ಕನ್ನಡಪ್ರಭ ವಾರ್ತೆ ಮಂಗಳೂರು:
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಮಟ್ಟದ ಸಮಿತಿ ಹಾಗೂ ರಾಜ್ಯಮಟ್ಟದಲ್ಲಿ ಪ್ರತ್ಯೇಕ ಸಮಿತಿ ರಚಿಸಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಣ್ಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ, ಒಂದು ವರ್ಷದೊಳಗೆ ಅಂತಿಮ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಪಿಲಿಕುಳ ನಿಸರ್ಗಧಾಮದಲ್ಲಿ ಅವರು ಭಾನುವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ವಿಧಾನಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಎಲ್ಲ ಪಕ್ಷಗಳೂ ಬೆಂಬಲ ಸೂಚಿಸಿವೆ. ಆದರೆ, ಈವರೆಗೆ ಭೌತಿಕ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ಅಂತಿಮ ವರದಿ ಸಲ್ಲಿಸುವ ಕಾರ್ಯ ನಡೆದಿರಲಿಲ್ಲ. ಈ ಬಾರಿ ಸರ್ಕಾರ ಭೌತಿಕ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಈಗಾಗಲೇ ಬಹುತೇಕ ದಾಖಲೆಗಳು ಸರ್ಕಾರದ ಬಳಿ ಇವೆ. ಆದರೂ, ಅಂತಿಮಗೊಳಿಸುವ ಮೊದಲು ಮತ್ತೊಮ್ಮೆ ಜಂಟಿ ಸಮೀಕ್ಷೆ ನಡೆಸಿ ವ್ಯತ್ಯಾಸಗಳಿದ್ದರೆ ಸರಿಪಡಿಸಲಾಗುವುದು. ಇದರಿಂದ ಭವಿಷ್ಯದಲ್ಲಿ ಯಾವುದೇ ಗೊಂದಲ ಅಥವಾ ಆಕ್ಷೇಪಗಳಿಗೆ ಅವಕಾಶವಿರುವುದಿಲ್ಲ ಎಂದವರು ಸ್ಪಷ್ಟಪಡಿಸಿದರು. .ಪರ್ಯಾಯ ಭೂಮಿ ಕೊಟ್ಟರೆ ಮಾತ್ರ ಮೇಕೆದಾಟುಗೆ ಅರಣ್ಯ ಜಾಗ:ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಯೋಜನೆಗೆ ಅಗತ್ಯವಿರುವ ಸುಮಾರು 13 ಸಾವಿರ ಎಕರೆ ಅರಣ್ಯ ಭೂಮಿಗೆ ಪರ್ಯಾಯ ಭೂಮಿ ಒದಗಿಸಿದರೆ ಮಾತ್ರ ಅದನ್ನು ಬಿಟ್ಟು ಕೊಡಲು ಸಾಧ್ಯ. ಯಾವುದೇ ಕಾರಣಕ್ಕೂ ಪರ್ಯಾಯ ಭೂಮಿ ಇಲ್ಲದೆ ಒಂದು ಅಡಿಯಷ್ಟು ಅರಣ್ಯ ಭೂಮಿಯನ್ನೂ ಬೇರೆ ಇಲಾಖೆಗೆ ಅಥವಾ ಖಾಸಗಿ ಉದ್ದೇಶಕ್ಕೆ ನೀಡಲು ಸಾಧ್ಯವಿಲ್ಲ. ಇದು ದೇಶಾದ್ಯಂತ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.