ಕರ್ನಾಟಕ ಸಂಭ್ರಮ 50 - ವರ್ಷವಿಡೀ ಕನ್ನಡ ಕಾರ್ಯಕ್ರಮ: ಭೋಸರಾಜು

KannadaprabhaNewsNetwork | Published : Nov 2, 2023 1:02 AM

ಸಾರಾಂಶ

ಕರ್ನಾಟಕ ಸಂಭ್ರಮ 50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ನಿಮಿತ್ತ 2024ರ ನವೆಂಬರ್ ವರೆಗೆ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ಜರುಗಲಿವೆ
ಕನ್ನಡಪ್ರಭ ವಾರ್ತೆ ಮಡಿಕೇರಿ ಕರ್ನಾಟಕ ಸಂಭ್ರಮ 50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ನಿಮಿತ್ತ 2024ರ ನವೆಂಬರ್ ವರೆಗೆ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಹೇಳಿದರು. ಜಿಲ್ಲಾಡಳಿತದಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಮೈಸೂರು ರಾಜ್ಯವು ‘ಕರ್ನಾಟಕ’ ಎಂದು ಮರು ನಾಮಕರಣವಾಗಿ ಇಂದಿಗೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ‘ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಹಾಗೂ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ- ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು. ಕರುನಾಡು ಇಡೀ ದೇಶದಲ್ಲೇ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಅಗ್ರಸ್ಥಾನದಲ್ಲಿದೆ. ನಮ್ಮ ಸರ್ಕಾರದ ಗೃಹ ಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಗಳ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲ ಬಗೆಯ ಜನರನ್ನು ಪ್ರಗತಿ ಮತ್ತು ಸಮಾನತೆಯೆಡೆಗೆ ಕೊಂಡೊಯ್ಯುತ್ತಿದ್ದೇವೆ. ಈ ಯೋಜನೆಗಳ ಮೂಲಕ ನಮ್ಮ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ನಿರ್ಮಾಣ ಮಾಡುತ್ತಿದ್ದೇವೆ ಎಂದರು. ಈ ಮಣ್ಣಿನ ಐತಿಹಾಸಿಕ ಕಾರ್ಯಕ್ರಮಗಳಾದ ತಲಕಾವೇರಿ ತೀರ್ಥೋದ್ಬವ ಚಟುವಟಿಕೆಗೆ 1.40 ಕೋಟಿ ರು. ಹಾಗೂ ಕೊಡಗಿನ ಹಿರಿಮೆಯನ್ನು ಹೆಚ್ಚಿಸುವ ಮಡಿಕೇರಿ ದಸರಾ ಹಾಗೂ ಗೋಣಿಕೊಪ್ಪ ದಸರಾ ಕಾರ್ಯಕ್ರಮಗಳಿಗೆ ಒಟ್ಟು 1.55 ಕೋಟಿ ರು. ಅನುದಾನವನ್ನು ನೀಡಿ ನಮ್ಮ ಸರ್ಕಾರ ಈ ನಾಡು ನುಡಿ ಸಂಸ್ಕೃತಿಯ ಬಗೆಗಿನ ಕಾಳಜಿ ಮೆರೆದಿದ್ದೇವೆ ಎಂದು ತಿಳಿಸಿದರು. ಅರ್ಥಪೂರ್ಣ ಆಚರಣೆ, ವಿವಿಧ ಸ್ತಬ್ಧಚಿತ್ರಗಳ ಮೆರವಣಿಗೆ ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ 68 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಅರ್ಥಪೂರ್ಣವಾಗಿ ಜರುಗಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಡಾ .ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಎನ್.ಪಿ. ಅನಿತಾ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ವರ್ಣಿತ್ ನೇಗಿ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್‌. ವೀಣಾ, ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳು ಇದ್ದರು. ದ್ವಿತೀಯ ಪಿಯುಸಿಯ ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕ ಪಡೆದ ಕೊಡಗು ಜಿಲ್ಲೆಯ ಮಂಜುಳಾ, ನಿಸರ್ಗ ಹಾಗೂ ಶ್ವೇತ ಅವರನ್ನು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಪಥ ಸಂಚಲನದಲ್ಲಿ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸೇವಾದಳ ತಂಡ ಪ್ರಥಮ, ಶ್ರೀ ರಾಜೇಶ್ವರಿ ಪ್ರೌಢಶಾಲೆಯ ಸ್ಕೌಟ್ಸ್‌ ತಂಡ ದ್ವಿತೀಯ, ಮಡಿಕೇರಿಯ ಸಂತ ಮೈಕಲರ ಆಂಗ್ಲ ಮಾಧ್ಯಮ ಶಾಲೆಯ ಗೈಡ್ಸ್ ತಂಡ ತೃತೀಯ ಬಹುಮಾನ ಗಳಿಸಿತು. ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಅರಣ್ಯ ಇಲಾಖೆ ಪ್ರಥಮ, ತೋಟಗಾರಿಕೆ ಇಲಾಖೆ ದ್ವಿತೀಯ ಬಹುಮಾನ ಪಡೆಯಿತು. ಮಡಿಕೇರಿಯ ಸಂತ ಜೋಸೆಫರ್ ಪ್ರೌಢಶಾಲೆ, ಸಂತ ಮೈಕಲರ ಶಾಲೆ, ಜನರಲ್ ತಿಮ್ಮಯ್ಯ ಶಾಲೆ, ರಾಜ ರಾಜೇಶ್ವರಿ ಪ್ರೌಢಶಾಲೆ, ಕೊಡಗು ವಿದ್ಯಾಲಯ, ಬಾಲಕರ ಬಾಲ ಮಂದಿರ, ಬಾಲಕಿಯರ ಬಾಲ ಮಂದಿರ ವಿದ್ಯಾರ್ಥಿಗಳಿಂದ ಕನ್ನಡ ನಾಡಿ ನುಡಿಗೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು. ಮೆರವಣಿಗೆ: ನಗರದ ಕೋಟೆ ಆವರಣದಿಂದ ಸ್ತಬ್ಧ ಚಿತ್ರಗಳ ಹಾಗೂ ಕಲಾ ತಂಡಗಳ ಮೆರವಣಿಗೆಗೆ ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಲ್ಲಾಳ್ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ, ಕೃಷಿ, ತೋಟಗಾರಿಕೆ, ಪಶುಪಾಲನೆ, ಅರಣ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ತಾಲೂಕು ಪಂಚಾಯಿತಿ ವತಿಯಿಂದ ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದವು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗೊಂಬೆ ಕುಣಿತ, ಡೊಳ್ಳು ಕುಣಿತ ಕಲಾ ತಂಡಗಳು ಭಾಗವಹಿಸಿದ್ದವು.

Share this article