ಶಿಕ್ಷಣದಲ್ಲಿ ದ್ವಿಭಾಷಾ ನೀತಿಗಾಗಿ ಕರವೇ ಧರಣಿ

KannadaprabhaNewsNetwork |  
Published : Jul 03, 2025, 11:50 PM ISTUpdated : Jul 04, 2025, 07:37 AM IST
Karave.4 | Kannada Prabha

ಸಾರಾಂಶ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

 ಬೆಂಗಳೂರು :  ರಾಜ್ಯದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿ ಜಾರಿಗೆ ತರಬೇಕು. ತೃತೀಯ ಭಾಷೆ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯ ಸರ್ಕಾರ ಆಗ್ರಹಿಸಿದೆ.

ಗುರುವಾರ ಈ ಕುರಿತು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಂತರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಕರವೇ ನಿಯೋಗ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಕೈಬಿಟ್ಟು ದ್ವಿಭಾಷಾ ನೀತಿಯನ್ನು ಜಾರಿಗೆ ತರುವಂತೆ ಮನವಿ ಸಲ್ಲಿಸಿತು.

ಅದಕ್ಕೂ ಮುನ್ನ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಟಿ.ಎ.ನಾರಾಯಣಗೌಡ, ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತ್ರಿಭಾಷಾ ಸೂತ್ರ ಕೈಬಿಡಬೇಕು. ದ್ವಿಭಾಷಾ ನೀತಿ ಅನುಸರಿಸಬೇಕು. ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ವ್ಯವಸ್ಥೆಗಳಾದ ಸಿಬಿಎಸ್‌ಇ, ಐಸಿಎಸ್ಇ ಶಾಲೆಗಳಿಗೆ ಏಕರೂಪದ ದ್ವಿಭಾಷಾ ನೀತಿ ಜಾರಿಗೊಳಿಸಬೇಕು. ಸಿಬಿಎಸ್ಇ, ಐಸಿಎಸ್ಇ ಶಾಲೆಗಳಲ್ಲೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಸಾಂಸ್ಕೃತಿಕ ಮತ್ತು ಭಾಷಿಕ ಅಸ್ಮಿತೆಯಲ್ಲಿ ಈ ನೆಲದ ನುಡಿಯಾದ ಕನ್ನಡ ಕೇಂದ್ರ ಸ್ಥಾನ ಹೊಂದಿದೆ. ಬದಲಾದ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆ ಜಾಗತಿಕ ವ್ಯವಹಾರ, ಉನ್ನತ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಗೆ ಅಗತ್ಯವಾಗಿದ್ದು, ಇದನ್ನು ಕಲಿಯುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕ. ಆದರೆ, ಹಿಂದಿಯನ್ನು ಕಡ್ಡಾಯವಾಗಿ ಓದಿಸುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಯಾವುದೇ ಗಮನಾರ್ಹ ಲಾಭವಿಲ್ಲ. ತ್ರಿಭಾಷಾ ನೀತಿಯಿಂದ ಕರ್ನಾಟಕಕ್ಕೆ ಯಾವ ಲಾಭವೂ ಇಲ್ಲ ಎಂದರು.

ತಮಿಳುನಾಡು 1968ರಿಂದಲೇ ತ್ರಿಭಾಷಾ ನೀತಿ ತಿರಸ್ಕರಿಸಿ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳನ್ನು ಒಳಗೊಂಡ ದ್ವಿಭಾಷಾ ನೀತಿ ಯಶಸ್ವಿಯಾಗಿ ಜಾರಿಗೆ ತಂದಿದೆ. ಇತ್ತೀಚೆಗೆ, ಮಹಾರಾಷ್ಟ್ರ ಸರ್ಕಾರ ಸಹ ತ್ರಿಭಾಷಾ ನೀತಿ ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ. ಈ ರಾಜ್ಯಗಳು ತಮ್ಮ ಭಾಷಿಕ ಗುರುತು ರಕ್ಷಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟ ಕಾಪಾಡಿಕೊಂಡಿವೆ. ಕರ್ನಾಟಕ ಈ ಉದಾಹರಣೆಗಳಿಂದ ಸ್ಫೂರ್ತಿ ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿ ಜಾರಿ ತರಬೇಕಾಗಿದೆ ಆಗ್ರಹಿಸಿದರು.

ಸಚಿವ ಸಂಪುಟದಲ್ಲಿ ಚರ್ಚೆ

ಕರವೇ ನಿಯೋಗದಿಂದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಕೂಡ ದ್ವಿಭಾಷಾ ನೀತಿಯ ಪರವಾಗಿದ್ದೇನೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ದ್ವಿಭಾಷಾ ನೀತಿ ಕುರಿತು ಚರ್ಚೆ ನಡೆಸಿ ಕ್ರಮಕೈಗೊಳ್ಳುತ್ತೇನೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಟಿ.ಎ.ನಾರಾಯಣಗೌಡ ಅವರು ಕನ್ನಡಪ್ರಭಕ್ಕೆ ತಿಳಿಸಿದರು.

PREV
Read more Articles on