ಇಂದು 5ನೇ ಗ್ಯಾರಂಟಿ ‘ಯುವನಿಧಿ’ ಹಣ ಜಮೆ

KannadaprabhaNewsNetwork |  
Published : Jan 12, 2024, 01:45 AM IST
ಪೊಟೋ: 11ಎಸ್‌ಎಂಜಿಕೆಪಿ06ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮ ಹಿನ್ನಲೆ ಬೃಹತ್‌ ಬೃಹತ್ ವೇದಿಕೆ ನಿರ್ಮಾಣವಾಗಿರುವುದು.  | Kannada Prabha

ಸಾರಾಂಶ

ನಿರುದ್ಯೋಗಿಗಳಿಗೆ ಭತ್ಯೆಯನ್ನು ನೀಡುವ ಕರ್ನಾಟಕ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಯಡಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದನೇ ಹಾಗೂ ಕೊನೆಯ ಗ್ಯಾರಂಟಿ ‘ಯುವನಿಧಿ’ಗೆ ಶುಕ್ರವಾರ ಚಾಲನೆ ನೀಡಲಾಗುತ್ತಿದ್ದು, ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್‌, ಡಾ.ಎಂ.ಸಿ.ಸುಧಾಕರ್ ಸೇರಿ ಹಲವು ಸಚಿವರು, ಗಣ್ಯರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸ್ವಾಮಿ ವಿವೇಕಾನಂದರ ಜನ್ಮ ದಿನದಂದೇ (ಜ.12) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಾಣಗೊಂಡಿದ್ದು, 1.5 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ. ಇದಕ್ಕಾಗಿ, 1 ಲಕ್ಷ ಮಂದಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ 12.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೆ, ಅಂತಿಮ ವರ್ಷಗಳ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಕಾಲೇಜುಗಳ ವಿದ್ಯಾರ್ಥಿಗಳೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭದ ಸ್ಥಳಕ್ಕೆ ಕರೆ ತರಲು ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಬಸ್‌ ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್ ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಯುವನಿಧಿಗೆ ಈ ವರ್ಷ ನೋಂದಣಿಗೆ 5.29 ಲಕ್ಷ ಟಾರ್ಗೆಟ್ ಇದ್ದು, ಈವರೆಗೆ 61 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಯುವನಿಧಿ ಯೋಜನೆಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ನೋಂದಣಿ ಮಾಡುತ್ತಿದ್ದು, ನೋಂದಣಿ ಮಾಡಿದವರಿಗೆ ಹೆಚ್ಚುವರಿ ‌ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ