ಜಾತಿ ವ್ಯವಸ್ಥೆ ವಿರುದ್ಧ ಸಮರ ಸಾರಿದ್ದ ಕನಕದಾಸರು: ವಕೀಲ ಎಲ್.ಪಿ.ಪ್ರಕಾಶ್‌ಗೌಡ

KannadaprabhaNewsNetwork |  
Published : Nov 09, 2025, 01:45 AM IST
8ಎಚ್ಎಸ್ಎನ್3 :  | Kannada Prabha

ಸಾರಾಂಶ

ದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದು, ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡವರು, ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರಾಗಿದ್ದರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಕನಕದಾಸರು ಬರೀ ಒಂದು ಜಾತಿಗೆ ಸೀಮಿತವಾದ ನಾಯಕರಲ್ಲ. ಎಲ್ಲಾ ಜಾತಿಗಳಿಗೂ ಮೀರಿದ ಮಹಾನ್ ನಾಯಕ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡ ತಿಳಿಸಿದರು.

ಅವರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ೧೫೦೯ರಲ್ಲಿ ಹಿಂದೂ ಕುರುಬ ಮತ್ತು ನಾಯಕ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿ ಮಗನಾಗಿ ಜನಿಸಿದರು.

೧೫- ೧೬ನೇಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ.

ದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದು, ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡವರು, ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರಾಗಿದ್ದರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತನಾಮ ಕಾಗಿನೆಲೆಯ ಆದಿಕೇಶವರಾಯ ಎಂಬುದಾಗಿದ್ದು, ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು ೩೧೬ ಕೀರ್ತನೆಗಳು ಹಾಗೂ ಇನ್ನಿತರೆ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳೆಂದರೆ ಮೋಹನ ತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಿಸಾರಗಳಾಗಿವೆ. ಮೋಹನತರಂಗಿಣಿಯು ೪೨ ಸಂದಿಗಳಿಂದ ಕೂಡಿದ್ದು, ಸಾಂಗತ್ಯದಲ್ಲಿ ರಚಿತವಾಗಿರುವ ೨೭೯೮ ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣನ ಚರಿತ್ರೆಯನ್ನು ಹೇಳುತ್ತಾ ತಮ್ಮ ಆದಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ತಾಪಂ ಇಒ ಹರೀಶ್, ಅಧಿಕಾರಿ ಗಿರೀಶ್, ಕೆಡಿಪಿ ಸದಸ್ಯ ಮಹೇಶ್‌ಕಬ್ಬಾಳು ಮತ್ತಿತರಿದ್ದರು.

PREV

Recommended Stories

ವಂದೇ ಮಾತರಂ ಭಾರತ ಮಾತೆಯ ಪ್ರೇರಣಾ ಶಕ್ತಿ: ಸಂಸದ ಗದ್ದಿಗೌಡರ
10, 11, ರಂದು ರಾಜ್ಯ ಟ್ರ್ಯಾಕ್‌ ಸೈಕ್ಲಿಂಗ್‌ ತಂಡಗಳ ಆಯ್ಕೆ