ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಿ ಮಾತನಾಡಿದ ಪ್ರತಿಭಟನಾಕಾರರು, ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ವಿರುದ್ಧ "ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್ " ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ಅವಹೇಳನವಾಗಿ ನಿಂದನೆ ಮಾಡಿದ್ದಾರೆ. ಶೀಘ್ರವೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ ಪದಬಳಕೆ ಮಾಡಿ, ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಲ್ಲದೇ, ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜಮೀರ್ ಜನರನ್ನು ಪ್ರಜೋದಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.ರಾಜ್ಯ ಸರ್ಕಾರ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಎನ್ಡಿಎ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಕವನ ಗೌಡ, ಪ್ರಸಾದ್ ವಳಲಹಳ್ಳಿ, ಕರ್ಗೂರು ರಮೇಶ್, ಉದೀಶ್, ಕ್ಯಾನಹಳ್ಳಿ ರಂಜಿತ್, ಗಿರೀಶ್ ಇನ್ನಿತರರು ಇದ್ದರು.