ಅಲ್ಪಸಂಖ್ಯಾತರಿಗೆ ಸಿಎಂ ಸಿದ್ದರಾಮಯ್ಯ ಬಂಪರ್‌ ಕೊಡುಗೆ!

KannadaprabhaNewsNetwork |  
Published : Dec 30, 2023, 01:15 AM ISTUpdated : Feb 17, 2024, 12:55 PM IST
Siddaramaiah

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ ನೀಡಿದ್ದಾರೆ. ಅದರ ಭಾಗವಾಗಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಂಪರ್‌ ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರು. ಮೊತ್ತದ ಕ್ರಿಯಾಯೋಜನೆ ತಯಾರಿಸಬೇಕು. 

ಈ ವೇಳೆ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಹಾಗೂ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಹೆಚ್ಚುವರಿ 40 ಕೋಟಿ ರು.: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಕೇಂದ್ರದ ಪಾಲನ್ನೂ ಭರಿಸಲು ತೀರ್ಮಾನಿಸಿದೆ. 

ಪ್ರಸ್ತುತ 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದ್ದು, ಬಜೆಟ್‌ನಲ್ಲಿ 60 ಕೋಟಿ ರು. ನಿಗದಿಯಾಗಿದೆ. ಕೇಂದ್ರದ ಪಾಲನ್ನೂ ಭರಿಸಬೇಕಿರುವ ಹಿನ್ನೆಲೆಯಲ್ಲಿ ಇಲಾಖಾ ಅನುದಾನದ ಮರು ಹಂಚಿಕೆ ಮೂಲಕ 40 ಕೋಟಿ ರು. ಹೆಚ್ಚುವರಿ ಹಣವನ್ನೂ ವಿದ್ಯಾರ್ಥಿವೇತನಕ್ಕೆ ಬಳಕೆ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚಿಸಿದರು.

ಮುಂದಿನ ವರ್ಷ ಅನುದಾನ ಹೆಚ್ಚಳ: ಇನ್ನು ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗುತ್ತಿದೆ. ಇದಕ್ಕೆ ಪ್ರಸ್ತುತ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನ ಸಾಕಾಗುವುದಿಲ್ಲ. 

ಹೀಗಾಗಿ ಮುಂದಿನ ವರ್ಷ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹೆಚ್ಚಿನ ಅನುದಾನ ಒದಗಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ.

ಈ ವೇಳೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್‌ ಅಹಮದ್‌ ಖಾನ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್, ಹಣಕಾಸು ಇಲಾಖೆ ಕಾರ್ಯದರ್ಶಿ ಜಾಫರ್‌ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ