- ಹೊಸ ವಿಚಾರಣೆಗೆ ಆದೇಶ
---ಕನ್ನಡಪ್ರಭ ವಾರ್ತೆ ಬೆಂಗಳೂರು
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿರುವ ನ್ಯಾಯಾಲಯ, ಮುಂದಿನ 15 ದಿನಗಳಲ್ಲಿ ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಬೇಕು. ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿದೆ.
ತಮ್ಮನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಮಾಡಿ 2025ರ ಸೆ.18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.ಸೋಮವಾರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರ ಪೀಠದ ಈ ಆದೇಶ ಮಾಡಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ತಾರಾನಾಥ್ ಪೂಜಾರಿ, ಯಾವುದೇ ವ್ಯಕ್ತಿ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ವೇಳೆ ಕರ್ನಾಟಕ ಪೊಲೀಸ್ ಕಾಯ್ದೆ ನಿಗದಿಪಡಿಸಿರುವ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಗಡಿಪಾರು ಮಾಡಲು ಉದ್ದೇಶಿಸಿರುವ ವ್ಯಕ್ತಿ ಮೇಲಿನ ಆರೋಪಗಳು, ಅವರ ನಡವಳಿಕೆಗಳ ಕುರಿತು ಸಂಪೂರ್ಣ ವಿವರ, ಮಾಹಿತಿ ನೀಡಬೇಕು. ನಂತರ ಅವರ ವಾದ/ಅಹವಾಲು ಆಲಿಸಿ ಆದೇಶ ಹೊರಡಿಸಬೇಕು. ಪ್ರಕರಣದಲ್ಲಿ ಗಡಿಪಾರು ಆದೇಶ ಹೊರಡಿಸುವ ಮುನ್ನ ತಮ್ಮ ವಿವರಣೆ ನೀಡಲು ಅರ್ಜಿದಾರರಿಗೆ ಉಪ ವಿಭಾಗಾಧಿಕಾರಿಗಳು ಸೂಕ್ತ ಅವಕಾಶ ಕಲ್ಪಿಸಿಲ್ಲ. ಆದ್ದರಿಂದ ಗಡಿಪಾರು ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.ಸರ್ಕಾರಿ ವಕೀಲರು, ಉಪ ವಿಭಾಗಾಧಿಕಾರಿಯ ಆದೇಶವನ್ನು ಸಮರ್ಥಿಸಿಕೊಂಡಿದ್ದರು.
ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಮುನ್ನ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇದರಿಂದ ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ. ಪ್ರಕರಣದ ಕುರಿತು ಹೊಸದಾಗಿ ವಿಚಾರಣೆ ನಡೆಸಿ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.