ತಂಬಾಕು ಮುಕ್ತ ಸಮಾಜ ನಿರ್ಮಿಣಕ್ಕೆ ಕೈಜೋಡಿಸಿ

KannadaprabhaNewsNetwork | Published : Jun 3, 2024 12:30 AM

ಸಾರಾಂಶ

ತಂಬಾಕು ಉತ್ಪನ್ನಗಳ ಸೇವನೆಯಿಂದ ದುಷ್ಪರಿಣಾಮಗಳು ಬೀರುತ್ತಿದ್ದು, ಇದಕ್ಕೆ ಕಡಿವಾಣ ಅತ್ಯವಶ್ಯಕವಾಗಿದೆ. ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡುವುದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ, ಹಿರಿಯ ಸಿವ್ಹಿಲ್ ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ತಂಬಾಕು ಉತ್ಪನ್ನಗಳ ಸೇವನೆಯಿಂದ ದುಷ್ಪರಿಣಾಮಗಳು ಬೀರುತ್ತಿದ್ದು, ಇದಕ್ಕೆ ಕಡಿವಾಣ ಅತ್ಯವಶ್ಯಕವಾಗಿದೆ. ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡುವುದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ, ಹಿರಿಯ ಸಿವ್ಹಿಲ್ ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಹತ್ತಿರವಿರುವ ಗಾಂಧಿಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ವತಿಯಿಂದ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾತನಾಡಿದರು.

ಸಮಾಜದ ಮಕ್ಕಳು, ಯುವಜನಾಂಗ ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿವೆ. ಈ ವಿಷಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಕಡಿವಾಣ ಅತ್ಯವಶ್ಯತಕವಾಗಿದೆ. ತಂಬಾಕು ಉತ್ಪನ್ನಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ನೈತಿಕತೆಯಿಂದ ಜವಾಬ್ದಾರಿಯನ್ನು ಅರಿತುಕೊಂಡು ಅರಿವು ಹೊಂದುವುದಲ್ಲದೇ, ಈ ಕುರಿತು ಪ್ರತಿಯೊಬ್ಬರಲ್ಲಿಯೂ ಅರಿವು ಮೂಡಿಸುವ ಅವಶ್ಯಕತೆ ಇದೆ. ಅರಿವು ಮೂಡಿಸುವ ಕಾರ್ಯದಲ್ಲಿ ಮಾಧ್ಯಮದವರ ಪಾತ್ರವೂ ಸಹ ಅತಿಮುಖ್ಯವಾಗಿದೆ ಎಂದರು.

ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ವಿವಿಧ ಟಿವಿ ಮಾಧ್ಯಮ, ವ್ಯಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಜಾಹೀರಾತುಗಳಿಗೆ ಮರುಳಾಗಿ ಯುವ ಜನಾಂಗ ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಪ್ರಸ್ತುತ ವಿವಿಧ ಕಾನೂನು-ಕಾಯ್ದೆಗಳ ಅನುಷ್ಠಾನದಿಂದ ಇಂತಹ ಜಾಹೀರಾತುಗಳ ಕಡಿವಾಣವಾಗಿದ್ದು, ಆಯಾ ಹಂತಗಳಲ್ಲಿಯೇ ಇದನ್ನು ತಡೆಗಟ್ಟಬೇಕು. ದುಶ್ಟಟಗಳಿಗೆ ಬಲಿಯಾದವರು ಕೇವಲ ತಾವೊಬ್ಬರೇ ಬಲಿಯಾಗುವುದಿಲ್ಲದೇ ಇತರರಿಗೂ ಪರಿಣಾಮ ಬೀರಿದ ಅನೇಕ ಉದಾಹರಣೆಗಳಿವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ-ಅರಿವು ಹೊಂದಬೇಕು. ವಿಶೇಷವಾಗಿ ಪಾಲಕರು ತಮ್ಮ ಮಕ್ಕಳ ಮೇಲೆ ನಿರಂತರವಾಗಿ ಗಮನ ಹರಿಸಿ ಯಾವುದೇ ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕವಿತಾ ಮಾತನಾಡಿ, ಪ್ರತಿ ವರ್ಷ ಮೇ.೩೧ ರಂದು ವಿಶ್ವ ತಂಬಾಕು ರಹಿತ ದಿನವನ್ನಾಗಿ ಆಚರಿಸಲಾಗುತ್ತಿದೆ. ತಂಬಾಕು ಉತ್ಪನ್ನಗಳಿಂದ ಮಕ್ಕಳ ರಕ್ಷಣೆ ಕುರಿತು ವ್ಯಾಪಕವಾಗಿ ಪ್ರಚಾರ ಕೈಗೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆ ಹೆಚ್ಚಾಗುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ವಿವಿಧ ಕಾಯ್ದೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾಧ್ಯಮಗಳು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಿಕೊಂಡರು.ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಮಾತನಾಡಿದರು. ಡಾ.ರೂಪಶ್ರೀ ಅತಿಥಿ, ಹಿರಿಯ ಸಿವ್ಹಿಲ್ ನ್ಯಾಯಾಧೀಶ, ಡಿಎಚ್‌ಓ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ.ಎಸ್.ಎಲ್.ಲಕ್ಕಣ್ಣವರ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜೈಬುನ್ನೀಸಾ ಬೀಳಗಿ, ಡಾ.ರಾಜೇಶ್ವರಿ ಗೊಲಗೇರಿ, ತಾಲೂಕಾ ಆರೋಗ್ಯಾಧಿಕಾರಿ ಪರಶುರಾಮ ಹಿಟ್ನಳ್ಳಿ, ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್, ಜೈನರತ್ನ ಯುವಕ ಪರಿಷತ್‌ನ ವಿಜಯ ರುಣವಾಲ, ಕಾರ್ಯಕ್ರಮದ ಸಂಯೋಜಕ ಪ್ರಕಾಶ ಚವ್ಹಾಣ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆಯ ಸುರೇಶ ಹೊಸಮನಿ ಕಾರ್ಯಕ್ರಮ ನಿರೂಪಿಸಿದರು.

Share this article