ಸ್ವಾಭಿಮಾನಿ ಬಣದಿಂದ ಜನಜಾಗೃತಿ । ಕನ್ನಡ ಅಭಿವೃದ್ದಿ ಪ್ರಾಧಿಕಾರದ ಆದೇಶ ಅನುಷ್ಠಾನಗೊಳಿಸಲು ಆಗ್ರಹ
ಅಂಗಡಿ ಮುಗ್ಗಟುಗಳ ಮೇಲೆ ಕನ್ನಡ ನಾಮಫಲಕಗಳನ್ನು ಅಳವಡಿಸುವ ಮೂಲಕ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕೆಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆದೇಶವನ್ನು ಅನುಷ್ಠಾನಗೊಳಿಸಲು ಇಲ್ಲಿನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ತಾಲೂಕು ಅಧ್ಯಕ್ಷ ಬಿಟಿಸಿ ಸೀನಾ ಆಕ್ರೋಶ ವ್ಯಕ್ತಪಡಿಸಿದರು.
ಅಂಗಡಿಗಳ ಮೇಲೆ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಾಗೂ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ಕರವೇ ಸ್ವಾಭಿಮಾನಿ ಬಣದ ವತಿಯಿಂದ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅದೇಶದಂತೆ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ಹಾಗೂ ಶೇ.ರಷ್ಟು ಅನ್ಯ ಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸಬೇಕು ಆದರೆ ತಾಲೂಕಿನ ಬಹುತೇಕ ಅಂಗಡಿ ಮಾಲೀಕರು ಸರ್ಕಾರದ ಆದೇಶವನ್ನುಗಾಳಿಗೆ ತೂರಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಇಂಗ್ಲೀಷ್ ಸೇರಿದಂತೆ ಅನ್ಯಭಾಷೆಯ ನಾಮಫಲಕಗಳನ್ನು ಹೆಚ್ಚಾಗಿ ಅಳವಡಿಸಿದ್ದರೂ ಸಹ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾತ್ರ ಅನ್ಯ ಭಾಷೆಯ ನಾಮಫಲಕಗಳನ್ನು ತೆರೆವುಗೊಳಿಸುವ ಕ್ರಮಕ್ಕೆ ಮುಂದಾಗಿಲ್ಲ ಅಲ್ಲದೆ ಪ್ರಾಧಿಕಾರದ ಆದೇಶವನ್ನು ಅನುಷ್ಠಾನಕ್ಕೆ ತರುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.ಕನ್ನಡ ಭಾಷೆ ಉಳಿಸಿ ಬೆಳೆಸಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ. ಕನ್ನಡ ಭಾಷೆಗೆ ಮೊದಲ ಆದ್ಯತೆಯನ್ನು ಕನ್ನಡಿಗರಾದ ನಾವು ನೀಡಬೇಕಾಗಿದೆ. ಇತರೆ ಭಾಷೆಗಳ ಮೇಲೆ ನಮಗೆ ಯಾವುದೇ ದ್ವೇಶವಿಲ್ಲ, ಅನ್ಯಭಾಷಿಗರನ್ನು ಪ್ರೀತಿಸಿ ಗೌರವಿಸೋಣ ಆದರೆ ನಮ್ಮ ನೆಲ,ಜಲ ಬಳಸಿಕೊಂಡು ವ್ಯಾಪಾರ ವಹಿವಾಟು ನಡೆಸುವ ಅನ್ಯಭಾಷಿಕರಿಗೆ ಕನ್ನಡ ಭಾಷೆ ಕಲಿಯುವುದಲ್ಲದೆ ತಮ್ಮ ಅಂಗಡಿಗಳ ಮೇಲೆ ಕನ್ನಡ ಭಾಷೆಯಲ್ಲಿ ನಾಮಫಲಕಗಳನ್ನು ಹಾಕಬೇಕೆಂದರು.
ಇದಕ್ಕೂ ಮೊದಲು ಡಾ.ಎಚ್.ಎನ್.ವೃತ್ತದಿಂದ ಪಟ್ಟಣದ ಮುಖ್ಯರಸ್ತೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಹಾಕುವಂತೆ ಕರವೇ ಕಾರ್ಯಕರ್ತರು, ಸಾಹಿತಿಗಳು, ಕನ್ನಡ ಅಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಮೆರವಣಿಗೆ ನಡೆಸುವ ಮೂಲಕ ಜನಜಾಗೃತಿ ಮೂಡಿಸಿದರು. ನಂತರ ಕರವೇ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿ ರುದ್ರಮ್ಮ ಶರಣಪ್ಪ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಬಾಗೇಪಲ್ಲಿಯಲ್ಲಿ ಕರವೇ ಸ್ವಾಭಿಮಾನಿ ಬಣದ ವತಿಯಿಂದ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಕರವೇ ತಾಲೂಕು ಅಧ್ಯಕ್ಷ ಬಿಟಿಸಿ ಸೀನಾ ಚಾಲನೆ ನೀಡದರು.