ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ನ್ಯಾ.ರಶ್ಮಿ ಕಳವಳ

KannadaprabhaNewsNetwork | Published : Mar 12, 2025 12:47 AM

ಸಾರಾಂಶ

ಚಿತ್ರದುರ್ಗದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ರಶ್ಮಿ ಎಸ್.ಮರಡಿ ಉದ್ಘಾಟಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಪ್ರಸ್ತುತ ಸೈಬರ್ ಅಪರಾಧಗಳ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಹಿಳೆಯರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಕಾರಣವಾಗುತ್ತಿದೆ ಎಂದು ಚಿತ್ರದುರ್ಗ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ರಶ್ಮಿ ಎಸ್.ಮರಡಿ ಕಳವಳ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಮಹಿಳೆಯರಿಗೂ ಪ್ರಸ್ತುತ ಕಾನೂನುಗಳ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದು ಹೇಳಿದರು.

ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಪ್ರತಿನಿತ್ಯವೂ ನಡೆಯಬೇಕು. ಯಾವ ಮಹಿಳೆಗೆ ಎಲ್ಲೆಲ್ಲಿ ಕಾನೂನಿನ ಅವಶ್ಯಕತೆ ಇದೆಯೋ, ಅಂತಹ ಮಹಿಳೆಯರ ನೆರವಿಗಾಗಿ ಧಾವಿಸಿ ಸಹಾಯ ಮಾಡಿದಾಗ ಮಾತ್ರ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರಲಿದೆ ಎಂದರು.

ನ್ಯಾಯವಾದಿ ಡಿ.ಕೆ.ಶೀಲಾ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ತಾರತಮ್ಯ ಕಂಡುಬರುತ್ತಿದ್ದು, ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಲು ಸಾಧ್ಯವಾಗಿಲ್ಲ. ಇದಕ್ಕೆ ನಮ್ಮ ಮನಸ್ಥಿತಿ ಪ್ರಮುಖ ಕಾರಣವಾಗಿದೆ. ಹಾಗಾಗಿ ನಮ್ಮ ಮನೆಯಿಂದ, ನಮ್ಮಿಂದಲೇ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಲು ಮುಂದಾದಾಗ ಮಾತ್ರ ಸಮಾನತೆ ಸಾಧ್ಯವಾಗಲಿದೆ ಎಂದು ಹೇಳಿದರು.

ಮಹಿಳೆಯರು ಸಹ ಸಮಾನತೆ ಕೇಳಬೇಕೆ ಹೊರತು ಸ್ವೇಚ್ಛ ಪ್ರವೃತ್ತಿ ಪ್ರತಿಪಾದಿಸಬಾರದು. ಸ್ವೇಚ್ಛ ಪ್ರವೃತ್ತಿ ಯಾರಿಗೂ ಒಳ್ಳೆಯದಲ್ಲ. ಮಹಿಳೆಯರು ಎಲ್ಲ ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ಮಹಿಳೆಯರು ತಮ್ಮ ಕುಟುಂಬಕ್ಕೆ ಅಷ್ಟೇ ಮಹತ್ವ ಕೊಡಬೇಕು. ಇದರಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್ ಮಾತನಾಡಿ, ಪ್ರಸ್ತುತ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಭಾಗವಹಿಸಿ, ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ. ಮಹಿಳೆಯರು ಇಂದು ಶಿಕ್ಷಣವಂತರಾಗುತ್ತಿದ್ದು, ಸುರಕ್ಷತೆ ಬಗ್ಗೆ ತುಲನೆ ಮಾಡಿದಾಗ ಹೆಣ್ಣು ಮಕ್ಕಳ ದೌರ್ಜನ್ಯಕ್ಕೆ ಒಳಗಾಗುತ್ತಿರುವುದ ನೋಡುತ್ತಿದ್ದೇವೆ. ಹಾಗಾಗಿ ಮಹಿಳೆಯರ ಸುರಕ್ಷತೆ ಕೊರತೆ ಎದ್ದು ಕಾಣಿಸುತ್ತಿದೆ. ನಾವೆಲ್ಲರೂ ಸೇರಿ ಸಕರಾತ್ಮಕವಾಗಿ ಮಹಿಳೆಯರಲ್ಲಿ ಬದಲಾವಣೆ ತರಬೇಕು. ಅವರ ಹಕ್ಕುಗಳ ಉಲ್ಲಂಘನೆಯಾಗದಂತೆ ಜಾಗೃತಿ ವಹಿಸುವ ಅಗತ್ಯವಿದೆ ಎಂದು ಹೇಳಿದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ರಶ್ಮಿ ಅಕ್ಕ ಉದ್ಯೋಗಸ್ಥ ಮಹಿಳೆಯರಲ್ಲಿ ಒತ್ತಡ ನಿರ್ವಹಣೆ ಕುರಿತು ಹಾಗೂ ಸೈಬರ್ ಪೊಲೀಸ್ ಠಾಣೆಯ ಸಬ್‍ ಇನ್ಸ್‌ಪೆಕ್ಟರ್ ವೆಂಕಟೇಶ್ ಅವರು ಮಹಿಳೆಯರಿಗಾಗಿ ಸೈಬರ್ ಸುರಕ್ಷತೆ ವಿಷಯದ ಕುರಿತು ಉಪನ್ಯಾಸ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಅಧ್ಯಕ್ಷೆ ಕೊಲ್ಲಿಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಎಸ್.ವಿಜಯಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಿಗಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವೀಣಾ, ಸುಧಾ, ಅಭಿಲಾಷಾ ಇದ್ದರು.

Share this article