ಮಂಗಳವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರಗಳ ವತಿಯಿಂದ ಕೌಶಲ್ಯ ರೋಜ್‌ಗಾರ್ ಮೇಳ ನೆರವೇರಿತು.
ಕನ್ನಡಪ್ರಭ ವಾರ್ತೆ ಉಡುಪಿ
ಭಾರತ ದೇಶವು ಜಗತ್ತಿನಲ್ಲಿ ಅತಿ ಹೆಚ್ಚು ಯುವ ಸಂಪತ್ತನ್ನು ಹೊಂದಿದ್ದು, ಸೃಜನಾತ್ಮಕ ಕೌಶಲ್ಯಗಳನ್ನು ನಮ್ಮ ಯುವಪೀಳಿಗೆ ಹೊಂದಿದೆ. ಈ ಕೌಶಲ್ಯವನ್ನು ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಂಗಳವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರಗಳ ವತಿಯಿಂದ ನಡೆದ ಕೌಶಲ್ಯ ರೋಜ್‌ಗಾರ್ ಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಇತ್ತೀಚಿಗೆ ನಿರುದ್ಯೋಗ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಉದ್ಯೋಗ ಮೇಳಗಳ ಆಯೋಜನೆ ಅತ್ಯವಶ್ಯಕವಾಗಿದೆ. ಸ್ವ-ಉದ್ಯೋಗ ಹೊಂದಲು ಆಸಕ್ತರಿಗೆ ಸಾಕಷ್ಟು ಅವಕಾಶಗಳಿವೆ. ಸರ್ಕಾರ ಸಾಲ ಸೌಲಭ್ಯ ಹಾಗೂ ಸಹಾಯಧನ ನೀಡುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಅಭ್ಯರ್ಥಿಗಳು ಉದ್ಯೋಗ ಮೇಳದ ಸಂದರ್ಶನದಲ್ಲಿ ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಮುಕ್ತವಾಗಿ ಹಂಚಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಎ ಸುವರ್ಣ, ಉಡುಪಿ ಜಿಲ್ಲೆಯು ಶಿಕ್ಷಣ ಕಾಶೀ ಎಂದೇ ಹೆಸರುವಾಸಿಯಾಗಿದ್ದು, ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳಿಂದ ಸ್ವಂತ ಉದ್ಯೋಗ ಕೈಗೊಂಡು ತಮ್ಮ ಜಿಲ್ಲೆಯಲ್ಲಿಯೇ ಬದುಕು ಕಟ್ಟಿಕೊಳ್ಳಬೇಕು ಎಂದರು.
2022-23 ನೇ ಸಾಲಿನಲ್ಲಿ ಸಿ.ಎಂ.ಕೆ.ಕೆ.ವೈ ಯೋಜನೆಯಡಿ ಸೆಲ್ಫ್ ಎಂಪ್ಲಾಯ್‌ಮೆಂಟ್ ಟೈಲರ್ ಜಾಬ್ ರೋಲ್‌ನಲ್ಲಿ ತರಬೇತಿ ಪಡೆದ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಟೂಲ್‌ಕಿಟ್ ವಿತರಿಸಲಾಯಿತು.
ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಲೀಡ್ ಬ್ಯಾಂಕ್ ಪ್ರಬಂಧಕ ಹರೀಶ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಪ್ರಸಾದ್ ಮತ್ತಿತರರು ಇದ್ದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎ. ಶ್ರೀನಿವಾಸ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೀಕ್ಷಿತ್ ಶೆಟ್ಟಿ ನಿರೂಪಿಸಿದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಮದಾಸ ಪ್ರಭು ವಂದಿಸಿದರು.
ಉದ್ಯೋಗ ಮೇಳದಲ್ಲಿ 2000 ಕ್ಕೂ ಅಧಿಕ ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದು, 40 ಕ್ಕೂ ಹೆಚ್ಚು ಪ್ರತಿಷ್ಟಿತ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಕ್ಕೆ ಸಂದರ್ಶನ ನಡೆಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.