ಮಣಿಪಾಲ್ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಮಾಜದ ಅಂಕು- ಡೊಂಕುಗಳನ್ನು ತಿದ್ದುವಲ್ಲಿ ಮಾಧ್ಯಮದವರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯ್ ಆನಂದ್ ಸಲಹೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಮಣಿಪಾಲ್ ಆಸ್ಪತ್ರೆ ವತಿಯಿಂದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಕರ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜದ ತಪ್ಪುಗಳನ್ನು ಎತ್ತಿ ಹಿಡಿಯುವ ಪತ್ರಕರ್ತರು ತಮ್ಮ ಆರೋಗ್ಯವನ್ನು ಕಡೆಗಣಿಸಬಾರದು. ಇಂದು ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.ಪತ್ರಕರ್ತರು ತಮ್ಮ ಕೆಲಸದ ನಡುವೆ ಆಗಾಗ್ಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಜೊತೆಗೆ ತಮ್ಮ ಕುಟುಂಬದ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಹೇಳಿದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್. ರಾಘವೇಂದ್ರ ಮಾತನಾಡಿ, ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗಾಗಿ ಆರೋಗ್ಯ ತಪಾಸಣೆ ನಡೆಸುವುದಾಗಿ ಮಣಿಪಾಲ್ ಆಸ್ಪತ್ರೆಯವರು ತಿಳಿಸಿದ್ದರು. ಅದರಂತೆ ನಾವು ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದೇವೆ. ಪ್ರತಿಯೊಬ್ಬರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಾವಶ್ಯಕ ಎಂದು ಹೇಳಿದರು.