ಕನ್ನಡಿಗರ ಉದ್ಯೋಗಕ್ಕಾಗಿ ಕರವೇ ಆಗ್ರಹ ಅಭಿಯಾನ

KannadaprabhaNewsNetwork |  
Published : Nov 15, 2026, 02:00 AM IST
ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ ಶನಿವಾರ ಜಿಲ್ಲೆಯ ವಿವಿಧ ಕೈಗಾರಿಕೆಗಳಿಗೆ ಭೇಟಿ ನೀಡಿ, ಸಂಸ್ಥೆಗಳ ಮುಖ್ಯಸ್ಥರಿಗೆ ಮನವಿ ನೀಡಲಾಯಿತು. | Kannada Prabha

ಸಾರಾಂಶ

ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನ್ಯಾಯಯುತ ಉದ್ಯೋಗಾವಕಾಶ ಕಲ್ಪಿಸಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಂಡು, ಸ್ಥಳೀಯ ಅರ್ಹ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ. ಗಿರೀಶಾನಂದ ಜ್ಞಾನಸುಂದರ ಆಗ್ರಹಿಸಿದರು.

ಕೊಪ್ಪಳ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನ್ಯಾಯಯುತ ಉದ್ಯೋಗಾವಕಾಶ ಕಲ್ಪಿಸಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಂಡು, ಸ್ಥಳೀಯ ಅರ್ಹ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ. ಗಿರೀಶಾನಂದ ಜ್ಞಾನಸುಂದರ ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ ಶನಿವಾರ ಜಿಲ್ಲೆಯ ವಿವಿಧ ಕೈಗಾರಿಕೆಗಳಿಗೆ ಭೇಟಿ ನೀಡಿ, ಸಂಸ್ಥೆಗಳ ಮುಖ್ಯಸ್ಥರಿಗೆ ಆಗ್ರಹ ಪತ್ರ ಸಲ್ಲಿಸಿ ಅವರು ಮಾತನಾಡಿದರು.

ಕೆಪಿಆರ್ ಫರ್ಟಿಲೈಸರ್ಸ್ ಪ್ರೈ.ಲಿ., ಧ್ರುವದೇಶ ಮೆಟಾ ಸ್ಟೀಲ್ ಪ್ರೈ.ಲಿ., ಎಕ್ಸ್ಇಂಡಿಯಾ, ಅಖಿಲಸಾಯಿ ಬಾಬಾ ಸ್ಟೀಲ್ಸ್ ಸೇರಿದಂತೆ ವಿವಿಧ ಕೈಗಾರಿಕೆಗಳಿಗೆ ಭೇಟಿ ನೀಡಿ ಕನ್ನಡಿಗರ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಕೋರಲಾಯಿತು.

ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಸಮರ್ಪಕ ಉದ್ಯೋಗಾವಕಾಶಗಳು ದೊರೆಯುತ್ತಿವೆಯೇ ಎಂಬ ಪ್ರಶ್ನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಗಂಭೀರವಾಗಿ ಪರಿಗಣಿಸಿದೆ. ಅರ್ಹತೆ ಮತ್ತು ಸಾಮರ್ಥ್ಯ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ನಿರಾಕರಿಸಲಾಗುತ್ತಿದೆ, ನೇಮಕಾತಿಯಲ್ಲಿ ತಾರತಮ್ಯ ನಡೆಯುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಸ್ವತಃ ಕನ್ನಡಿಗ ಉದ್ಯೋಗಿಗಳೇ ತಮ್ಮ ಅಳಲು ತೋಡಿಕೊಳ್ಳುತ್ತಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ ಎಂದರು.

ನ. 1ರಿಂದ ಒಂದು ತಿಂಗಳ ಕಾಲ ರಾಜ್ಯದ ಐಟಿ-ಬಿಟಿ ಸೇರಿದಂತೆ ಎಲ್ಲ ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸಿ ಮಾಹಿತಿ ಸಂಗ್ರಹಿಸುವ ಹಾಗೂ ಸ್ಥಳೀಯರಿಗೆ ನ್ಯಾಯಯುತ ಉದ್ಯೋಗಾವಕಾಶ ಕಲ್ಪಿಸುವಂತೆ ಆಗ್ರಹಿಸುವ ರಾಜ್ಯವ್ಯಾಪಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕರ್ನಾಟಕದ ನೆಲ, ನೀರು, ವಿದ್ಯುತ್, ರಸ್ತೆ, ಮೂಲಸೌಕರ್ಯ ಹಾಗೂ ಮಾನವ ಸಂಪನ್ಮೂಲದ ಪ್ರಯೋಜನ ಪಡೆದು ಕಾರ್ಯನಿರ್ವಹಿಸುವ ಸಂಸ್ಥೆಗಳು ಇಲ್ಲಿನ ಜನರ ಉದ್ಯೋಗದ ಆಶೋತ್ತರಗಳಿಗೂ ಸ್ಪಂದಿಸಬೇಕು. ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಭಿಕ್ಷೆಯಲ್ಲ, ಅದು ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಎಂದರು.

ನೇಮಕಾತಿಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ವಿಚಾರದಲ್ಲಿ ನಿರ್ಲಕ್ಷ್ಯ, ತಾರತಮ್ಯ ಅಥವಾ ಅಸ್ಪಷ್ಟ ನೀತಿಗಳಿಗೆ ಅವಕಾಶ ಇರಬಾರದು. ಕನ್ನಡಿಗರ ಉದ್ಯೋಗದ ಪ್ರಶ್ನೆಯನ್ನು ಕಡೆಗಣಿಸಿ ಕೇವಲ ತಮ್ಮ ವ್ಯವಹಾರ ವಿಸ್ತರಣೆಗೆ ಆದ್ಯತೆ ನೀಡುವ ಧೋರಣೆಯನ್ನು ಕರವೇ ಒಪ್ಪುವುದಿಲ್ಲ. ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಅಗತ್ಯ ಕೌಶಲ್ಯ ತರಬೇತಿ ನೀಡಿ, ಅರ್ಹರಿಗೆ ಸಂದರ್ಶನ ಹಾಗೂ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಆರು ಪ್ರಮುಖ ಮಾಹಿತಿ ಕೇಳಿದ ಕರವೇ: ಕೈಗಾರಿಕೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಒಟ್ಟು ಉದ್ಯೋಗಿಗಳ ಸಂಖ್ಯೆ ಹಾಗೂ ಅವರಲ್ಲಿ ಕರ್ನಾಟಕದ ಸ್ಥಳೀಯರ ಪ್ರಮಾಣ, ಕಳೆದ ಮೂರು ವರ್ಷಗಳಲ್ಲಿ ನಡೆದ ನೇಮಕಾತಿಯಲ್ಲಿ ಕನ್ನಡಿಗರಿಗೆ ದೊರೆತ ಉದ್ಯೋಗಾವಕಾಶಗಳ ವಿವರ, ನೇಮಕಾತಿಯ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿಪರ ಸಾಮರ್ಥ್ಯದ ಮಾನದಂಡಗಳು, ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಕೈಗೊಂಡ ಕ್ರಮಗಳು, ಕನ್ನಡಿಗ ಉದ್ಯೋಗಿಗಳು ವ್ಯಕ್ತಪಡಿಸಿರುವ ತಾರತಮ್ಯದ ದೂರುಗಳ ಕುರಿತು ಸಂಸ್ಥೆಯ ನಿಲುವು ಹಾಗೂ ಸ್ಥಳೀಯ ಯುವಜನರಿಗೆ ಕೌಶಲ್ಯಾಭಿವೃದ್ಧಿ, ತರಬೇತಿ, ಇಂಟರ್ನ್‌ಶಿಪ್ ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ರೂಪಿಸಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹ ಪತ್ರದಲ್ಲಿ ಕೋರಲಾಗಿದೆ.

ಕನ್ನಡಿಗರ ಉದ್ಯೋಗಾವಕಾಶಗಳ ವಿಚಾರದಲ್ಲಿ ಕೇವಲ ಭರವಸೆಗಳು ಸಾಲದು. ಅವು ಕಾರ್ಯರೂಪಕ್ಕೆ ಬರಬೇಕು. ಸಂಸ್ಥೆಗಳು ತಮ್ಮ ಅಧಿಕೃತ ನಿಲುವು ಹಾಗೂ ಲಭ್ಯವಿರುವ ಮಾಹಿತಿಯನ್ನು ಒದಗಿಸಬೇಕು. ಅಭಿಯಾನದ ಸಂದರ್ಭದಲ್ಲಿ ಸಂಗ್ರಹವಾಗುವ ಮಾಹಿತಿ ಮತ್ತು ಉದ್ಯೋಗಿಗಳ ಅಹವಾಲುಗಳನ್ನು ಪರಿಶೀಲಿಸಿ, ಮುಂದಿನ ಕ್ರಮಕ್ಕಾಗಿ ಸಂಬಂಧಪಟ್ಟ ಸಂಸ್ಥೆಗಳು ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ನಾಡಿನ ಸಂಪನ್ಮೂಲಗಳನ್ನು ಬಳಸಿಕೊಂಡು ಬೆಳೆಯುವ ಕೈಗಾರಿಕೆಗಳು ಇಲ್ಲಿನ ಜನರ ಉದ್ಯೋಗದ ಆಶೋತ್ತರಗಳಿಗೂ ಗೌರವ ನೀಡಬೇಕು. ಇಲ್ಲವಾದಲ್ಲಿ ಅನಗತ್ಯ ಸಂಘರ್ಷಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಸಿದರು.

ಕರವೇ ಜಿಲ್ಲಾ ಉಪಾಧ್ಯಕ್ಷ ಶಿವನಗೌಡ ಪಾಟೀಲ್ ಹಲಗೇರಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹನುಮಂತ ಬೆಸ್ತರ್, ಗಂಗಾವತಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಗಿಣಿಮೂತಿ, ಕನಕಗಿರಿ ತಾಲೂಕು ಅಧ್ಯಕ್ಷ ಹರೀಶ ಪೂಜಾರ, ಕುಕನೂರು ತಾಲೂಕು ಅಧ್ಯಕ್ಷ ರಮೇಶ ಚಂಡೂರ್, ತಾಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ ಸೋಮಸಾಗರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಂಪ್ಲಿಯಿಂದ ಮುನಿರಾಬಾದ್‌ನತ್ತ ಹೆಜ್ಜೆ ಹಾಕಿದ ನೂರಾರು ರೈತರು
ಜನರ ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯ: ಅಶೋಕ ಶಿಗ್ಗಾಂವಿ