ವಿಷ್ಣು, ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ದಿನಾಂಕ ‌ನಿಗದಿಗೆ ಸಿಎಂಗೆ ಕಡತ ಸಲ್ಲಿಕೆ

KannadaprabhaNewsNetwork |  
Published : Aug 19, 2026, 01:45 AM IST
17ಕೆಎಂಎನ್ ಡಿ31 | Kannada Prabha

ಸಾರಾಂಶ

ನಟ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರವಾಗಿ 2025-26‌ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲು 2025ರ ಸೆಪ್ಟೆಂಬರ್ 12ರಂದು ಸರ್ಕಾರ ಆದೇಶ ಹೊರಡಿಸಿದ್ದನ್ನು ಸ್ಮರಿಸಬಹುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಚಲನಚಿತ್ರ ನಟ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರವಾಗಿ 2025-26‌ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ, ಸಮಯ ಮತ್ತು ಸ್ಥಳ ನಿಗದಿ ಕೋರಿ ಮುಖ್ಯಮಂತ್ರಿಯವರಿಗೆ ಕಡತ ಸಲ್ಲಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡರು, ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿ ಎಂದು ಆಗ್ರಹಿಸಿ ಒಂದು ವರ್ಷ ಸಮೀಪಿಸುತ್ತಿದ್ದರೂ ಪ್ರಶಸ್ತಿ ಪ್ರದಾನ ಮಾಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ.

ನಟ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರವಾಗಿ 2025-26‌ನೇ ಸಾಲಿನ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲು 2025ರ ಸೆಪ್ಟೆಂಬರ್ 12ರಂದು ಸರ್ಕಾರ ಆದೇಶ ಹೊರಡಿಸಿದ್ದನ್ನು ಸ್ಮರಿಸಬಹುದು.

ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು, ಎಸ್.ಎಂ.ಕೃಷ್ಣ ಹಾಗೂ ಚಲನಚಿತ್ರ ನಟ ಅಂಬರೀಷ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿಗಳು ಸ್ವೀಕೃತವಾಗಿದ್ದು, ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.ಮಂಡ್ಯ ವಿವಿ: ಅತಿಥಿ ಉಪನ್ಯಾಸಕರ ವೇತನ ಗೊಂದಲ, ಸಮಸ್ಯೆ ಇತ್ಯರ್ಥಕ್ಕೆ ಸಿಎಂ ಸೂಚನೆ

ಮಂಡ್ಯ:

ಮಂಡ್ಯ ವಿಶ್ವವಿದ್ಯಾಲಯಕ್ಕೆ ನೇಮಕಗೊಂಡಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಈ ಹಿಂದಿನಂತೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತು ಉಂಟಾಗಿರುವ ಸಮಸ್ಯೆಯನ್ನು ಶೀಘ್ರ ಇತ್ಯರ್ಥಪಡಿಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶಾಸಕರಾದ ಮಧು ಜಿ.ಮಾದೇಗೌಡ ಮತ್ತು ಪಿ.ರವಿಕುಮಾರ್ ಅವರು ಭೇಟಿ ಮಾಡಿ, ವಿಶ್ವವಿದ್ಯಾಲಯವು ಎದುರಿಸುತ್ತಿರುವ ಆರ್ಥಿಕ ಸಂಕಷ್ಟದ ಕುರಿತು ವಿವರಿಸಿದರು.

ಮಂಡ್ಯ ವಿವಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 150ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ವಾರ್ಷಿಕವಾಗಿ ವೇತನ ಪಾವತಿಸಲು ಅಂದಾಜು 6 ಕೋಟಿ ರುಪಾಯಿ ಅನುದಾನದ ಅವಶ್ಯಕತೆ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಮಂಡ್ಯ ವಿವಿಯಲ್ಲಿ ಅಷ್ಟೂ ಉಪನ್ಯಾಸಕರಿಗೆ ವೇತನ ಪಾವತಿಸಲು ಆಗುವುದಿಲ್ಲ ಎಂದರು.ಈಗಿನ ಆದೇಶದಿಂದ ವಿವಿಯ ಅಸ್ತಿತ್ವ, ಅತಿಥಿ ಉಪನ್ಯಾಸಕರ ಮೇಲಷ್ಟೇ ಆಗದೆ ಉನ್ನತ ಶಿಕ್ಷಣದ ಕನಸು ಹೊಂದಿರುವ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಮೇಲೂ ಆಗಲಿದೆ. ಹಾಗೇ, ವೇತನ ಪಾವತಿ ವಿಷಯವು ಮುಖ್ಯಮಂತ್ರಿಗಳಿಂದ ಅನುಮೋದನೆ ಆಗಿದೆ ಎಂದು ಹೇಳಿ ಅಧಿಕಾರಿಗಳು ಸಮಸ್ಯೆ ಪರಿಹರಿಸುತ್ತಿಲ್ಲ. ತಾವು ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಶಾಸಕದ್ವಯರು ವಿನಂತಿಸಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಪರಿಶೀಲಿಸಿ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ ಎಂದು ಉಪಸ್ಥಿತರಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖರ್ಗೆ ಭಾಷಣ ಮಾಡಿದ ಸ್ಥಳ ಸ್ವಚ್ಛ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ನದಿಗೆ ನೀರು ಬಿಡುಗಡೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ