ಮಂಗಳೂರು: ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳ, ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸುವುದು, ನೀರಿನ ಪರೀಕ್ಷೆ ಮಾಡುತ್ತಿರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಸೂಚಿಸಿದರು.ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಟ್ಯಾಂಕ್ ಸ್ವಚ್ಛಗೊಳಿಸುವಿಕೆ ಅತ್ಯಂತ ಅತ್ಯಗತ್ಯವಾಗಿದ್ದು, ನೀರಿನ ಟ್ಯಾಂಕ್‍ಗಳನ್ನು ವಿಳಂಬ ಮಾಡದೆ ಕಾಲಕಾಲಕ್ಕೆ ಸ್ವಚ್ಛಗೊಳಿಸುತ್ತಿರಬೇಕು. ಅಂಗನವಾಡಿಗಳು, ಶಾಲಾ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಲು ನಿಯಮಿತವಾದ ನೀರಿನ ಪರೀಕ್ಷೆಯನ್ನು ಮಾಡಬೇಕು. ರೋಗಗಳು ಹರಡದಂತೆ ತಡೆಯಲು ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗಳಿಗೆ ಒಳಪಡಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.