ಕನ್ನಡಪ್ರಭ ವಾರ್ತೆ ಬಂಟ್ವಾಳ
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತ್ಯಾಜ್ಯ ಸಮಸ್ಯೆ ಕುರಿತು ‘ರಸ್ತೆಯ ಇಕ್ಕೆಲ ಕಸ ತೋರಣ’ ಶೀರ್ಷಿಕೆಯಲ್ಲಿ ‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟಗೊಂಡ ವರದಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸ್ಪಂದಿಸಿದೆ.ಏ.30ರಂದು ಪ್ರಕಟವಾದ ‘ಕನ್ನಡಪ್ರಭ’ ಪತ್ರಿಕೆಯ ವರದಿಯ ಪ್ರತಿ ಸಹಿತ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿಗೆ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಕಸ ವಿಂಗಡಣೆಯಲ್ಲಿ ನಿರ್ಲಕ್ಷ್ಯ ವಹಿಸದೆ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ. ಪತ್ರಿಕೆಯಲ್ಲಿ ವರದಿ ಪ್ರಕಟವಾದಂತೆ ಎಲ್ಲೆಂದರಲ್ಲಿ ಕಸದ ರಾಶಿ ಇದ್ದು ಗ್ರಾಮ ಪಂಚಾಯತಿಗಳು ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಕಂಡುಬರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ರಸ್ತೆ ಬದಿಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ನೈರ್ಮಲತೆಯನ್ನು ಕಾಪಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಾಜ್ಯದ ಸುತ್ತೋಲೆಯಂತೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾರ್ಯಪಡೆ ರಚಿಸುವಂತೆ ಸೂಚಿಸಲಾಗಿದೆ.
ಗ್ರಾಮ ಪಂಚಾಯಿತಿ ತ್ಯಾಜ್ಯ ಎಸೆಯುವ ಮತ್ತು ಅವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಿಸುವ ತಪ್ಪಿತಸ್ಥರ ಮೇಲೆ ನಿಯಮಾನುಸಾರ ದಂಡನೆ ಮತ್ತು ಶಿಸ್ತು ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಯನ್ನು ನಿರಂತರವಾಗಿ ಕಾಪಾಡುವುದು ಮತ್ತು ಆ ಕುರಿತ ಛಾಯಾಚಿತ್ರ ವರದಿ ಕಚೇರಿಗೆ ತಲುಪಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.ಸುತ್ತೋಲೆಯನ್ನು ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಉಳ್ಳಾಲ, ಪುತ್ತೂರು, ಸುಳ್ಯ, ಕಡಬ, ಮೂಲ್ಕಿ ಮತ್ತು ಮೂಡಬಿದ್ರೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಿಗೆ ಕಳುಹಿಸಲಾಗಿದ್ದು, ಜಿಲ್ಲೆಯ 223 ಗ್ರಾಮಪಂಚಾಯಿತಿಗಳು ಸ್ವಚ್ಛತೆ ವಿಚಾರದಲ್ಲಿ ಹೆಚ್ಚಿನ ಆಸ್ಥೆ ವಹಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.