ಜಿಲ್ಲಾದ್ಯಂತ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

KannadaprabhaNewsNetwork |  
Published : Nov 02, 2026, 03:30 AM IST
ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ. | Kannada Prabha

ಸಾರಾಂಶ

ಕರ್ನಾಟಕವು ತನ್ನ ವೈವಿಧ್ಯಮಯ ಸಂಸ್ಕೃತಿ, ಜನಪದ ಕಲೆಗಳಿಂದ ಶ್ರೀಮಂತವಾಗಿದ್ದು, ಕನ್ನಡವು ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ಪಡೆದಿದೆ.

ಕಾರವಾರ: ಕನ್ನಡ ಭಾಷೆ, ಸಂಸ್ಕೃತಿ ಮತ್ತು ನೆಲ- ಜಲದ ರಕ್ಷಣೆಗೆ ಬದ್ಧರಾಗಿರುವುದೇ ನಾವು ಕನ್ನಡಾಂಬೆಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಸಹಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.ಭಾನುವಾರ ಜಿಲ್ಲಾಡಳಿತ ವತಿಯಿಂದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಕರ್ನಾಟಕವು ತನ್ನ ವೈವಿಧ್ಯಮಯ ಸಂಸ್ಕೃತಿ, ಜನಪದ ಕಲೆಗಳಿಂದ ಶ್ರೀಮಂತವಾಗಿದ್ದು, ಕನ್ನಡವು ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ಪಡೆದಿದೆ. ಪ್ರತಿಯೊಬ್ಬರೂ ಕನ್ನಡವನ್ನು ಪ್ರೀತಿಸಿ, ಕನ್ನಡದಲ್ಲಿ ವ್ಯವಹರಿಸಿ ಕನ್ನಡದ ಕಲೆ ಮತ್ತು ಸಾಹಿತ್ಯವನ್ನು ಗೌರವಿಸಬೇಕು. ನಮ್ಮ ನಾಡಿನ ಏಕತೆ, ಸೌಹಾರ್ದತೆ ಮತ್ತು ಪ್ರಗತಿಗೆ ಕೈಜೋಡಿಸಬೇಕು, ಜಾತಿ, ಧರ್ಮ, ಭೇದ ಭಾವಗಳನ್ನು ಬಿಟ್ಟು, ಕರ್ನಾಟಕ ರಾಜ್ಯದ ಪ್ರಗತಿಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಜನರ ಬದುಕಿಗೆ ಭದ್ರತೆ ಮತ್ತು ಆತ್ಮ ವಿಶ್ವಾಸವನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ₹657.12 ಕೋಟಿ, ಅನ್ನಭಾಗ್ಯ ಯೋಜನೆಯಡಿ ₹298.89 ಕೋಟಿ, ಯುವನಿಧಿ ಯೋಜನೆಯಡಿ ₹28.30 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ ₹1984.89 ಕೋಟಿ, ಗೃಹಜ್ಯೋತಿ ₹661.29 ಕೋಟಿ ಮೊತ್ತದ ನೆರವು ನೀಡಲಾಗಿದೆ ಎಂದರು.ಕರಾವಳಿ ಜಿಲ್ಲೆಗಳ ಅಭಿವೃದ್ಧಿಗಾಗಿ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಜಿಲ್ಲೆಗೆ ಅಂದಾಜು ₹10,000 ಕೋಟಿಗೂ ಅಧಿಕ ಮೊತ್ತದ ಯೋಜನೆಗಳು ಮಂಜೂರಾಗಿವೆ ಎಂದರು.ಜಿಲ್ಲೆಯಲ್ಲಿ ಇದುವರೆಗೆ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಒಟ್ಟು 24 ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಿ, ಸಾರ್ವಜನಿಕರಿಂದ 4,880 ಮನವಿಗಳನ್ನು ಸ್ವೀಕರಿಸಲಾಗಿದೆ. ಇವುಗಳಲ್ಲಿ 4,348 ಮನವಿಗಳನ್ನು ಇತ್ಯರ್ಥಪಡಿಸಲಾಗಿದ್ದು, ಬಾಕಿ ಅರ್ಜಿಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಕ್ರಮ ವಹಿಸಲಾಗುತ್ತಿದೆ. 162 ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗಿದ್ದು, ಈ ಸಂಘಗಳಿಗೆ ₹10 ಲಕ್ಷಗಳ ಅನುದಾನ ಒದಗಿಸುವ ಮೂಲಕ ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಬೆಳೆಸಿ, ನಾಡಿನ ನವ ನಿರ್ಮಾಣದಲ್ಲಿ ಯುವಶಕ್ತಿಯನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಯೋಜಿಸಲಾಗಿದೆ ಎಂದರು.ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಉತ್ತರ ಕನ್ನಡ ಜಿಲ್ಲೆಯವರಾದ ಕನ್ನಡದ ಶ್ರೇಷ್ಠ ನಟ ಅನಂತನಾಗ್ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಜಿ.ಯು. ಭಟ್ ಅವರಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಗಣಪತಿ ಡಿ. ಉಳ್ವೇಕರ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಕಾರವಾರ ಉಪ ವಿಭಾಗಾಧಿಕಾರಿ ರಮ್ಯಾ ಮತ್ತಿತರರು ಭಾಗವಹಿಸಿದ್ದರು.ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಎನ್ಸಿಸಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಸೇವಾದಳ ಸೇರಿದಂತೆ 17 ವಿವಿಧ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ನಾಡಿನ ಕಲೆ ಸಾಹಿತ್ಯ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವೇದಿಕೆ ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ರಾಜ್ಯೋತ್ಸವದ ಪ್ರಯುಕ್ತ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸ್ತಬ್ಧಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರ ಮಕ್ಕಳಿಗೆ ಹಳ್ಳಿ ಜೀವನ ಪರಿಚಯಿಸುವ ‘ಗ್ರಾಮಾನುಭವ’ಕ್ಕೆ ಚಾಲನೆ
ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ: ರಿಝ್ವಾನ್ ಅರ್ಷದ್