ರೋಣ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ ಜಿ ರಾಮ್ ಜಿ ಯೋಜನೆಯಡಿ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಆ. 15ರಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದು ರೋಣ ಹಾಗೂ ಗಜೇಂದ್ರಗಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.
ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರಿಶೀಲಿಸುವುದು, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್ ಮಾಡಿಸಿಕೊಡುವುದು, ಜಾಬ್ ಕಾರ್ಡ್ ನವೀಕರಣ ಹಾಗೂ ಇ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಸೇರಿದಂತೆ ಉದ್ಯೋಗದ ಬೇಡಿಕೆಯನ್ನು ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿಯಲ್ಲಿ ಮಾಡಲಾಗುತ್ತಿದೆ ಎಂದರು.
ಗ್ರಾಪಂ ವ್ಯಾಪ್ತಿಯಲ್ಲಿ ಮನೆ- ಮನೆ ಭೇಟಿ ಮೂಲಕ ಸಾರ್ವಜನಿಕರಿಗೆ ಯೋಜನೆಯ ಕುರಿತು ಮಾಹಿತಿ ನೀಡುವುದು, ಗ್ರಾಮ ಮಟ್ಟದಲ್ಲಿ ಸಭೆಗಳನ್ನು ನಡೆಸುವುದು, ಪೋಸ್ಟರ್ ಹಾಗೂ ಬ್ಯಾನರ್‌ಗಳ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜಾಬ್ ಕಾರ್ಡ್ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲು ಸೂಚಿಸಲಾಗಿದೆ. ಗ್ರಾಮೀಣ ಜನರು ಯೋಜನೆಯ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ ಎಂದರು.ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿತ ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ನಿರ್ವಹಿಸುವುದಕ್ಕೂ ಒತ್ತು ನೀಡಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.