ಜೂ.27ರಂದು ಅರ್ಥಪೂರ್ಣ ನಾಡಪ್ರಭು ಕೆಂಪೇಗೌಡರ ಜಯಂತಿ: ಲೋಕೇಶ್

KannadaprabhaNewsNetwork |  
Published : Jun 23, 2025, 11:46 PM IST
23ಕೆಎಂಎನ್ ಡಿ12 | Kannada Prabha

ಸಾರಾಂಶ

ನಾಡಪ್ರಭು ಕೆಂಪೇಗೌಡ ಜಯಂತಿ ಯಶಸ್ವಿಗೊಳಿಸಲು ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಬೇಕು, ಪೂರ್ವಭಾವಿ ಸಭೆಯಲ್ಲಿ ಮುಖಂಡರು ತಿಳಿಸಿದ ಎಲ್ಲಾ ಅಭಿಪ್ರಾಯಗಳಿಗೆ ಮನ್ಯತೆ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕು ಆಡಳಿತದಿಂದ ಜೂ.27ರಂದು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲು ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಲೊಕೇಶ್ ಮನವಿ ಮಾಡಿದರು.

ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ನಿಮಿತ್ತ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೂ.27ರಂದು ಬೆಳ್ಳಿ ರಥದಲ್ಲಿ ಕೆಂಪೇಗೌಡರನ್ನು ಭಾವಚಿತ್ರವನ್ನಿಟ್ಟು ಪಟ್ಟಣದ ತಾಲೂಕು ಪಂಚಾಯ್ತಿಯಿಂದ ಪ್ರಮುಖ ರಸ್ತೆಗಳಲ್ಲಿ ಜಾನಪದ ಕಲಾ ತಂಡದೊಂದಿಗೆ ಅದ್ಧೂರಿ ಮೆರವಣಿಗೆ ನಡೆದ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕೆಂಪೇಗೌಡರ ವಿಚಾರಧಾರೆಗಳ ಕುರಿತು ಸಂಪನ್ಮೂಲ ವ್ಯಕ್ತಿಯಿಂದ ಉಪನ್ಯಾಸ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮ ಯಶಸ್ವಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಇಲಾಖಾವಾರು ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು. ಜಯಂತಿಗೆ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದರು.

ಬೆಂಗಳೂರು ಕಟ್ಟಿದ ಕೆಂಪೇಗೌಡರು ಪ್ರಬುದ್ದರು, ವಿದ್ಯಾವಂತ, ರಾಜಕೀಯ ಚಾಣಕ್ಷ ಹೊಂದಿ ಎಲ್ಲಾ ಸಮುದಾಯದ ವೃತ್ತಿಪರರಿಗೆ ಪೇಟೆಗಳನ್ನು ಕಟ್ಟಿ, ಜನ ಜಾನುವಾರುಗಳಿಗೆ ಅನುಕೂಲವಾಗಲು ಕೆರೆ ಕಟ್ಟೆಗಳನ್ನು ನಿರ್ಮಿಸಿ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.

ನಾಡಪ್ರಭು ಕೆಂಪೇಗೌಡ ಜಯಂತಿ ಯಶಸ್ವಿಗೊಳಿಸಲು ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಬೇಕು, ಪೂರ್ವಭಾವಿ ಸಭೆಯಲ್ಲಿ ಮುಖಂಡರು ತಿಳಿಸಿದ ಎಲ್ಲಾ ಅಭಿಪ್ರಾಯಗಳಿಗೆ ಮನ್ಯತೆ ನೀಡಲಾಗುವುದು ಎಂದರು.

ಸಭೆಯಲ್ಲಿ ಹಲವು ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಾದೇಶ್, ತಾಪಂ ಯೋಜನಾಧಿಕಾರಿ ದೀಪು ಸೇರಿದಂತೆ ಅಧಿಕಾರಿಗಳು ವಿವಿಧ ಸಮುದಾಯ ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ