ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜನವರಿ 26ರ ಗಣರಾಜ್ಯೋತ್ಸವದಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದ್ದು, ಧ್ವಜಾರೋಹಣ ನೆರವೇರಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಗೆ ಸೂಚಿಸಿದರು. ಗಣರಾಜ್ಯೋತ್ಸವವನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳನ್ನೊಳಗೊಂಡ ಸ್ವಾಗತ, ಪೆರೇಡ್, ಕ್ರೀಡಾಂಗಣ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಕಾರ್ಯೋನ್ಮುಖರಾಗಲು ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಎನ್‌ಸಿಸಿ, ಅಗ್ನಿಶಾಮಕ, ಪೊಲೀಸ್ ಇಲಾಖೆ, ಗೃಹರಕ್ಷಕದಳದವರಿಂದ ಆಕರ್ಷಕ ಕವಾಯತು ಏರ್ಪಡಿಸಬೇಕು. ಕವಾಯತಿಗಾಗಿ ಜನವರಿ 22 ರಿಂದ 24ರವರೆಗೆ ತಾಲೀಮು ನಡೆಸಲು ಅನುವಾಗುವಂತೆ ಧೂಳು ಬಾರದ ರೀತಿಯಲ್ಲಿ ನೀರು ಸಿಂಪಡಿಸಿ ಮೈದಾನವನ್ನು ಅಣಿಗೊಳಿಸಬೇಕು. ಧ್ವಜ ಸ್ತಂಭ ಹಾಗೂ ವೇದಿಕೆ ಸುತ್ತಮುತ್ತ ಹೂಕುಂಡಗಳಿಂದ ಅಲಂಕರಿಸಬೇಕು. ಜಿಲ್ಲೆಯ 10 ಕ್ರೀಡಾ ಸಾಧಕರನ್ನು ಗುರುತಿಸಿ ಗೌರವಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಗಣರಾಜ್ಯೋತ್ಸವದ ಅಂಗವಾಗಿ ಜನವರಿ 25 ಹಾಗೂ 26ರಂದು ನಗರದ ಪ್ರಮುಖ ವೃತ್ತ ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ದಿನಾಚರಣೆ ಅಂಗವಾಗಿ ತಾಲೀಮು ಹಾಗೂ ಇನ್ನಿತರೆ ಕಾರ್ಯಕ್ರಮಗಳು ನಡೆಯುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜ.25 ಹಾಗೂ 26ರಂದು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲನೆಯನ್ನು ಜನವರಿ 25ರಂದು ಸಂಜೆ 4 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಿದ್ದು, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ರಾಷ್ಟ್ರೀಯ ಹಬ್ಬಕ್ಕೆ ಎಲ್ಲ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸೇರಿದಂತೆ ಲೋಕೋಪಯೋಗಿ, ಶಿಕ್ಷಣ, ಯುವ ಸಬಲೀಕರಣ, ವಾರ್ತಾ ಇಲಾಖೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.