ಕಂಬಳಕ್ಕೆ 5 ಕೋಟಿ ರು. ವಿಶೇಷ ಅನುದಾನಕ್ಕೆ ಮನವಿ

KannadaprabhaNewsNetwork |  
Published : Sep 05, 2026, 02:45 AM IST
ಕಂಬಳ ಸಮಿತಿಯವರು ಉಸ್ತುವಾರಿ ಸಚಿವ ಯು.ಟಿ.ಖಾದರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದರು. | Kannada Prabha

ಸಾರಾಂಶ

: 2026ನೇ ಸಾಲಿನಲ್ಲಿ ರಾಜ್ಯದಲ್ಲಿ ನಡೆಯಲಿರುವ 27 ಕಂಬಳಗಳಿಗೆ 5 ಕೋಟಿ ರು.ವಿಶೇಷ ಸಹಾಯಧನ ನೀಡುವುದು ಸೇರಿದಂತೆ ಕಂಬಳ ಕ್ರೀಡೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ನೀಡುವಂತೆ ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಗುರುವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.

ಮಂಗಳೂರು: 2026ನೇ ಸಾಲಿನಲ್ಲಿ ರಾಜ್ಯದಲ್ಲಿ ನಡೆಯಲಿರುವ 27 ಕಂಬಳಗಳಿಗೆ 5 ಕೋಟಿ ರು.ವಿಶೇಷ ಸಹಾಯಧನ ನೀಡುವುದು ಸೇರಿದಂತೆ ಕಂಬಳ ಕ್ರೀಡೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ನೀಡುವಂತೆ ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಗುರುವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.

ಕಂಬಳದ ಓಟಗಾರರು, ಕೋಣಗಳ ಯಜಮಾನರು, ತೀರ್ಪುಗಾರರು ಹಾಗೂ ಕಂಬಳದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕ ವರ್ಗದವರ ಹಿತಾಸಕ್ತಿಗಾಗಿ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕು. ಕಂಬಳದ ಸಾಧಕರಿಗೆ ಕರ್ನಾಟಕ ಸರ್ಕಾರದ ವಿಶೇಷ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕ್ರೀಡಾ ರತ್ನ ಪ್ರಶಸ್ತಿ ಸೇರಿದಂತೆ ಸೂಕ್ತ ಗೌರವ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಕಂಬಳದ ಓಟಗಾರರಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಲು ರಾಜ್ಯ ಕಂಬಳ ಅಸೋಸಿಯೇಷನ್ ಮುಖಾಂತರ ವಿಶೇಷ ತರಬೇತಿ ಶಿಬಿರಗಳನ್ನು ಆಯೋಜಿಸಲು ಸರ್ಕಾರ ಪ್ರೋತ್ಸಾಹ ಮತ್ತು ಸಹಕಾರ ನೀಡಬೇಕು. ಕಂಬಳದ ಕಾರ್ಮಿಕರು, ಓಟಗಾರರು ಹಾಗೂ ತೀರ್ಪುಗಾರರಿಗೆ ಕಾರ್ಮಿಕ ಇಲಾಖೆಯ ಮೂಲಕ ಜೀವನ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು.

ಮುಂದಿನ ರಾಜ್ಯ ಬಜೆಟ್‌ನಲ್ಲಿ 27 ಕಂಬಳಗಳ ಆಯೋಜನೆಗೆ 5 ಕೋಟಿ ರು. ವಿಶೇಷ ಅನುದಾನವನ್ನು ಮುಖ್ಯಮಂತ್ರಿಗಳು ಘೋಷಿಸುವಂತೆ, ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಪ್ರಸ್ತಾವನೆ ಮಂಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಅವರಲ್ಲಿ ಮನವಿ ಮಾಡಲಾಯಿತು.

ಕಂಬಳದ ಮಹಾ ಪೋಷಕರಾಗಿ ಕಂಬಳ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ, ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಸಚಿವ ಯು.ಟಿ.ಖಾದರ್ ಅವರೊಂದಿಗೆ ಬೆಂಗಳೂರಿನಲ್ಲಿ ವಿಸ್ತೃತವಾಗಿ ಚರ್ಚಿಸಿದರು.

ಮನವಿ ಆಲಿಸಿದ ಸಚಿವ ಯು.ಟಿ.ಖಾದರ್ ಈ ಎಲ್ಲ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕಂಬಳ ಕ್ರೀಡೆಯ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ದೊರಕುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾತ್ಕಾಲಿಕ ಆಸ್ಪತ್ರೆ ತೆರೆಯಲು ತಾಲೂಕು ಆರೋಗ್ಯ ಅಧಿಕಾರಿಯವರ ನೇತೃತ್ವದಲ್ಲಿ ರಕ್ಷಾ ಸಮಿತಿ ಸಭೆ
ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಗೆ ಪ್ರೋತ್ಸಾಹ