ಹಳಿಯಾಳ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘ ಹಾಗೂ ವಿವಿಧ ರೈತ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಪಟ್ಟಣದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಈ ವೇಳೆ ಮಾತನಾಡಿದ ರೈತ ಮುಖಂಡ ನಾಗೇಂದ್ರ ಜಿವೋಜಿ ಅವರು, ಕೃಷಿ ಉತ್ಪಾದನಾ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ರೈತರಿಗೆ ನ್ಯಾಯಯುತ ದರ ದೊರೆಯುವುದು ಅತ್ಯಗತ್ಯವಾಗಿದೆ. ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಕುಮಾರ ಬೊಬಾಟಿ ಮಾತನಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದ ಅವರು, ಸ್ಥಳೀಯ ಶಾಸಕ ದೇಶಪಾಂಡೆಯವರ ಕಾರ್ಯವೈಖರಿಯನ್ನೂ ಕಟುವಾಗಿ ಟೀಕಿಸಿದರು.ದರ ನಿಗದಿಗೆ ಪಟ್ಟು: ಕಬ್ಬು ಬೆಳೆಯಲು ಅಗತ್ಯವಿರುವ ರಸಗೊಬ್ಬರ, ಬೀಜ, ಕೃಷಿ ಕಾರ್ಮಿಕರ ಕೂಲಿ, ನೀರಾವರಿ, ಸಾಗಾಣಿಕೆ ಹಾಗೂ ಇತರ ವೆಚ್ಚ ಹೆಚ್ಚುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಶಂಕರ ಕಾಜಗಾರ, ಕಾರ್ಯದರ್ಶಿ ಅಶೋಕ ಮೇಟಿ, ಪ್ರಮುಖರಾದ ಸಾತೇರಿ ಗೋಡೆಮನಿ, ಸುರೇಶ ಶಿವಣ್ಣನವರ, ರಾಮದಾಸ ಬೆಳಗಾಂವಕರ, ಬಳಿರಾಮ ಮೋರಿ, ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ಇತರರು ಇದ್ದರು.
ಮುಂಡಗೋಡ: ನ್ಯಾಯಯುತ ಬೆಲೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆ ಶನಿವಾರ ತಾಲೂಕಿನ ಕಬ್ಬು ಬೆಳೆಗಾರರು ಪಟ್ಟಣದಲ್ಲಿ ಬೃಹತ್ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟ ಕಬ್ಬು ಬೆಳೆಗಾರರು, ಪ್ರಮುಖ ಬೀದಿಗಳ ಮೂಲಕ ಸಂಚರಿಸಿ ಶಿವಾಜಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಸುಮಾರು ೧ ಗಂಟೆ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.