ತಮಿಳುನಾಡಿಗೆ ನೀರು ಬಿಡುಗಡೆ ವಿರುದ್ಧ ರಾಜ್ಯ ಬಂದ್ ಯಶಸ್ವಿ - ಅಂಗಡಿ ಮುಂಗಟ್ಟುಗಳು ಬಂದ್, ಬಿಕೋ ಎನ್ನುತ್ತಿದ್ದ ರಸ್ತೆಗಳು । ಬೆಂಗಳೂರಿನಲ್ಲಿ ನಿಷೇಧಾಜ್ಞೆ ನಡುವೆಯೂ ಮೆರವಣಿಗೆ - ಸಿಎಂ ನಿವಾಸ ಮುತ್ತಿಗೆಗೆ ಯತ್ನ । ಬೆಂಗಳೂರಿನಿಂದ 44 ವಿಮಾನಗಳು ರದ್ದು । ಕೆಲವೆಡೆ ರೈಲು ತಡೆಗೆ ಯತ್ನಿಸಿದವರ ಸೆರೆ ಕನ್ನಡಪ್ರಭ ವಾರ್ತೆ ಬೆಂಗಳೂರು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ರಾಜ್ಯ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ನಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕೊಳ್ಳದ 5 ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿತ್ತು. ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು.
ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಜೋರಾಗಿದ್ದು, ಮದ್ದೂರಿನ ಗೆಜ್ಜಲಗೆರೆಯಲ್ಲಿ ರೈಲು ತಡೆ ಹಾಗೂ ಶ್ರೀರಂಗಪಟ್ಟಣದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆಗೆ ಪ್ರತಿಭಟನಾಕಾರರು ಯತ್ನ ನಡೆಸಿದರು. ಬಂದ್ ಹಿನ್ನೆಲೆಯಲ್ಲಿ ತಮಿಳುನಾಡು-ಕರ್ನಾಟಕ ಗಡಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಗಡಿ ಜಿಲ್ಲೆಗಳಿಂದ ತಮಿಳುನಾಡಿಗೆ ವಾಹನ ಸಂಚಾರ ಬಹುತೇಕ ಸ್ಥಗಿತಗೊಂಡಿತ್ತು. ಇನ್ನು, ದಾವಣಗೆರೆ ಸೇರಿ ಮಧ್ಯ ಕರ್ನಾಟಕ ಭಾಗದಲ್ಲೂ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಉಳಿದಂತೆ, ಕೊಡಗು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಜನ ಕೂಡ ಬಂದ್‌ಗೆ ಪ್ರತಿಕ್ರಿಯಿಸಿದ್ದು, ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿ, ಕಾವೇರಿ ಪ್ರಾಧಿಕಾರದ ಆದೇಶಕ್ಕೆ ಕಿಡಿ ಕಾರಿದರು. 150ಕ್ಕೂ ಹೆಚ್ಚು ಸಂಘಟನೆಗಳು ಒಗ್ಗೂಡಿ ಕರೆ ನೀಡಿದ್ದ ಕರ್ನಾಟಕ ಬಂದ್ ಎಲ್ಲೆಡೆ ಶಾಂತಿಯುತವಾಗಿತ್ತು.
ರಾಜಧಾನಿ ಸಂಪೂರ್ಣ ಸ್ತಬ್ಧ: ಬೆಂಗಳೂರಿನಲ್ಲಿ ಜನರು ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬೆಂಬಲ ಸೂಚಿಸಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಜನಜೀವನ ಸ್ತಬ್ಧವಾಗಿತ್ತು. ನಿಷೇಧಾಜ್ಞೆ ನಡುವೆಯೂ ಕನ್ನಡಪರ, ರೈತ ಸಂಘಟನೆಗಳು, ಚಲನಚಿತ್ರ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ಕಾವೇರಿ ಪ್ರಾಧಿಕಾರದ ಆದೇಶದ ವಿರುದ್ಧ ಕಿಡಿ ಕಾರಿದರು. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಹಾಸನ ಸೇರಿ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಶಾಪಿಂಗ್ ಮಾಲ್‌ಗಳು, ಚಿತ್ರಮಂದಿರ, ಹೋಟೆಲ್ ಸೇರಿದಂತೆ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ರಸ್ತೆಗಳು ಬಿಕೊ ಎನ್ನುತ್ತಿದ್ದವು. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ಜನರಿಲ್ಲದೆ ಖಾಲಿಯಾಗೇ ಸಂಚರಿಸಿದವು. ಕ್ಯಾಬ್ ಓಡಾಟವೂ ಇಲ್ಲದಾಗಿದ್ದ ಕಾರಣ, ವಿಮಾನ ಪ್ರಯಾಣಿಕರು ಸರಿಯಾದ ಸಮಯದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ಸಾಧ್ಯವಾಗಿಲ್ಲ. ಹೀಗಾಗಿ, ಪ್ರಯಾಣಿಕರ ಕೊರತೆಯಿಂದಾಗಿ 44 ವಿಮಾನಗಳ ಹಾರಾಟವನ್ನು ರದ್ದು ಮಾಡಲಾಯಿತು. ಪೊಲೀಸರೊಂದಿಗೆ ಸಂಘರ್ಷ: ಪ್ರತಿಭಟನೆ ವೇಳೆ, ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿದರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಹಾಗೂ ಯಾದಗಿರಿಗಳಲ್ಲಿ ಪ್ರತಿಭಟನಾಕಾರರು ರೈಲು ತಡೆಗೆ ಯತ್ನಿಸಿದಾಗ, ನೂರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.
ಶ್ರೀರಂಗಪಟ್ಟಣದಲ್ಲಿ ಪ್ರತಿಭಟನಾಕಾರರು ಬೆಂ-ಮೈ ಹೆದ್ದಾರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಕಲಬುರಗಿಯಲ್ಲಿ ಸಂಸದ ಉಮೇಶ್ ಜಾಧವ್ ಅವರ ಕಚೇರಿ ಹಾಗೂ ತುಮಕೂರಿನ ಗಾಂಧಿನಗರದಲ್ಲಿ ಸಂಸದ ಜಿ.ಎಸ್.ಬಸವರಾಜು ಅವರು ಮನೆಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಚಾಮರಾಜನಗರದಲ್ಲಿ ತಮಿಳು ಸಂಘಟನೆಗಳು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು. ಇದೇ ವೇಳೆ, ಧಾರವಾಡದಲ್ಲಿ ಪ್ರತಿಭಟನಾಕಾರರು ರಕ್ತದಿಂದ ‘ಕಾವೇರಿ ನಮ್ಮದು’ ಎಂದು ಬರೆದು ಘೋಷಣೆ ಕೂಗಿದರೆ, ಚಿತ್ರದುರ್ಗದ ಗಾಂಧಿವೃತ್ತದಲ್ಲಿ ಸ್ಟಾಲಿನ್ ಫೋಟೋಗೆ, ಹಾವೇರಿಯ ಸಿದ್ಧಮನಿ ವೃತ್ತದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಭಾವಚಿತ್ರಕ್ಕೆ ರಕ್ತ ಚೆಲ್ಲಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಪ್ರತಿಭಟನಾಕಾರನೊಬ್ಬ ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯ ಜಯದೇವ ವೃತ್ತದಲ್ಲಿ 5 ವರ್ಷದ ಬಾಲಕ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ತನ್ನ ಆಕ್ರೋಶ ವ್ಯಕ್ತಪಡಿಸಿದ್ದು, ವಿಶೇಷವಾಗಿತ್ತು. ಕಾವೇರಿ ತವರು ಕೊಡಗಿನ ಕುಶಾಲನಗರದಲ್ಲಿ ಪ್ರತಿಭಟನಾಕಾರರು ಕಾವೇರಿ ನದಿಗೆ ಇಳಿದು, ಪ್ರತಿಭಟಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ಅ.5ಕ್ಕೆ ಕೆಆರ್‌ಎಸ್ ಮುತ್ತಿಗೆ: ಈ ಮಧ್ಯೆ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನಾ ಸಭೆ ನಡೆಸಿದ ಕನ್ನಡಪರ ಸಂಘಟನೆಗಳ ಒಕ್ಕೂಟದ ಸದಸ್ಯರು, ಅಕ್ಟೋಬರ್ 5ರಂದು ಬೆಂಗಳೂರಿನಿಂದ ಕೆಆರ್‌ಎಸ್ ಜಲಾಶಯಕ್ಕೆ ಬೈಕ್ ರ್‍ಯಾಲಿ ನಡೆಸಿ, ಜಲಾಶಯಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. 450 ಕೊಟಿ ರು. ಆದಾಯ ನಷ್ಟ: ರಾಜ್ಯ ಬಂದ್ ಹಿನ್ನೆಲೆಯಲ್ಲಿ ವ್ಯಾಪಾರ-ವಹಿವಾಟಿಗೂ ಹೊಡೆತ ಬಿದ್ದಿದೆ. ಕೈಗಾರಿಕೆಗಳು, ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದ ಕಾರಣ, ಒಂದೇ ದಿನ 4 ಸಾವಿರ ಕೋಟಿ ರು.ಗೂ ಹೆಚ್ಚಿನ ವಹಿವಾಟು ಸ್ಥಗಿತಗೊಂಡಿದೆ. ರಾಜ್ಯ ಸರ್ಕಾರಕ್ಕೆ ಬರಬೇಕಿದ್ದ 450 ಕೋಟಿ ರು.ಗೂ ಹೆಚ್ಚಿನ ಜಿಎಸ್‌ಟಿ ನಷ್ಟವುಂಟಾಗಿದೆ.