಗೆ ಹೈಕೋರ್ಟ್ ನಿರಾಕರಣೆ