ಕನ್ನಡಪ್ರಭ ವಾರ್ತೆ ಹಾಸನ
ಇದೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ. ಮನುಕುಮಾರ್ ಮಾತನಾಡಿ, ರಾಜ್ಯದಲ್ಲಿ ಈ ವರ್ಷ ಸಮರ್ಪಕ ಮಳೆಯಾಗದಿರುವುದರಿಂದ ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್, ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜನರ ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರನ್ನು ಸಂರಕ್ಷಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ಯಾವುದೇ ಕಾರಣಕ್ಕೂ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುವ ರೀತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನಿರ್ದೇಶನದಂತೆ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ದೃಢ ನಿಲುವು ತಾಳಿ, ಕೇಂದ್ರ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರಗಳ ಮುಂದೆ ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಬೇಕು ಎಂದು ಆಗ್ರಹಿಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ವಿರುದ್ಧ ತಕ್ಷಣ ಮೇಲ್ಮನವಿ ಸಲ್ಲಿಸಿ, ರಾಜ್ಯದ ಜಲಾಶಯಗಳಲ್ಲಿನ ನೀರಿನ ಪ್ರಮಾಣ, ಮಳೆ ಕೊರತೆ, ಕುಡಿಯುವ ನೀರಿನ ಅವಶ್ಯಕತೆ ಹಾಗೂ ಕೃಷಿ ಬೇಡಿಕೆ ಕುರಿತ ವೈಜ್ಞಾನಿಕ ಅಂಕಿ-ಅಂಶಗಳನ್ನು ಸಮರ್ಪಕವಾಗಿ ಮಂಡಿಸಬೇಕು. ಅಗತ್ಯವಿದ್ದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ಎಲ್ಲ ಕಾನೂನು ವೇದಿಕೆಗಳಲ್ಲಿ ರಾಜ್ಯದ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕಾನೂನು ಹೋರಾಟ ನಡೆಸಬೇಕು ಎಂದು ಒತ್ತಾಯಿಸಿದರು. ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಗರಗಳು, ಪಟ್ಟಣಗಳು ಹಾಗೂ ಗ್ರಾಮಗಳಿಗೆ ಅಗತ್ಯವಿರುವ ಕುಡಿಯುವ ನೀರನ್ನು ಮೊದಲ ಆದ್ಯತೆಯಾಗಿ ಭದ್ರಪಡಿಸಬೇಕು. ರೈತರ ಕೃಷಿಗೆ ಅಗತ್ಯವಿರುವ ನೀರನ್ನು ಖಚಿತಪಡಿಸಿ, ನೀರಿನ ಕೊರತೆಯಿಂದ ಬೆಳೆ ಹಾನಿ ಹಾಗೂ ಆರ್ಥಿಕ ಸಂಕಷ್ಟ ಎದುರಾಗದಂತೆ ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು ಎಂದರು.ಬರಗಾಲ ಅಥವಾ ಮಳೆ ಕೊರತೆಯಂತಹ ಸಂಕಷ್ಟದ ಸಂದರ್ಭಗಳಲ್ಲಿ ರಾಜ್ಯಗಳ ನಡುವೆ ನೀರಿನ ಹಂಚಿಕೆಗೆ ಅನುಸರಿಸಬೇಕಾದ ಶಾಶ್ವತ ಹಾಗೂ ವೈಜ್ಞಾನಿಕ ’ಸಂಕಷ್ಟ ಸೂತ್ರ’ (ಡಿಸ್ಟ್ರೆಸ್ ಫಾರ್ಮುಲಾ) ರೂಪಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು. ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸರ್ವಪಕ್ಷ ಸಭೆ ಕರೆಯಬೇಕು. ಜಲತಜ್ಞರು, ಕಾನೂನು ತಜ್ಞರು, ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಕರವೇ ಮನವಿಯಲ್ಲಿ ಒತ್ತಾಯಿಸಿದರು. ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದಲ್ಲಿ, ರಾಜ್ಯಾದ್ಯಂತ ಪ್ರಜಾಸತ್ತಾತ್ಮಕ ಹೋರಾಟವನ್ನು ತೀವ್ರಗೊಳಿಸಲಾಗುವುದು. ಅದರ ಪರಿಣಾಮಗಳಿಗೆ ಸರ್ಕಾರವೇ ಸಂಪೂರ್ಣ ಹೊಣೆಗಾರವಾಗಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಹತ್ತು ಅಂಶಗಳ ಸಮಗ್ರ ಮನವಿ ಸಲ್ಲಿಸಿರುವುದಾಗಿ ಹೇಳಿದರು.